ಜೆಡಿಎಸ್ ಪಾಲಿಕೆ ಕಿಂಗ್ ಮೇಕರ್
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಮಾ. 1
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ 9 ಸದಸ್ಯ ಬಲ ಹೊಂದಿರುವ ಜೆಡಿಎಸ್ ಕಿಂಗ್ ಮೇಕರ್ ಪಾತ್ರ ನಿರ್ವಹಿಸಲಿದೆ. ಈ ಸಾಧ್ಯಾಸಾಧ್ಯತೆಗಳ ಬಗ್ಗೆ ಈಗಾಗಲೇ ಪಕ್ಷದ ಪಾಲಿಕೆಯ ಸದಸ್ಯರು ಸಭೆ ನಡೆಸಿದ್ದು, ಭಾನುವಾರ ಜೆಡಿಎಸ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ.
ಮಾ. 7ರಂದು ಮಧ್ಯಾಹ್ನ 1 ಗಂಟೆಗೆ ಮೇಯರ್-ಉಪ ಮೇಯರ್ ಚುನಾವಣೆ ನಡೆಯಲಿದ್ದು, 9 ಸದಸ್ಯರ ಬಲ ಹೊಂದಿರುವ ಜೆಡಿಎಸ್ ಈ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಮಹಾನಗರ ಪಾಲಿಕೆಯಲ್ಲಿ 33 ಸದಸ್ಯರನ್ನು ಹೊಂದಿರುವ ಬಿಜೆಪಿಗೆ ಅಥವಾ 22 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್ಗೆ ಬೆಂಬಲ ನೀಡಬೇಕೋ ಅಥವಾ ಚುನಾವಣೆಯಲ್ಲಿ ತಟಸ್ಥವಾಗಿ ಉಳಿಯಬೇಕೋ ಎಂಬ ನಿರ್ಧಾರವನ್ನು ಜೆಡಿಎಸ್ ಭಾನುವಾರ (ಮಾ.2) ಪ್ರಕಟಿಸುವ ಸಾಧ್ಯತೆ ಇದೆ.
ನಗರದ ಖಾಸಗಿ ಹೋಟೆಲ್ನಲ್ಲಿ ಶನಿವಾರ ಸಭೆ ನಡೆಸಿರುವ ಮಹಾನಗರ ಪಾಲಿಕೆಯ ಜೆಡಿಎಸ್ನ 9 ಸದಸ್ಯರು, ಶಾಸಕ ಎನ್.ಎಚ್. ಕೋನರಡ್ಡಿ, ಮಾಜಿ ಶಾಸಕರಾದ ಎಂ.ಎಸ್. ಅಕ್ಕಿ, ಇಸ್ಮಾಯಿಲಸಾಬ ಕಾಲೇಬುಡ್ಡೆ, ಜಿಪಂ ಸದಸ್ಯ ಅಮೃತ ದೇಸಾಯಿ, ವಿ.ಐ. ಅಳಗುಂಡಗಿ ಹಾಗೂ ಮತ್ತಿತರ ಮುಖಂಡರ ಚುನಾವಣೆಯಲ್ಲಿ ಜೆಡಿಎಸ್ ಪಾತ್ರದ ಸಾಧಕ-ಬಾಧಕಗಳ ಕುರಿತು ಚರ್ಚಿಸಿದ್ದಾರೆ.
ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು, ತಟಸ್ಥವಾಗಿ ಉಳಿಯುವುದು ಮತ್ತಿತರ ಅಭಿಪ್ರಾಯಗಳನ್ನು ಸಭೆಯಲ್ಲಿ ಪಾಲ್ಗೊಂಡವರು ವ್ಯಕ್ತಪಡಿಸಿದ್ದಾರೆ. ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರಿಗೆ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಈಗಾಗಲೇ ಬಸವರಾಜ ಹೊರಟ್ಟಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಜೆಡಿಎಸ್ ಬೆಂಬಲವನ್ನು ಕಾಂಗ್ರೆಸ್ಗೆ ನೀಡುವಂತೆ ಮನವಿ ಮಾಡಿದ್ದಾರೆ. ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಪ್ರಹ್ಲಾದ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಕೂಡ ಹೊರಟ್ಟಿ ಅವರನ್ನು ಸಂಪರ್ಕಿಸಿ, ಬಿಜೆಪಿ ಬೆಂಬಲಿಸುವಂತೆ ಕೋರಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಈ ಮಧ್ಯೆ ಶನಿವಾರ ರಾತ್ರಿ ತಮ್ಮ ಮನೆಯಲ್ಲಿ ಪಾಲಿಕೆಯ ಜೆಡಿಎಸ್ ಸದಸ್ಯರು, ಮತ್ತಿತರ ಮುಖಂಡರೊಂದಿಗೆ ಮಾತುಕತೆ ನಡೆಸಿದ ಬಸವರಾಜ ಹೊರಟ್ಟಿ, ವೈಯಕ್ತಿಕ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಪಾಲಿಕೆಯಲ್ಲಿ ತಟಸ್ಥವಾಗಿ ಉಳಿಯಲಿ ಅಥವಾ ಯಾವುದೇ ಪಕ್ಷಕ್ಕೆ ಬೆಂಬಲ ನೀಡಲಿ, ಪಕ್ಷದ ಗೌರವಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕೆಂಬ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಭಾನುವಾರ ಹುಬ್ಬಳ್ಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎ. ಕೃಷ್ಣಪ್ಪ ಆಗಮಿಸಲಿದ್ದು, ಅವರೊಂದಿಗೆ ಚರ್ಚಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಯಾವ ಪಕ್ಷಕ್ಕೆ ಬೆಂಬಲ ನೀಡಬೇಕೆಂಬುದರ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಸವರಾಜ ಹೊರಟ್ಟಿ 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ.
ಜೆಡಿಎಸ್ ಬೆಂಬಲ ಪಡೆಯುವ ಪಕ್ಷಕ್ಕೆ ಪಾಲಿಕೆಯಲ್ಲಿರುವ ಆ ಪಕ್ಷದ 9 ಸದಸ್ಯರ ಜತೆಗೆ ಬಸವರಾಜ ಹೊರಟ್ಟಿ ಅವರ ಮತ ಸೇರಿದಂತೆ ಒಟ್ಟು 10 ಮತಗಳು ದೊರಕಲಿವೆ. ಜೆಡಿಎಸ್ ಬೆಂಬಲ ಪಡೆದುಕೊಳ್ಳುವ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ.
ಜೆಡಿಎಸ್ ರಾಜ್ಯಾಧ್ಯಕ್ಷ ಎ. ಕೃಷ್ಣಪ್ಪ ಭಾನುವಾರ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಅವರೊಂದಿಗೆ ಚರ್ಚಿಸಿದ ನಂತರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್-ಉಪ ಮೇಯರ್ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಅಥವಾ ತಟಸ್ಥವಾಗಿ ಉಳಿಯಬೇಕೋ ಎಂಬುದರ ಕುರಿತು ಅಂತಿಮ ನಿರ್ಧಾರ ಪ್ರಕಟಿಸಲಾಗುವುದು.
ಬಸವರಾಜ ಹೊರಟ್ಟಿ
ವಿಧಾನ ಪರಿಷತ್ ಸದಸ್ಯ