ಚುನಾವಣೆ ಬಳಿಕ ಮುತಾಲಿಕ ಸೇರ್ಪಡೆ ತೀರ್ಮಾನ
ಹುಬ್ಬಳ್ಳಿ: ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ ಅವರನ್ನು ಒಳ್ಳೆಯ ಉದ್ದೇಶದಿಂದಲೇ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಆದರೆ ಪಕ್ಷದ ರಾಷ್ಟ್ರೀಯ ವರಿಷ್ಠರು ಇದಕ್ಕೆ ತಡೆಯಾಜ್ಞೆ ನೀಡಿದ್ದು, ಲೋಕಸಭೆ ಚುನಾವಣೆ ನಂತರ ಈ ಕುರಿತು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ನಗರದ ಬಂಡಿವಾಡ ಅಗಸಿಯಲ್ಲಿ ಪ್ರಚಾರಕಾರ್ಯದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮೋದ ಮುತಾಲಿಕ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಇತರ ಮುಖಂಡರ ಮನವೊಲಿಕೆಗೆ ಪ್ರಯತ್ನಿಸಲಾಗುತ್ತಿದೆ. ಆದರೆ ಎಲ್ಲ ಮುಖಂಡರು ಚುನಾವಣಾ ಕಾರ್ಯದಲ್ಲಿ ನಿರತರಾಗಿರುವುದರಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ. ಆದಕಾರಣ ಚುನಾವಣೆ ಪೂರ್ಣಗೊಂಡ ನಂತರ ಮುಖಂಡರೊಂದಿಗೆ ಈ ಕುರಿತು ಚರ್ಚಿಸಲಾಗುವುದು ಎಂದರು.
ಪ್ರಮೋದ ಮುತಾಲಿಕ ಅವರು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಲ್ಲಿ ಆಗಬಹುದಾದ ಪರಿಣಾಮಗಳ ಕುರಿತು ಉತ್ತರಿಸಲು ನಿರಾಕರಿಸಿದ ಜೋಶಿ, ಈ ಹಿಂದಿನಿಂದಲೂ ಮುತಾಲಿಕ ಸಂಘ ಪರಿವಾರದೊಂದಿಗೆ ಗುರುತಿಸಿಕೊಂಡವರು. ಆದಕಾರಣ ಈ ಚುನಾವಣೆ ಸಂದರ್ಭದಲ್ಲಿ ಎಲ್ಲರನ್ನೂ ಒಗ್ಗಟ್ಟಾಗಿಸಿಕೊಳ್ಳುವ ಉದ್ದೇಶದಿಂದ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗಿತ್ತು. ಬಿಜೆಪಿಗೆ ಕರೆತರುವ ಹಿಂದೆ ಇನ್ನಾವುದೇ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.
ನಾಳೆ ಮತದಾರರ ಜಾಗೃತಿ ಜಾಥಾ
ಕಲಘಟಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕುರಿತಂತೆ ಶ್ರೀಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಮಾ. 27ರಂದು ಬೆಳಗ್ಗೆ 11ಕ್ಕೆ ಮತದಾರರ ಜಾಗೃತಿ ಕಾರ್ಯಾಗಾರ ಹಾಗೂ ಪಥ ಸಂಚಲನ ಹಮ್ಮಿಕೊಳ್ಳಲಾಗಿದೆ. ತಾಲೂಕು ಸ್ವೀಪ್ ಸಮಿತಿ, ಪಟ್ಟಣ ಪಂಚಾಯತಿ, ಜಿ.ಇ. ಪದವಿ ಪೂರ್ವ ಮಹಾವಿದ್ಯಾಲಯ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬೂತ್ ಮಟ್ಟದ ಅಧಿಕಾರಿಗಳು ಸ್ವ ಸಹಾಯ ಸಂಘ ಸಂಸ್ಥೆಗಳ ಸದಸ್ಯರು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪಿ.ಎಂ. ಮೇಘಣ್ಣವರ, ನೋಡಲ್ ಅಧಿಕಾರಿಗಳಾದ ಅಶೋಕ ಚಲವಾದಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕಾಧಿಕಾರಿ ಎಸ್.ಆರ್. ವೀರಕರ, ತಹಸೀಲ್ದಾರ್ ಡಿ.ಎನ್. ಸಂಕೇಶ್ವರಿ, ಪಪಂ ಮುಖ್ಯಾಧಿಕಾರಿ ಪ್ರಭಾಕರ ದೊಡಮನಿ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹನುಮಂತಪ್ಪ ಜೆಡಿಎಸ್ ಅಭ್ಯರ್ಥಿ
ಹುಬ್ಬಳ್ಳಿ: ಧಾರವಾಡ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಹನುಮಂತಪ್ಪ ಬಂಕಾಪುರ ಆಯ್ಕೆಗೊಂಡಿದ್ದಾರೆ. ಮಂಗಳವಾರ ರಾತ್ರಿ ನಗರದ ಖಾಸಗಿ ಹೋಟೆಲ್ನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಬಂಕಾಪುರ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಯಿತು. ಕೊನೆಯ ದಿನವಾದ ಬುಧವಾರ ಧಾರವಾಡ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.