ಇಂದು ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ
ಧಾರವಾಡ: ಕರ್ನಾಟಕ ಕಾಲೇಜು ಮೈದಾನದಲ್ಲಿ ಫೆ. 9ರಸಂಜೆ 6ಕ್ಕೆ ನಡೆಯುವ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆ ಮುಗಿದಿವೆ ಎಂದು ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ ತಿಳಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ 2010-11, 2011-12ನೇ ಸಾಲಿನ 80 ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ಪ್ರದಾನ ವೇಳೆ ಮಧ್ಯೆ ಮಧ್ಯೆ ಸಂಗೀತ, ನೃತ್ಯ ಕಾರ್ಯಕ್ರಮಗಳು ನಡೆಯಲಿವೆ. ಧಾರವಾಡದ ಜೆಎಸ್ಸೆಸ್ ಕಾಲೇಜಿನ 125 ವಿದ್ಯಾರ್ಥಿಗಳು ನಾಡಗೀತೆ ಪ್ರಸ್ತುತಪಡಿಸಲಿದ್ದಾರೆ.
ಎರಡೂ ವರ್ಷದ ಡಾ. ರಾಜಕುಮಾರ್ ಪ್ರಶಸ್ತಿ, ಡಾ. ವಿಷ್ಣುವರ್ಧನ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ( 2 ಲಕ್ಷ ನಗದು, ಚಿನ್ನದ ಪದಕ) ಸೇರಿದಂತೆ ಅತ್ಯುತ್ತಮ ನಟ, ನಟಿ, ನಿರ್ದೇಶಕ, ನಿರ್ಮಾಪಕ, ಪೋಷಕ ನಟ, ಅತ್ಯುತ್ತಮ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ಪುರಸ್ಕೃತರಲ್ಲಿ ಕೆಲವರು ಹಾಡುಗಳಿಗೆ ಹೆಜ್ಜೆ ಹಾಕಲಿದ್ದಾರೆ. ಚಿತ್ರರಂಗದ ಇತರು ಕಲಾವಿದರೂ ಭಾಗವಹಿಸಲಿದ್ದಾರೆ ಎಂದರು.
ಸ್ಥಳೀಯ ಸಾಹಿತಿಗಳು, ಕಲಾವಿದರು, ಗಣ್ಯರನ್ನು ಆಹ್ವಾ ನಿಸಿದ್ದು, 20 ಸಾವಿರ ಆಸನ ವ್ಯವಸ್ಥೆ ಕಲ್ಪಿಸಿದೆ. 6 ಬೃಹತ್ ಎಲ್‌ಇಡಿ ಪರದೆ ಅಳವಡಿಸಲಾಗಿದೆ. ಸಚಿವರಾದ ಎಚ್.ಕೆ. ಪಾಟೀಲ, ದಿನೇಶ ಗುಂಡೂರಾವ್, ಉಮಾಶ್ರೀ, ಮಾಜಿ ಸಿಎಂ ಜಗದೀಶ ಶೆಟ್ಟರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್.ಡಿ. ಗಂಗರಾಜು, ಶಾಸಕ ಅರವಿಂದ ಬೆಲ್ಲದ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.