ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಸೇವೆ ಕಾಯಂಗೆ ಪೌರ ಕಾರ್ಮಿಕರ ಒತ್ತಾಯ

Mainashree
Updated On : 9 Jan 2014, 10:32 am

ಹುಬ್ಬಳ್ಳಿ: ಅವಳಿ ನಗರ ಸ್ವಚ್ಛತೆಗೆ ಮಹಾನಗರ ಪಾಲಿಕೆ ಹೊರಗುತ್ತಿಗೆ ಪದ್ಧತಿ ಕೈಬಿಟ್ಟು ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ-ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ನೇತೃತ್ವದಲ್ಲಿ ನೂರಾರು ಪೌರ ಕಾರ್ಮಿಕರು ಇಲ್ಲಿಯ ಮಿನಿ ವಿಧಾನಸೌಧದ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಕಾರ್ಮಿಕ ಇಲಾಖೆಯಿಂದ ಲೇಬರ್ ಲೈಸೆನ್ಸ್ ಪಡೆಯದೇ ಕಾನೂನು ಬಾಹಿರವಾಗಿ ನಡೆದಿರುವ ಪಾಲಿಕೆಯ ಸ್ವಚ್ಛತಾ ಗುತ್ತಿಗೆ ರದ್ದುಪಡಿಸಬೇಕು. ಪಾಲಿಕೆಯಲ್ಲಿ ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ದಿನಗೂಲಿ ತಳಹದಿ ಮೇಲೆ ಗುತ್ತಿಗೆ ಪೌರ ಕಾರ್ಮಿಕರನ್ನು ಹು-ಧಾ ಮಹಾನಗರ ಪಾಲಿಕೆ ವತಿಯಿಂದ ಸೇವೆ ಮುಂದುವರಿಸಬೇಕು. ಪಾಲಿಕೆ ತ್ಯಾಜ್ಯ ವಿಲೇವಾರಿಯಲ್ಲಿ ನಡೆದಿದೆಯೆನ್ನಲಾದ ರು. 136 ಕೋಟಿ ಅವ್ಯವಹಾರದ ಪ್ರಕರಣ ತನಿಖೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರದ ಕಾರ್ಮಿಕ ಇಲಾಖೆಯ ನಿರ್ದೇಶನದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ಖಾತ್ರಿ ಪಡಿಸಬೇಕು ಎಂದು ಒತ್ತಾಯಿಸಿದರು. ಪೌರ ಕಾರ್ಮಿಕರ ಅವಲಂಬಿತರಿಗೆ ಶಿಕ್ಷಣ ಒದಗಿಸಲು ವಸತಿ ಶಾಲೆಗಳನ್ನು ಮಂಜೂರು ಮಾಡಬೇಕು. ಪೌರ ಕಾರ್ಮಿಕರ ಮತ್ತು ಅವಲಂಬಿತರ ಸಮಗ್ರ ಅಭಿವೃದ್ಧಿಗೆ ಪ್ರಾಧಿಕಾರ ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರ ಕಚೇರಿ ಅಧಿಕಾರಿಗಳ ಮೂಲಕ ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಪೌರ ಕಾರ್ಮಿಕರಾದ ಸೋಮು ಮೊರಬದ, ಮಹಾದೇವಿ ಮ್ಯಾದರ, ನಾಗಮ್ಮ ಗೊಲ್ಲರ, ನಾಗೇಶ ಚುರುಮರಿ, ನಾಗರಾಜ ಹೊಸಮನಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement