ಅಭ್ಯರ್ಥಿ ಸಿಗದಿದ್ದರೆ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ: ಎಚ್‌ಡಿಕೆ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಮಾ. 25
ಸೋಲುವ ಭೀತಿಯಿಂದ ತಾನು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿಲ್ಲ. ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಪ್ರಭಾವ ಇದ್ದರೂ ಸೂಕ್ತ ಅಭ್ಯರ್ಥಿ ಸಿಗುತ್ತಿಲ್ಲ. ಅನಾರೋಗ್ಯದ ಕಾರಣದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ನಿರಾಕರಿಸಿದ್ದಾರೆ. ಬುಧವಾರ ಬೆಳಗ್ಗೆ ವರೆಗೆ ಸೂಕ್ತ ಅಭ್ಯರ್ಥಿ ಸಿಗದಿದ್ದರೆ ತಾವೇ ನಾಮಪತ್ರ ಸಲ್ಲಿಸುವುದಾಗಿ ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಧಾರವಾಡ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಕುರಿತು ನಿರ್ಧರಿಸಲು ಮಂಗಳವಾರ ಹುಬ್ಬಳ್ಳಿಗೆ ಆಗಮಿಸಿದ್ದ ಅವರು, ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದರು. ಚಿಕ್ಕೋಡಿ, ಬೀದರ್, ಶಿವಮೊಗ್ಗ, ಚಿತ್ರದುರ್ಗ, ಬಿಜಾಪುರ, ಉತ್ತರ ಕನ್ನಡ ಲೋಕಸಭೆ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇದೆ. ಆದರೆ, ಧಾರವಾಡ ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸುತ್ತಿದ್ದು, 16-17 ಕ್ಷೇತ್ರಗಳಲ್ಲಿ ಗೆಲುವಿಗೆ ಗಂಭೀರ ಪ್ರಯತ್ನ ಮಾಡುತ್ತೇವೆ. 10-12 ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ ಎಂದರು.
ಅಭಿವೃದ್ಧಿಯಲ್ಲಿ ಗುಜರಾತ್ ಸಾಕಷ್ಟು ಹಿಂದುಳಿದಿದೆ. ಅಲ್ಲಿ ರೈತರ ಸ್ಥಿತಿ ಹದಗೆಟ್ಟಿದೆ. ಪೌಷ್ಟಿಕಾಂಶದ ವಿಷಯದಲ್ಲೂ ಆ ರಾಜ್ಯ ಸೊರಗಿದೆ. ಇದೇ ಸ್ಥಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಇದೆ. ರಸ್ತೆ, ನೀರಿನ ಸೌಲಭ್ಯಗಳಿಂದ ಕ್ಷೇತ್ರ ವಂಚಿತವಾಗಿದೆ ಎಂದು ದೂರಿದರು. ಶಾಸಕರಾದ ಎನ್.ಎಚ್. ಕೋನರಡ್ಡಿ, ಬಸವರಾಜ ಹೊರಟ್ಟಿ, ಜೆಡಿಎಸ್ ಮಹಾನಗರ ಜಿಲ್ಲಾಧ್ಯಕ್ಷ ರಾಜಣ್ಣ ಕೊರವಿ, ಜಿಲ್ಲಾ ಗ್ರಾಮೀಣ ಅಧ್ಯಕ್ಷ ಮುಜಾಹಿದ್ ಕಾಂಟ್ರಾಕ್ಟರ್, ಅಮೃತ ದೇಸಾಯಿ ಹಾಜರಿದ್ದರು.
ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ತಮ್ಮ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು. ತಮ್ಮ ಅವಧಿಯಲ್ಲಿ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಿಲ್ಲ. ಅಕ್ರಮ ಗಣಿಗಾರಿಕೆ ವರದಿಯಲ್ಲಿ ಎರಡು ಕಡೆ ತಮ್ಮ ಹೆಸರಿದ್ದರೂ, ಆಡಳಿತ ನಿರ್ವಹಣೆಯಲ್ಲಿ ಯಾವುದೇ ಲೋಪ ಆಗಿಲ್ಲವೆಂಬ ಮಾಹಿತಿಯೂ ವರದಿಯಲ್ಲಿ ಇದೆ. ಎಸ್.ಆರ್. ಹಿರೇಮಠ ಅವರ ಬಳಿ ಸಾಕ್ಷ್ಯಗಳಿದ್ದರೆ ಬಹಿರಂಗಪಡಿಸಲಿ. ಆರೋಪ ಸಾಬೀತಾದರೆ ಕಾನೂನು ಪ್ರಕಾರ ಶಿಕ್ಷೆ ಅನುಭವಿಸಲು ಸಿದ್ಧ.