ಸಾಮೂಹಿಕ ಅತ್ಯಾಚಾರ: ಮಕ್ಕಳ, ನಾಗರಿಕರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಕುಂದಗೋಳ, ಜೂ. 5
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಮಹಿಳೆಯರಿಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಕುಂದಗೋಳದಲ್ಲಿ ವಿದ್ಯಾರ್ಥಿಗಳು ಹಾಗೂ ನಾಗರಿಕರು ಪ್ರತಿಭಟನೆ ನಡೆಸಿದರು.
ಗುರುವಾರ ಬೆಳಗ್ಗೆ ಪಟ್ಟಣದ ಗಾಳಿಮರೆಮ್ಮನ ದೇವಸ್ಥಾನದಿಂದ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು ಪಟ್ಟಣ ಪಂಚಾಯಿತಿಯ ಸದಸ್ಯರು ಸೇರಿ ಹುಬ್ಬಳ್ಳಿ-ಲಕ್ಷ್ಮೇಶ್ವರ ರಸ್ತೆಯನ್ನು ಕೆಲ ಕಾಲ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಪ.ಪಂ. ಸದಸ್ಯರಾದ ಮಲ್ಲಿಕಾರ್ಜುನ ಕಿರೇಸೂರ, ಉದಯ ಭಜಂತ್ರಿ ಮಾತನಾಡಿ, ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಗ್ಯಾಂಗ್ ರೇಪ್‌ನಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ ಪೊಲೀಸ್ ಇಲಾಖೆ ಕಣ್ಣು ಮುಚ್ಚಿ ಕುಳಿತಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ.ಪಂ. ಅಧ್ಯಕ್ಷೆ ಯಲ್ಲವ್ವ ಭಜಂತ್ರಿ ಅಧ್ಯಕ್ಷತೆ ವಹಿಸಿದ್ದರು. ಮನವಿ ಸ್ವೀಕರಿಸಿದ ತಹಸೀಲ್ದಾರ್ ಎಚ್.ಎಂ. ಓಲೇಕಾರ ಮೇಲಧಿಕಾರಿಗಳಿಗೆ ಮನವಿ ರವಾನಿಸಿ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸುವುದಾಗಿ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಪ.ಪಂ. ಸದಸ್ಯರು ವಿಠ್ಠಲ ಚವ್ಹಾಣ, ದ್ಯಾಮವ್ವ ಬಿಡನಾಳ, ಬಸಮ್ಮ ಅಲ್ಲಾಪುರ, ನಾಗರಿಕರಾದ ಬಸವರಾಜ ಪಲ್ಲೇದ, ಹರೀಶ ಕೊನೇರಿ, ರವಿ ಚುಳಕಿ, ಪಟ್ಟಣದ ಶಾಲೆ-ಕಾಲೇಜು ವಿದ್ಯಾರ್ಥಿಗಳಿದ್ದರು.