ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಸಿಎಂ ಸಿದ್ದು, ಕೇಜ್ರಿವಾಲ್‌ವಿರುದ್ಧ ಸಂಸದ ಜೋಶಿ ಕಿಡಿ

Vishwanath S
Updated On : 2 Feb 2014, 12:08 pm

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಫೆ. 1
ರಾಜ್ಯ ಬಿಜೆಪಿ ಮುಖಂಡರನ್ನು ಭ್ರಷ್ಟಾಚಾರದ ಪಟ್ಟಿಯಲ್ಲಿ ಸೇರಿಸಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಅಧಿವೇಶನ ಸಂದರ್ಭದಲ್ಲಿ ಬಿಜೆಪಿ ಶಾಸಕರ ಅನುಪಸ್ಥಿತಿಯಲ್ಲಿ ಹಿಂದೂಪರ ಸಂಘಟನೆಗಳಿಗೆ ಕೋಮು ಸೌಹಾರ್ದತೆ ಕದಡದಂತೆ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಮೋದಿ ಜೊತೆ ಚಹಾ ಚರ್ಚೆ' ಟೀ ಸ್ಟಾಲ್‌ನ್ನು ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಉದ್ಘಾಟಿಸಿದ ನಂತರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜೋಶಿ, ಬಿಜೆಪಿ ಮುಖಂಡರಾದ ಅನಂತಕುಮಾರ ಹಾಗೂ ಬಿ.ಎಸ್. ಯಡಿಯೂರಪ್ಪ ಅವರನ್ನು ಭ್ರಷ್ಟರ ಪಟ್ಟಿಯಲ್ಲಿ ಸೇರಿಸಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕ್ರಮ ಟೀಕಿಸಿದ್ದಾರೆ.
ಭ್ರಷ್ಟಾಚಾರದ ವಿರುದ್ಧ ಮಾತನಾಡುವ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ನಿರ್ಗಮಿತ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸರ್ಕಾರದಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ತನಿಖೆಗೆ 15 ದಿನಗಳಲ್ಲಿ ಎಫ್‌ಐಆರ್ ದಾಖಲಿಸುವುದಾಗಿ ನೀಡಿದ್ದ ಹೇಳಿಕೆಯನ್ನು ಮರೆತಿದ್ದೇಕೆ ಎಂದು ಜೋಶಿ ಪ್ರಶ್ನಿಸಿದ್ದಾರೆ.
ಕೇಂದ್ರ ಹಾಗೂ ದಿಲ್ಲಿಯಲ್ಲಿ ಸಾವಿರಾರು ಕೋಟಿ ರುಪಾಯಿಗಳ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಜತೆ ಕೈಜೋಡಿಸಿ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಕೇಜ್ರಿವಾಲ್‌ರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ. ತಮ್ಮ ಸಚಿವ ಸಂಪುಟದ ಸಹೋದ್ಯೋಗಿಯೊಬ್ಬರ ಮೇಲೆ ಭ್ರಷ್ಟಾಚಾರದ ಆರೋಪ ಇದ್ದರೂ ಅವರ ವಿರುದ್ಧ ಯಾವುದೇ ಕ್ರಮವನ್ನು ಸಿಎಂ ಕೇಜ್ರಿವಾಲ್ ತೆಗೆದುಕೊಂಡಿಲ್ಲ ಎಂದು ದೂರಿದರು. ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಗೈರು ಹಾಜರಿದ್ದಾಗ ಹಿಂದೂ ಸಂಘಟನೆಗಳಿಗೆ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಜೋಶಿ, ರಾಜ್ಯದ ವಿವಿಧೆಡೆ ಬಾಂಬ್ ಸ್ಫೋಟಿಸುವ ಮೂಲಕ ಅರಾಜಕತೆ ಸೃಷ್ಟಿಸಲು ಯತ್ನಿಸಿದ್ದ ಸಂಘಟನೆಗಳು ಮುಖ್ಯಮಂತ್ರಿಯವರಿಗೆ ಕಾಣಿಸುವುದಿಲ್ಲವೇ? ಎಂದು ಪ್ರಶ್ನಿಸಿದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಂಬ್ ಸ್ಫೋಟದ ಹಿಂದಿರುವ ಸಂಘಟನೆಗಳ ಬಗ್ಗೆ ಮಾತನಾಡುವ ಧೈರ್ಯ ಮುಖ್ಯಮಂತ್ರಿಯವರಿಗಿಲ್ಲ. ಧಾರವಾಡದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಯುವಕರು ಈ ಸರ್ಕಾರಕ್ಕೆ ಕಾಣಿಸುವುದಿಲ್ಲ. ಮಂಗಳೂರಿನಲ್ಲಿ ಗ್ಯಾಂಗ್ ರೇಪ್ ನಡೆಸಿದವರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.
ಮತ ಬ್ಯಾಂಕ್ ರಾಜಕೀಯದ ಉದ್ದೇಶದಿಂದ ಹಿಂದೂಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ರಮ ಖಂಡನೀಯ. ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡುವ ಹಾಗೂ ಬಾಂಬ್ ಸ್ಫೋಟ, ರೇಪ್‌ಗಳಂಥ ಕಾರ್ಯವೆಸಗುವ ಸಂಘಟನೆಗಳ ವಿರುದ್ಧ ಮುಖ್ಯಮಂತ್ರಿ ಕ್ರಮಕೈಗೊಳ್ಳಲಿ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement