ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ರಾಜ್ಯದಲ್ಲಿ ಮೋದಿ ಅಲೆ ಇಲ್ಲ

Vishwanath S
Updated On : 2 Apr 2014, 11:15 am

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಏ. 1
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕರ್ನಾಟಕಕ್ಕೆ ಅದೆಷ್ಟು ಬಾರಿ ಭೇಟಿ ನೀಡಿದರೂ ತಮ್ಮ ಪರ ಅಲೆ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ೤ ಜಿ. ಪರಮೇಶ್ವರ್ ಹೇಳಿದರು.
ಬಿಜಾಪುರದಲ್ಲಿ ಚುನಾವಣಾ ಪ್ರಚಾರ ಮುಗಿಸಿದ ಬಳಿಕ ಬೆಂಗಳೂರಿಗೆ ಮರಳುವ ಮಾರ್ಗ ಮಧ್ಯದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ರಾಜ್ಯಕ್ಕೆ ಈಗಾಗಲೇ 4-5 ಬಾರಿ ಭೇಟಿ ನೀಡಿದರೂ ಅವರ ಅಲೆ ಹೆಚ್ಚಾಗುತ್ತಿಲ್ಲ. ರಾಜ್ಯದಲ್ಲಿ ಮೊದಲಿನಿಂದಲೂ ಮೋದಿ ಅಲೆ ಕಾಣುತ್ತಿಲ್ಲ. ಇದೇ ಕಾರಣಕ್ಕಾಗಿ ಇನ್ನೂ 4-5 ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರಂತೆ ಎಂದರು.
ಜಿಲ್ಲಾ ಮುಖಂಡರಿಂದ ಬಂದಿರುವ ಮಾಹಿತಿ ಪ್ರಕಾರ ಹಾಗೂ ಇದುವರೆಗೆ ತಾವು ಮಾಡಿರುವ ಚುನಾವಣಾ ಪ್ರವಾಸದ ಆಧಾರದ ಮೇಲೆ ರಾಜ್ಯದ ಕನಿಷ್ಠ 22 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಈ ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬುಧವಾರದಿಂದ ಪ್ರಚಾರ ನಡೆಸಲಿದ್ದು, ಬೆಳಗಾವಿ, ಹುಬ್ಬಳ್ಳಿ-ಧಾರವಾಡಕ್ಕೂ ಆಗಮಿಸಲಿದ್ದಾರೆ. ಇನ್ನೂ ಹೆಚ್ಚು ಸ್ಟಾರ್ ಪ್ರಚಾರಕರನ್ನು ರಾಜ್ಯಕ್ಕೆ ಕರೆಯಿಸುವ ಬಗ್ಗೆ ಪ್ರಯತ್ನಿಸಲಾಗುತ್ತಿದೆ ಎಂದರು.
ಜೆಡಿಎಸ್ ಲೆಕ್ಕಕ್ಕಿಲ್ಲ: ರಾಜ್ಯದಲ್ಲಿ ಜೆಡಿಎಸ್ ಲೆಕ್ಕಕ್ಕೆ ಇಲ್ಲ. ಜೆಡಿಎಸ್‌ಗೆ ಸ್ಪರ್ಧೆಗಿಳಿಸಲು ಅಭ್ಯರ್ಥಿಗಳೇ ಸಿಗಲಿಲ್ಲ. ಟಿಕೆಟ್ ವಂಚಿತ ಕಾಂಗ್ರೆಸ್ಸಿಗರನ್ನು ತನ್ನೆಡೆ ಸೆಳೆದುಕೊಂಡು ಚುನಾವಣಾ ಕಣದಲ್ಲಿಳಿಸುವ ಯತ್ನ ಜೆಡಿಎಸ್ ಮಾಡಿದೆ. ಉತ್ತರ ಕನ್ನಡ ಹಾಗೂ ಕೊಪ್ಪಳದಲ್ಲಂತೂ ಆ ಪಕ್ಷಕ್ಕೆ ಅಭ್ಯರ್ಥಿಗಳೇ ಇಲ್ಲದಂತಾಯಿತು. ಕಾಂಗ್ರೆಸ್ ಯಾವುದೇ ಕ್ಷೇತ್ರದಲ್ಲಿ ಬಿಜೆಪಿ ಅಥವಾ ಜೆಡಿಎಸ್‌ನೊಂದಿಗೆ ಒಳ ಒಪ್ಪಂದ ಮಾಡಿಕೊಂಡಿಲ್ಲ. ಒಳ ಒಪ್ಪಂದದ ಸಂಸ್ಕೃತಿ ಕಾಂಗ್ರೆಸ್‌ನಲ್ಲಿ ಇಲ್ಲ. ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡರು ಜೆಡಿಎಸ್‌ನೊಂದಿಗೆ ಒಳ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇದೆ. ಕಾಂಗ್ರೆಸ್ ಮುಖಂಡರು ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆಂಬ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡ ಅವರ ಮಾತಿನಲ್ಲಿ ಸತ್ಯಾಂಶ ಇಲ್ಲ. ಅಂಥ ಒಳ ಒಪ್ಪಂದದ ಬಗ್ಗೆ ದಾಖಲೆ ಇದ್ದಲ್ಲಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement