ಚುನಾವಣೆ ಅಕ್ರಮಗಳ ಬಗ್ಗೆ ದೂರು ನೀಡಿ
ಮುಂಡರಗಿ: ಚುನಾವಣೆ ಸಂದರ್ಭದಲ್ಲಿ ಹಣ, ಸೀರೆ ವಿತರಣೆ ಹಾಗೂ ಇತರೆ ನೀತಿ ಸಂಹಿತೆ ಉಲ್ಲಂಘನೆಯ ಯಾವುದೇ ದೂರುಗಳಿದ್ದಲ್ಲಿ ತಕ್ಷಣವೇ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಿಪಂ ಸಿಇಓ ವೀರಣ್ಣ ತುರಮರಿ ಹೇಳಿದರು.
ಅವರು ಗುರುವಾರ ಮುಂಡರಗಿ ಎಪಿಎಂಸಿ ಸಭಾಭವನದಲ್ಲಿ ಚುನಾವಣಾ ಆಯೋಗ, ಜಿಲ್ಲಾ ಆಡಳಿತ, ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಮತದಾನದಲ್ಲಿ ಭಾಗವಹಿಸುವ ಕುರಿತು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ, ಹಿರಿಯ ಹಾಗೂ ಕಿರಿಯ ಆರೋಗ್ಯ ಸಹಾಯಕರಿಗೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಇವಿಎಂ ಮತಯಂತ್ರದ ಮೂಲಕ ಮತದಾನ ಮಾಡಬೇಕಾಗಿದ್ದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರಿಗೆ ತರಬೇತಿ ನೀಡಲಾಗುವುದು. ಮತದಾನದ ದಿನ ಮಹಿಳಾ ಮತದಾರರಿಗೆ ಚುನಾವಣಾ ಆಯೋಗ ಭದ್ರತೆ ನೀಡಲಿದೆ. ಸರ್ಕಾರಿ ಅಧೀನದಲ್ಲಿ ಕೆಲಸ ಮಾಡುವವರು ಚುನಾವಣೆಯ ಸಂದರ್ಭದಲ್ಲಿ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗಬಾರದು. ಒಂದು ವೇಳೆ ಅಂತಹ ಕಾರ್ಯಗಳು ಕಂಡುಬಂದಲ್ಲಿ ಅವರ ಮೇಲೆ ಕ್ರಮ ಜರುಗಿಸಲಾಗುವುದು ಎಂದರು. ತಹಸೀಲ್ದಾರ್ ಎ.ಟಿ. ನೆರೇಗಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಿ.ಬಿ. ಚನ್ನಶೆಟ್ಟಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ವಿ. ತಿಗರಿಮಠ ಹಾಗೂ ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಇದ್ದರು.