ಅವಿಶ್ವಾಸ ನಿರ್ಣಯ: ಮಾರಾಮಾರಿ
ಕನ್ನಡಪ್ರಭ ವಾರ್ತೆ, ಕಲಘಟಗಿ, ಜ. 13
ತಾಲೂಕಿನ ತಂಬೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಉಡುಪಿ ವಿರುದ್ಧ ಅವಿಶ್ವಾಸ ನಿರ್ಣಯ ವಿವಾದ ವಿಕೋಪಕ್ಕೆ ತಿರುಗಿದ ಪರಿಣಾಮ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ.
ಘಟನೆಗೆ ಸಂಬಂಧಿಸಿದಂತೆ ಚನ್ನಪ್ಪ ಬಸಪ್ಪ ಕುಂಬಾರ ಎಂಬವರು 9 ಜನರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೊಡೆದಾಟದಲ್ಲಿ ಗಾಯಗೊಂಡಿದ್ದ ಐವರು ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ಗೆ ದಾಖಲಾಗಿದ್ದಾರೆ.
ಹೊಡೆದಾಟಕ್ಕೆ ಸಂಬಂಧಿಸಿದಂತೆ ರಾಜು ಎಸ್. ಉಡುಪಿ, ಮತ್ತೊಂದು ಗುಂಪಿನ 10 ಜನರ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. ಘಟನೆ ನಂತರ, ಗ್ರಾಪಂ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಂದೋಬಸ್ತ್ ಏರ್ಪಡಿಸಿದ್ದಾರೆ.
ಅವಿಶ್ವಾಸ ಅಂಗೀಕಾರ: ಸೋಮವಾರ ಗ್ರಾಪಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷೆ ಉಡುಪಿ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕರಿಸಲಾಯಿತು. ಒಟ್ಟು 10 ಸದಸ್ಯರ ಪೈಕಿ 7 ಸದಸ್ಯರು ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡಿಸಿದರು. ಜಿಲ್ಲಾ ಉಪವಿಭಾಗಾಧಿಕಾರಿ ಮಹಾಂತೇಶ ಕರ್ಜಗಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಆರ್. ವೀರಕರ ಇದ್ದರು.