ಬಿಜೆಪಿ ಸಾಧನೆ ಮನೆ ಮನೆಗೆ ತಲುಪಿಸಿ
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ವಿ. ಸತೀಶ ಧಾರವಾಡ ಲೋಕಸಭೆ ಕ್ಷೇತ್ರದ ಪದಾಧಿಕಾರಿಗಳ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಷ್ಟರಲ್ಲಿಯೇ ಲೋಕಸಭೆ ಚುನಾವಣೆ ಎದುರಾಗಲಿದ್ದು, ಬೂತ್ ಮಟ್ಟದ ಪ್ರತಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ವಿಚಾರ ಧಾರೆ ಹಾಗೂ ಸಾಧನೆ ಪ್ರಚಾರ ಮಾಡಬೇಕೆಂದರು. ನರೇಂದ್ರ ಮೋದಿಯವರನ್ನು ಪ್ರಧಾನ ಮಂತ್ರಿಯಾಗಿಸುವ ನಿಟ್ಟಿನಲ್ಲಿ ಪಕ್ಷವನ್ನು ಸಂಘಟಿಸಬೇಕು ಎಂದರಲ್ಲದೇ, ಚುನಾವಣೆಯ ಹಿನ್ನೆಲೆಯಲ್ಲಿ ಸೂಕ್ತ ಸಲಹೆ ಸೂಚನೆ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾ. ನಾಗರಾಜ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಲಿಂಗರಾಜ ಪಾಟೀಲ, ಧಾರವಾಡ ವಿಭಾಗದ ಪ್ರಭಾರಿ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಸೀಮಾ ಮಸೂತಿ, ಮೋಹನ ಲಿಂಬಿಕಾಯಿ, ಪ್ರಕಾಶ ಗೋಡಬೋಲೆ ಮತ್ತಿತರರಿದ್ದರು.