6ರಿಂದ ಕೃಷಿ ಉತ್ಸವ, ಪ್ರಗತಿ ಚಿಂತನಾ ಸಮಾವೇಶ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಫೆ. 3
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧಾರವಾಡ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಫೆ. 6 ಮತ್ತು 7ರಂದು ಜಿಲ್ಲಾ ಮಟ್ಟದ ಕೃಷಿ ಉತ್ಸವ ಹಾಗೂ ಪ್ರಗತಿ ಚಿಂತನಾ ಸಮಾವೇಶ-2014ನ್ನು ಹಮ್ಮಿಕೊಳ್ಳಲಾಗಿದೆ.
ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ, ಕೃಷಿ ಇಲಾಖೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಸಹಕಾರಿ ಇಲಾಖೆಗಳು, ಸ್ಥಳೀಯ ಸಂಘ-ಸಂಸ್ಥೆಗಳು ಮತ್ತು ದಾನಿಗಳ ಸಹಕಾರದೊಂದಿಗೆ ನೆಹರು ಕ್ರೀಡಾಂಗಣದಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ ಎಂದು ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಫೆ. 6ರಂದು ಬೆಳಗ್ಗೆ 11ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಮಾವೇಶ ಉದ್ಘಾಟಿಸಲಿದ್ದು, ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಸ್ತು ಪ್ರದರ್ಶನವನ್ನು ಶಾಸಕ ಅರವಿಂದ ಬೆಲ್ಲದ, ಜಾನಪದ ಕರಕುಶನ ಪ್ರದರ್ಶನವನ್ನು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಜಾನುವಾರು ಪ್ರದರ್ಶನವನ್ನು ಶಾಸಕ ವಿನಯ ಕುಲಕರ್ಣಿ, ಮೆಣಸಿನಕಾಯಿ ಮೇಳವನ್ನು ವಿಧಾನ ಪರಿಷತ್ ಸದಸ್ಯ ನಾಗರಾಜ ಛಬ್ಬಿ ಉದ್ಘಾಟಿಸುವರು. ಮಹಾನಗರ ಪಾಲಿಕೆ ಆಯುಕ್ತ ರಮಣದೀಪ ಚೌಧರಿ, ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಚ್.ಎಸ್. ವಿಜಯಕುಮಾರ ಅತಿಥಿಗಳಾಗಿದ್ದು, ಶಾಸಕ ಪ್ರಸಾದ ಅಬ್ಬಯ್ಯ ಅಧ್ಯಕ್ಷತೆ ವಹಿಸುವರು.
ಇದಕ್ಕೂ ಮೊದಲು ಬೆಳಗ್ಗೆ 10ಕ್ಕೆ ಜಾನಪದ ಕಲಾ ಪ್ರದರ್ಶನ ಮತ್ತು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಬೆಳಗ್ಗೆ 10.30ಕ್ಕೆ ಚೆನ್ನಮ್ಮ ವೃತ್ತದಿಂದ ಪ್ರಾರಂಭಗೊಳ್ಳುವ ಮೆರವಣಿಗೆಯಲ್ಲಿ ಡಾ. ವೀರೇಂದ್ರ ಹೆಗ್ಗಡೆ, ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮತ್ತಿತರರು ಪಾಲ್ಗೊಳ್ಳುವರು.
ಫೆ. 7ರಂದು ಮಧ್ಯಾಹ್ನ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ ವಹಿಸುವರು. ಸಂಸದ ಪ್ರಹ್ಲಾದ ಜೋಶಿ, ಶಾಸಕರಾದ ಎನ್.ಎಚ್. ಕೋನರಡ್ಡಿ, ಸಿ.ಎಸ್. ಶಿವಳ್ಳಿ, ಶ್ರೀನಿವಾಸ ಮಾನೆ ಮುಂತಾದವರು ಪಾಲ್ಗೊಳ್ಳುವರು.
ಈ ಸಮಾವೇಶದಲ್ಲಿ ಕೃಷಿ ಯಂತ್ರೋಪಕರಣಗಳ ಪ್ರದರ್ಶನದೊಂದಿಗೆ ಸರ್ಕಾರಿ ಇಲಾಖೆಗಳ ಮಾಹಿತಿ ಕೇಂದ್ರಗಳು, ಅಧಿಕಾರಿಗಳೊಂದಿಗೆ ಸಂವಾದ, ಜೈವಿಕ ಗೊಬ್ಬರಗಳ ಮಳಿಗೆ, ನೀರಾವರಿ ವಿಧಾನಗಳ ಪರಿಚಯ, ಸ್ವಸಹಾಯ ಸಂಘಗಳ ಉತ್ಪನ್ನಗಳ ಮಾರಾಟ ಮಳಿಗೆ, ಸಾವಯವ ಕೃಷಿ ಪ್ರಾತ್ಯಕ್ಷಿಕೆಗಳು, ಮೆಣಸಿನಕಾಯಿ ಮೇಳ, ವಿಚಾರಗೋಷ್ಠಿಗಳು ಹಾಗೂ ಮತ್ತಿತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರತಿ ದಿನ 50 ಸಾವಿರದಿಂದ 1 ಲಕ್ಷದವರೆಗೆ ರೈತರು ಹಾಗೂ ಸಾರ್ವಜನಿಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಮಾವೇಶದ ಕುರಿತು ಈಗಾಗಲೇ ಪ್ರತಿ ಹಳ್ಳಿಗಳಲ್ಲಿ ಪ್ರಚಾರ ಮಾಡಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಯಶಸ್ಸು ಸಾಧಿಸಿರುವುದರಿಂದ ಈ ಸಮಾವೇಶಕ್ಕೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ ಎಂದು ಕೊರವಿ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧಾರವಾಡ ಜಿಲ್ಲೆಯ ನಿರ್ದೇಶಕ ಎಸ್. ಸೀತಾರಾಮ ಶೆಟ್ಟಿ, ವೀರಭದ್ರಪ್ಪ ಹಾಲಹರವಿ ಮತ್ತಿತರರು ಹಾಜರಿದ್ದರು.