ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ವಿವಿಗಳು ಸಂಶೋಧನೆಗೂ ಒತ್ತು ನೀಡಲಿ: ಡಾ. ನಟರಾಜನ್

Lingaraj Badiger
Updated On : 17 Jan 2014, 11:13 am

ಹುಬ್ಬಳ್ಳಿ: ಭಾರತೀಯ ವಿಶ್ವವಿದ್ಯಾಲಯಗಳು ಶಿಕ್ಷಣದ ಜೊತೆಗೆ ಸಂಶೋಧನೆಗೂ ಒತ್ತು ನೀಡಬೇಕು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ನಿರ್ದೇಶಕ ಹಾಗೂ ಮಾಜಿ ಚೇರ್‌ಮನ್ ಡಾ. ಆರ್. ನಟರಾಜನ್ ಹೇಳಿದರು.
ಎಂಜಿನಿಯರಿಂಗ್ ಶಿಕ್ಷಣಕ್ಕಾಗಿ ಇಂಡೋ-ಅಮೆರಿಕ ಸಹಯೋಗದಲ್ಲಿ ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿರುವ 'ಎಂಜಿನಿಯರಿಂಗ್ ಶಿಕ್ಷಣದಲ್ಲಾದ ಬದಲಾವಣೆಗಳು' ಕುರಿತು ಮೂರು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಬೆರಳೆಣಿಕೆಯ ವಿಶ್ವವಿದ್ಯಾಲಯಗಳಷ್ಟೇ ಸಂಶೋಧನೆಗೆ ಪ್ರಾಮುಖ್ಯತೆ ನೀಡುತ್ತಿವೆ. ಅಂಥ ವಿಶ್ವವಿದ್ಯಾಲಯಗಳು ಅಭಿವೃದ್ಧಿಯಲ್ಲಿ ದಾಪುಗಾಲಿಟ್ಟಿವೆ. ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುತ್ತಿವೆ. ಬಹಳಷ್ಟು ವಿಶ್ವವಿದ್ಯಾಲಯಗಳು ಹೆಚ್ಚಿನ ವಿದ್ಯಾರ್ಥಿಗಳು ರ್ಯಾಂಕ್ ಪಡೆಯುವಂಥ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುತ್ತಿವೆ. ವಿಶ್ವವಿದ್ಯಾಲಯಗಳು ಕೇವಲ ಫಲಿತಾಂಶದ ದೃಷ್ಟಿಕೋನದಿಂದ ಮಾತ್ರ ಚಿಂತಿಸುವುದು ಸಮಂಜಸವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಭಾರತದಲ್ಲಿ 3,495 ಎಂಜಿನಿಯರಿಂಗ್ ಕಾಲೇಜುಗಳಿದ್ದು, ಶಿಕ್ಷಣ ನೀಡುವ ಪದ್ಧತಿ ಏಕರೂಪದ್ದಾಗಿದೆ. ವಿದ್ಯಾರ್ಥಿಗಳಿಗೆ ನೀಡುವ ಕಲಿಕಾ ಪದ್ಧತಿ ಅವೈಜ್ಞಾನಿಕವಾಗಿದ್ದು, ಈ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಿದೆ ಎಂದು ಸಲಹೆ ನೀಡಿದರು.
ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ ಡಾ. ಪ್ರಭಾಕರ ಕೋರೆ ಮಾತನಾಡಿ, ತಮ್ಮ ಸಂಸ್ಥೆಯ ಜವಾಹರಲಾಲ್ ವೈದ್ಯಕೀಯ ಕಾಲೇಜಿನಲ್ಲಿ ಮೊದಲಿನಿಂದಲೂ ಸಂಶೋಧನೆಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಎಂಜಿನಿಯರಿಂಗ್ ಕಾಲೇಜುಗಳು ಸಹ ಸಂಶೋಧನೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಶೆಟ್ಟರ, ಜಾಗತಿಕ ಮಟ್ಟದ ಶಿಕ್ಷಣ ರೂಪವನ್ನು ಇಲ್ಲಿಯ ಎಂಜಿನಿಯರಿಂಗ್ ಕಾಲೇಜುಗಳೂ ಅಳವಡಿಸಿಕೊಳ್ಳುವ ಮೂಲಕ ಸಂಶೋಧನೆಗೆ ಮುಂದಾಗಬೇಕು ಎಂದು ಹೇಳಿದರು.  ಡಾ. ಕೃಷ್ಣ ವೆದುಲಾ, ಡಾ. ಜೊಸ್ ಕಾರ್ಲಸ್ ಕ್ವಾಡ್ರಾಡೊ, ಡಾ. ಹ್ಯಾನ್ಸ್ ಹೊಯರ್, ಡಾ. ಸ್ಟೆಫನ್ ಫರೆಲ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement