ಚುನಾವಣೆ ಬಳಿಕ ಕಾಂಗ್ರೆಸ್ ನಿರ್ನಾಮ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಏ. 10
ಲೋಕಸಭೆ ಚುನಾವಣೆ ಮತ ಎಣಿಕೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹುಡುಕುವಂಥ ಸ್ಥಿತಿ ಉದ್ಭವಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಹೇಳಿದ್ದಾರೆ.
ನಗರದ ಉಣಕಲ್ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಪರ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಬೀದಿ ನಾಟಕ ಉದ್ಘಾಟಿಸಿದ ನಂತರ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಮೋದಿ ಅಲೆಯೇ ಇಲ್ಲವೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಎಸ್.ಎಂ. ಕೃಷ್ಣ ಹೇಳಿದ್ದು, ಮೇ 16ರ ನಂತರ ಕಾಂಗ್ರೆಸ್ ನೆಲೆ ಹುಡುಕುವ ಪರಿಸ್ಥಿತಿ ರಾಜ್ಯದ ಮುಖಂಡರಿಗೆ ಒದಗಲಿದೆ ಎಂದರು. ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ. ಈ ಬಾರಿಯ ಲೋಕಸಭೆ ಚುನಾವಣೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದೆ ಎಂದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಮ. ನಾಗರಾಜ, ಬಿಜೆಪಿ ಸ್ಥಳೀಯ ಮುಖಂಡರಾದ ಮಲ್ಲಿಕಾರ್ಜುನ ಸಾವುಕಾರ, ವೀರೇಶ ಸಂಗಳದ, ತಿಪ್ಪಣ್ಣ ಮಜ್ಜಗಿ ಮತ್ತಿತರರು ಹಾಜರಿದ್ದರು. ನಂತರ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಪರವಾಗಿ ಜಗದೀಶ ಶೆಟ್ಟರ್ ಹಾಗೂ ಬಿಜೆಪಿ ಮುಖಂಡರು ಉಣಕಲ್ಲ ಸಂತೆಯಲ್ಲಿ ಪಾದಯಾತ್ರೆ ಮೂಲಕ ಮತ ಯಾಚಿಸಿದರು.