ಪತ್ರಕರ್ತರು ಪ್ರಾಮಾಣಿಕತೆ, ದಕ್ಷತೆ ಮೆರೆಯಲಿ
ಕನ್ನಡಪ್ರಭ ವಾರ್ತೆ, ಧಾರವಾಡ,ಮಾ.27
ಅನ್ನ, ಅಕ್ಷರ, ಆರೋಗ್ಯ ಈ ಮೂರು ಸೌಲಭ್ಯಗಳು ಸಮಾಜದ ಕಟ್ಟಕಡೆಯ ಪ್ರಜೆಗೂ ಸಿಗುವಂತೆ ಪತ್ರಿಕೋದ್ಯಮ ತನ್ನ ಪ್ರಾಮಾಣಿಕತೆ, ದಕ್ಷತೆ ಮೆರೆಯಬೇಕು ಎಂದು ಹಿರಿಯ ಪತ್ರಕರ್ತೆ ಆರ್.ಪೂರ್ಣಿಮಾ ಹೇಳಿದರು.
ಇಲ್ಲಿಯ ಕವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ಪತ್ರಕರ್ತ ಮೊಹರೆ ಹಣಮಂತರಾಯ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅಭಿವೃದ್ಧಿ ಪತ್ರಿಕೋದ್ಯಮ ವಿಷಯ ಕುರಿತು ಅವರು ಮಾತನಾಡಿದರು.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಿಂಬಿಸುವುದೇ ಪತ್ರಿಕೆಗಳ ಕಾರ್ಯ ಎನ್ನವಂತೆ ಇಂದು ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ ಇಂದು ಸರ್ಕಾರಗಳು ಹೊರಡಿಸುವ ಮಸೂದೆಗಳ ಬಗ್ಗೆ ಕೇವಲ ಒಣಚರ್ಚೆ ನಡೆಯುತ್ತಿದೆಯೇ ಹೊರತು ಅನುಷ್ಠಾನಗೊಳ್ಳುತ್ತಿಲ್ಲ. ಮಹಿಳಾ ಮಸೂದೆ ಕುರಿತು ಕಳೆದ ಹದಿನೆಂಟು ವರ್ಷಗಳಿಂದ ಚರ್ಚೆ ನಡೆದಿದೆಯೋ ಹೊರತು ಅನುಷ್ಠಾನಗೊಳ್ಳುತ್ತಿಲ್ಲ ಎಂದರು. ಜಾಗತೀಕರಣದ ಪ್ರಭಾವದಿಂದ ಪತ್ರಿಕೋದ್ಯಮದ ನಕ್ಷೆ ಬದಲಾಗುತ್ತಿದೆ. ಬದಲಾಗುತ್ತಿರುವ ಸಮಾಜದ ಪರಿಣಾಮಗಳು ಪತ್ರಿಕೋದ್ಯಮದ ಮೇಲೆ ಪ್ರಭಾವ ಬೀರುತ್ತಿವೆ. ಇಂತಹ ಸಂಕ್ರಮಣ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಹಲವಾರು ಮಹನೀಯರು ಪತ್ರಿಕೆ ಕಟ್ಟಿ ಬೆಳೆಸಿದ ಪ್ರಾಮಾಣಿಕ ಆದರ್ಶಗಳನ್ನು ಇಂದಿನ ಪೀಳಿಗೆಯ ಪತ್ರಕರ್ತರು ಅರಿತುಕೊಳ್ಳಬೇಕಿದೆ ಎಂದು ತಿಳಿಸಿದರು.
ಪ್ರೊ. ಎಂ. ಗಂಗಪ್ಪ ಮಾತನಾಡಿ, ದ್ವಿತೀಯ ಮಹಾಯುದ್ಧದ ಸಂದರ್ಭದಲ್ಲಿ ಬಳಕೆಗೆ ಬಂದ ಅಭಿವೃದ್ಧಿ ಪತ್ರಿಕೋದ್ಯಮದ ಪರಿಕಲ್ಪನೆ ಇಂದು ವ್ಯಾಪಕವಾಗಿ ಬೆಳೆಯುತ್ತಿದೆ ಎಂದರು.
ಸಹ ಪ್ರಾಧ್ಯಾಪಕ ಡಾ. ಜೆ.ಎಂ. ಚಂದುನವರ, ಡಾ. ಸಂಜಯಕುಮಾರ ಮಾಲಗತ್ತಿ, ಶರಣು ಚಕ್ರಸಾಲಿ ಇನ್ನಿತರರಿದ್ದರು.
ಲೋಕ ಅದಾಲತ್ನಲ್ಲಿ ಎಸ್ಬಿಐ ಪ್ರಕರಣ ಇತ್ಯರ್ಥ
ಧಾರವಾಡ: ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ತೀರ್ಮಾನಿಸಿದೆ.
ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕರ ಮನವಿಯ ಹಿನ್ನೆಲೆಯಲ್ಲಿ ಪ್ರಾಧಿಕಾರ ಈ ಕ್ರಮ ಕೈಗೊಂಡಿದ್ದು, ಮಾ. 29ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಾ. 29ರಂದು ಸಂಜೆ 4ಕ್ಕೆ ಧಾರವಾಡ ಸಿವಿಲ್ ನ್ಯಾಯಾಲಯಗಳ ಆವರಣದಲ್ಲಿರುವ ಎಡಿಆರ್ ಕಟ್ಟಡದಲ್ಲಿ ಲೋಕ ಅದಾಲತ್ಗೆ ವ್ಯವಸ್ಥೆ ಮಾಡಲಾಗಿದೆ.
ಈ ಅದಾಲತ್ಲ್ಲಿ ಜಿಲ್ಲೆಯಲ್ಲಿರುವ ಎಸ್ಬಿಐ ಹಾಗೂ ಇತರೆ ರಾಷ್ಟ್ರೀಕೃತ ಬ್ಯಾಂಕುಗಳ ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ಹಾಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಆದ್ದರಿಂದ ಸಂಬಂಧಿಸಿದ ಸಾರ್ವಜನಿಕರು ಈ ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ವಿ. ಶ್ರೀನಾಥ ತಿಳಿಸಿದ್ದಾರೆ.