ಹುಬ್ಬಳ್ಳಿಗೆ ಬಂದಿಳಿದ ನರೇಂದ್ರ ಮೋದಿ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಫೆ. 18
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮಂಗಳವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ಬಂದಿಳಿದರು.
ದಾವಣಗೆರೆ ಹಾಗೂ ಮಂಗಳೂರಿನಲ್ಲಿ ನಡೆಯಲಿದ್ದ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳುವುದಕ್ಕೆ ತೆರಳುತ್ತಿದ್ದ ಮೋದಿ, ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಕೆಲ ನಿಮಿಷ ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ನಡೆಸಿದರು.
ಅಹ್ಮದಾಬಾದ್ನಿಂದ ನೇರವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ ಸುಮಾರು 11.40ಕ್ಕೆ ಬಂದಿಳಿದ ನರೇಂದ್ರ ಮೋದಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿಯವರ ಮಾಜಿ ಸಂಸದೀಯ ಕಾರ್ಯದರ್ಶಿ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಶಾಸಕರಾದ ಅಶೋಕ ಕಾಟವೆ, ಮೋಹನ ಲಿಂಬಿಕಾಯಿ, ವೀರಭದ್ರಪ್ಪ ಹಾಲಹರವಿ, ಮಹಾನಗರ ಜಿಲ್ಲಾಧ್ಯಕ್ಷ ಲಿಂಗರಾಜ ಪಾಟೀಲ, ಮಹೇಶ ಟೆಂಗಿನಕಾಯಿ ಮತ್ತಿತರರು ಸ್ವಾಗತಿಸಿದರು.
ಅನಂತರ ಮಧ್ಯಾಹ್ನ ಸುಮಾರು 12ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಅವರೊಂದಿಗೆ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳಿದರು. ಈ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.