ಪ್ರತಿಯೊಬ್ಬರೂ ಮತದಾನ ಮಾಡಿ: ವೀರಣ್ಣ ತುರಮರಿ
ಕನ್ನಡಪ್ರಭ ವಾರ್ತೆ, ಗದಗ, ಏ. 6
ಭಾರತವು ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ವಿಶ್ವದ ಮುಂಚೂಣಿ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವು, ವಿಕಾಸ ಹಾಗೂ ಯಶಸ್ಸಿಗೆ ಮತದಾರರೆಲ್ಲರೂ ಮುಂಬರುವ ಚುನಾವಣೆಯಲ್ಲಿ ಮತದಾನ ಮಾಡುವಂತೆ ಜಿಪಂ ಸಿಇಓ ವೀರಣ್ಣ ತುರಮರಿ ಹೇಳಿದರು.
ಅವರು ಶನಿವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಚುನಾವಣಾ ಶಾಖೆ, ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಇಲಾಖೆ ಹಾಗೂ ಸ್ಥಳೀಯ ಸ್ತ್ರೀ-ಶಕ್ತಿ ಸ್ವ-ಸಹಾಯ ಗುಂಪುಗಳ ಸಹಯೋಗದಲ್ಲಿ ಸ್ಥಳೀಯ ನಗರಸಭೆಯ ಪ್ರೌಢಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಮತದಾರರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಮನುಷ್ಯನಿಗೆ ಸಂವಿಧಾನಾತ್ಮಕವಾಗಿ ನೀಡಲಾಗಿರುವ ಹಕ್ಕುಗಳಲ್ಲಿ ಮತದಾನದ ಹಕ್ಕು ಕೂಡ ಒಂದಾಗಿದ್ದು, ಪ್ರತಿಯೊಬ್ಬರೂ ಯಾವುದೇ ವ್ಯಕ್ತಿಯ ಆಸೆ ಆಮಿಷಗಳಿಗೆ, ಒತ್ತಡಗಳಿಗೆ ಮಣಿಯದೆ ನಿರ್ಭೀತಿಯಿಂದ ಮತ ಚಲಾಯಿಸಿ ಎಂದರು.
18 ವರ್ಷ ಮೇಲ್ಪಟ್ಟ ನೊಂದಾಯಿತ ಮತದಾರರೆಲ್ಲರೂ ಮೇ. 5ರಂದು ಮತ ಚಲಾಯಿಸಬೇಕು. ಮತದಾನ ದೇಶದ ಸಮಗ್ರ ಜನತೆಗೆ ವರದಾನವಾಗಿದ್ದು, ತಮ್ಮನ್ನಾಳುವ ಸಮರ್ಥ ನಾಯಕನನ್ನು ಆಯ್ಕೆ ಮಾಡಬೇಕಾದ ಹೊಣೆಗಾರಿಕೆ ಮತ್ತು ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಮತದಾನದ ಬಗ್ಗೆ ಕೆಲವರು ನಿರ್ಲಕ್ಷ್ಯ ಭಾವನೆ ಹೊಂದಿರುವುದು ಸರಿಯಲ್ಲ. ಮತದಾನದ ಮಹತ್ವದ ಬಗ್ಗೆ ಎಲ್ಲರೂ ಅರಿತು ಮತದಾನ ಮಾಡುವುದು ಉತ್ತಮ ಬೆಳವಣಿಗೆಯಾಗಿದೆ. ಸಾರ್ವಜನಿಕರು, ವಿದ್ಯಾವಂತರು ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮತದಾನದ ಮಹತ್ವದ ಕುರಿತು ಜನರಲ್ಲಿ ಅರಿವು ಮೂಡಿಸುವಲ್ಲಿ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಇಸ್ಮಾಯಿಲುದ್ದೀನ್ ಗದ್ಯಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಡಿ.ಬಿ. ಚೆನ್ನಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜೀವ ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ನಗರಸಭೆ ಪ್ರೌಢಶಾಲಾ ಮೈದಾನದಿಂದ ಆರಂಭಗೊಂಡ ಮತದಾರರ ಜಾಗೃತಿ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಸಂಪನ್ನಗೊಂಡಿತು. ಜಾಥಾದಲ್ಲಿ ಆರೋಗ್ಯ ಇಲಾಖಾ ಕಾರ್ಯಕರ್ತೆಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ವಸಹಾಯ ಸಂಘಗಳ ಮಹಿಳೆಯರು ಪಾಲ್ಗೊಂಡಿದ್ದರು.