ಲೋಕ ಚುನಾವಣೆ: ಜಿಲ್ಲಾಡಳಿತ ಸಿದ್ಧತೆ ಶುರು
ಕನ್ನಡಪ್ರಭ ವಾರ್ತೆ, ಧಾರವಾಡ, ಮಾ. 6
ಏಪ್ರಿಲ್ 17ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪೂರ್ವ ಸಿದ್ಧತೆ ಆರಂಭಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಮೀರ ಶುಕ್ಲ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಚುನಾವಣಾಧಿಕಾರಿಗಳ ಆದೇಶದಂತೆ ಮಾ. 19ರಂದು ಚುನಾವಣೆಯ ಅಧಿಸೂಚನೆ ಹೊರಡಿಸಲಿದ್ದು 26ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. 27ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಮಾ. 29 ಕೊನೆ ದಿನ. ಅನಂತರ ಏಪ್ರಿಲ್ 17ರಂದು ಕ್ಷೇತ್ರದ 1703 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಮೇ 16ರಂದು ಮತಗಳ ಎಣಿಕೆ ನಡೆಯಲಿದೆ. ಈ ಚುನಾವಣೆಗೆ ರು. 70 ಲಕ್ಷದವರೆಗೂ ಅಭ್ಯರ್ಥಿ ಚುನಾವಣೆಗೆ ವೆಚ್ಚ ಮಾಡುವುದಕ್ಕೆ ಆಯೋಗ ಅವಕಾಶ ನೀಡಿದೆ ಎಂದು ಹೇಳಿದರು.
ಜಿಲ್ಲೆಯ ಏಳು ವಿಧಾನಸಭೆ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿವೆ. 2014ರ ಜನವರಿ 31ರ ವರೆಗೆ ಕ್ಷೇತ್ರದಲ್ಲಿ 7,85,594 ಪುರುಷ, 7,45,884 ಮಹಿಳೆ ಸೇರಿದಂತೆ ಒಟ್ಟು 15,31,478 ಮತದಾರರು ಇದ್ದಾರೆ. ಜನವರಿ ನಂತರವೂ ಹೊಸ ಮತದಾರರ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ನಡೆಯುತ್ತಿದೆ. ಬಂದಿರುವ ಅರ್ಜಿಗಳ ವಿಲೇವಾರಿ ಮಾಡಲಾಗುತ್ತಿದೆ.
ಚುನಾವಣಾಧಿಕಾರಿ ನೇಮಕ..: ಜಿಲ್ಲಾ ಚುನಾವಣಾಧಿಕಾರಿಯಾಗಿ ಚುನಾವಣೆ ಪಕ್ರಿಯೆ ಜವಾಬ್ದಾರಿ ವಹಿಸಿಕೊಂಡಿದ್ದು, ಜತೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಎಂಟು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಯಾಗಿದ್ದು, ಮತದಾರರನ್ನು ಸೆಳೆಯುವ ಬ್ಯಾನರ್, ಬಂಟಿಂಗ್ಸ್‌ಗಳನ್ನು ತೆರವುಗೊಳಿಸಲಾಗಿದೆ. ಬುಧವಾರವಷ್ಟೇ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಚುನಾವಣೆಗೆ ಸಿದ್ಧರಾಗಲು ಸೂಚನೆ ನೀಡಲಾಗಿದೆ. ಕ್ಷೇತ್ರ ವ್ಯಾಪ್ತಿಯ ಅತಿಥಿ ಗೃಹ ಹಾಗೂ ಆಡಳಿತ ಪಕ್ಷದ ಮುಖಂಡರಿಂದ ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಸಾಮೂಹಿಕ ಮದುವೆಗೆ ಪರವಾನಗಿ ಅಗತ್ಯ: ಚುನಾವಣೆಯನ್ನು ಶಾಂತಿಯುತ, ವ್ಯವಸ್ಥಿತವಾಗಿ ನಡೆಸಲು ಹಲವಾರು ತಂಡಗಳನ್ನು ರಚಿಸಲಾಗುತ್ತಿದ್ದು, ಈ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲಾಗುವುದು. ಜವಾಬ್ದಾರಿ ವಹಿಸಿಕೊಂಡಿರುವ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದರೆ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಸಾಮೂಹಿಕ ಮದುವೆ ಮಾಡುವವರು ಸಂಬಂಧಿಸಿದ ಸಹಾಯಕ ಚುನಾವಣಾಧಿಕಾರಿಗಳಿಂದ ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು. ಅಲ್ಲದೇ, ಮತದಾರರನ್ನು ಓಲೈಸುವ ಸಭೆ-ಸಮಾರಂಭಗಳ ಮೇಲೆ ಅಧಿಕಾರಿಗಳು ನಿಗಾ ಇಡಲಿದ್ದಾರೆ. ಈಗಾಗಲೇ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಹೊರತು ಪಡಿಸಿ ಇನ್ನು ಮುಂದೆ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವಂತಿಲ್ಲ ಎಂದು ಸಮೀರ ಶುಕ್ಲ ಸ್ಪಷ್ಟಪಡಿಸಿದರು.
ಹು-ಧಾ ಉಪ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಸುಭಾಷ ಗುಡಿಮನಿ ಮಾತನಾಡಿ, ಭದ್ರತೆ ದೃಷ್ಟಿಯಿಂದ ಒಟ್ಟು ಮತಗಟ್ಟೆಗಳಲ್ಲಿ ಸೂಕ್ಷ್ಮ, ಅತಿ ಸೂಕ್ಷ್ಮ ಹಾಗೂ ಸಾಮಾನ್ಯ ಮತಗಟ್ಟೆಗಳೆಂದು ವಿಂಗಡಿಸಿದ್ದು, ಅದೇ ರೀತಿ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗುವುದು. ಮುನ್ನಚ್ಚರಿಕೆ ಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಅಕ್ರಮ ಮದ್ಯ ಮಾರಾಟ ತಡೆಗೆ ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ. ಅಕ್ರಮಗಳು ಸಾರ್ವಜನಿಕರಿಗೆ ಕಂಡು ಬಂದರೆ 0836-223555 ಸಂಪರ್ಕಿಸಬಹುದು ಎಂದರು.
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕಾಪಸೆ ಇದ್ದರು.