ನಾಳೆ ಪ್ರೊ. ಬಾಲಸುಬ್ರಹ್ಮಣ್ಯರಿಗೆ ಗುರುವಂದನೆ
ಕನ್ನಡಪ್ರಭ ವಾರ್ತೆ, ಧಾರವಾಡ, ಫೆ. 21
ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಎ.ಎಸ್. ಬಾಲಸುಬ್ರಹ್ಮಣ್ಯ ಅವರ ಸೇವಾ ನಿವೃತ್ತಿ ನಿಮಿತ್ತ ಫೆ. 23ರಂದು ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಗುರುವಂದನೆ ಹಾಗೂ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.
ಈ ವಿಭಾಗಕ್ಕೆ ಮೂರೂವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿದ ಬಾಲಸುಬ್ರಹ್ಮಣ್ಯ ಅವರಿಗೆ ಫೆ. 23ರ ಭಾನುವಾರ ಕವಿವಿಯ ಮಾನಸೋಲ್ಲಾಸ ಸಭಾಭವನದಲ್ಲಿ ಗುರುವಂದನೆ ನಡೆಯಲಿದ್ದು, ಅಂದು ಬೆಳಗ್ಗೆ 10ಕ್ಕೆ ವಿಚಾರ ಸಂಕಿರಣ ಜರುಗಲಿದೆ. ಬದಲಾಗುತ್ತಿರುವ ಭಾರತದಲ್ಲಿ ಮಾಧ್ಯಮಗಳ ಪಾತ್ರ ಕುರಿತು ಪ್ರೊ. ಎ.ಎಸ್. ಬಾಲಸುಬ್ರಹ್ಮಣ್ಯ ಪ್ರಾಸ್ತಾವಿಕ ನುಡಿ ಹೇಳಲಿದ್ದಾರೆ. ನಾಡೋಜ ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಪ್ರಧಾನ ಭಾಷಣ ಮಾಡಲಿದ್ದಾರೆ.
ಅದೇ ಸಭಾಂಗಣದಲ್ಲಿ ಮಧ್ಯಾಹ್ನ 12.15ಕ್ಕೆ ಅಂತರಸಂತೆಯ ಪ್ರೊ. ಎ.ಎಸ್. ಬಾಲಸುಬ್ರಹ್ಮಣ್ಯ ಅವರಿಗೆ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಗುರುವಂದನೆ ನಡೆಯಲಿದೆ. ವಿಭಾಗದ ಸಹ ಪ್ರಾಧ್ಯಾಪಕ ಡಾ. ಜೆ.ಎಂ. ಚಂದುನವರ ಹಾಗೂ ಅವರ ತಂಡ ಅವರ ಬಗ್ಗೆ ನಿರ್ಮಿಸಿದ ಕಿರುಚಿತ್ರ ಪ್ರದರ್ಶನದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ದಿನೇಶ ಅಮೀನಮಟ್ಟು, ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ ಭಾಗವಹಿಸುತ್ತಾರೆ. ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎಚ್.ಬಿ. ವಾಲೀಕಾರ ವಿಶೇಷ ಆಹ್ವಾನಿತರಾಗಿ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಲಿದ್ದಾರೆ. ಮಧ್ಯಾಹ್ನ ವಿಭಾಗದ ಹಳೆಯ ವಿದ್ಯಾರ್ಥಿಗಳಿಂದ 'ಕೊನೆ ನಮಸ್ಕಾರ' ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯಾಧ್ಯಕ್ಷ ಬಸವರಾಜ ಕಂಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮಾಧ್ಯಮ ಸಂಯೋಜಕ ಪ್ರಸನ್ನಕುಮಾರ ಹಿರೇಮಠ ಮೊ: 9448248458ನ್ನು ಸಂಪರ್ಕಿಸಬಹುದು.