ಮತದಾನ ಪ್ರತಿಯೊಬ್ಬರ ಕರ್ತವ್ಯ: ತುರಮುರಿ
ರೋಣ: ಮತದಾನ ಅತ್ಯಂತ ಮಹತ್ವದ್ದಾಗಿದೆ. ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಕರ್ತವ್ಯ. ಒಂದೊಂದು ಮತವೂ ಅಭಿವೃದ್ಧಿಯ ಭವಿಷ್ಯ ನಿರ್ಧರಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಮತವನ್ನು ಕಡ್ಡಾಯವಾಗಿ ಚಲಾಯಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಓ ವೀರಣ್ಣ ತುರಮುರಿ ಹೇಳಿದರು.
ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತ ಸೋಮವಾರ ಏರ್ಪಡಿಸಿದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾನದಲ್ಲಿ ಭಾಗವಹಿಸುವ ಕುರಿತಾಗಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು ತರಬೇತಿಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಸರ್ಕಾರಿ ಸಿಬ್ಬಂದಿಯ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಬ್ಬ ಪ್ರಜೆಯೂ ಮತದಾರನಾಗಿ ನೋಂದಣಿ ಮಾಡಿಸಿಕೊಳ್ಳುವುದು ಹಾಗೂ ಎಲ್ಲ ನೋಂದಾಯಿತ ಮತದಾರರು ಚುನಾವಣೆಯಲ್ಲಿ ಭಾಗವಹಿಸಿ ಮತದಾನ ಮಾಡಲು ಅನೂಕೂಲವಾಗುವಂತೆ ಮತದಾರರಲ್ಲಿ ಜಾಗೃತಿ ಮೂಡಿಸಲು ಚುನಾವಣೆ ಆಯೋಗ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ತರಬೇತಿಯಲ್ಲಿ ಭಾಗವಹಿಸಿದವರು ಗ್ರಾಮಗಳಲ್ಲಿ ತಮ್ಮ ಕೆಲಸ, ಕಾರ್ಯಗಳೊಂದಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಚುನಾವಣೆ ಸಮಯದಲ್ಲಿ ಅಕ್ರಮ ನಡೆದರೆ ಚುನಾವಣೆ ಅಧಿಕಾರಿಗಳಿಗೆ ದೂರು ಸಲ್ಲಿಸಬೇಕು. ನಿಷ್ಪಕ್ಷಪಾತವಾಗಿ ಒಬ್ಬ ಪ್ರಜೆಯನ್ನು ಆಯ್ಕೆ ಮಾಡಬೇಕಾಗಿದೆ. ಚುನಾವಣೆ ಸಂದರ್ಭದಲ್ಲಿ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು. 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾನದ ಹಕ್ಕಿದೆ ಎಂಬುದನ್ನು ತಿಳಿಸಬೇಕು. ಅರ್ಹತೆಯುಳ್ಳವರು ತಹಸೀಲ್ದಾರ್ ಕಚೇರಿಯಲ್ಲಿ 6 ನಂಬರ್ ಫಾರ್ಮ್ ಪಡೆದು ಅರ್ಜಿ ಸಲ್ಲಿಸಬೇಕು. ಮೇ 5ರಂದು ವಿಧಾನಸಭೆ ಚುನಾವಣೆಯಿದ್ದು, ಚುನಾವಣೆ ಕಾರ್ಡ್ ಹೊಂದದೆ ಇದ್ದವರು ಏ. 7ರೊಳಗೆ ಅರ್ಜಿ ಸಲ್ಲಿಸಬೇಕು ಎಂದರು.
ಜಿಪಂ ಉಪಕಾರ್ಯದರ್ಶಿ ಎನ್.ಆರ್. ಉಮೇಶ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಚ್.ಎಸ್. ಪರಮೇಶ್ವರಪ್ಪ, ತಹಸೀಲ್ದಾರ್ ಎಸ್.ಆರ್. ಕಡಿವಾಲ, ಡಿಎಚ್ಓ ಡಾ. ಡಿ.ಬಿ. ಚೆನಶೆಟ್ಟಿ, ತಾಪಂ ಇಓ ಎಸ್.ಎಂ. ರುದ್ರಸ್ವಾಮಿ, ಸಿಡಿಪಿಓ ಕೆಂಪಹನುಮಯ್ಯ, ಸಮಾಜ ಕಲ್ಯಾಣ ಅಧಿಕಾರಿ ಪ್ರಶಾಂತ ವರಗಪ್ಪನವರ, ತಾಲೂಕು ವೈದ್ಯಾಧಿಕಾರಿ ಡಾ. ಬಿ.ಎಸ್. ಭಜಂತ್ರಿ ಉಪಸ್ಥಿತರಿದ್ದರು.