ಮೌಲ್ಯಮಾಪನ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಗದಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಏ. 15ರಿಂದ 22ರ ವರೆಗೆ ಜಿಲ್ಲೆಯ ಒಟ್ಟು 6 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆ ಮೌಲ್ಯಮಾಪನಗಳು ಸುಗಮವಾಗಿ ಜರುಗುವ ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಈ ಅವಧಿಯಲ್ಲಿ ಮೌಲ್ಯಮಾಪನ ಕಾರ್ಯಗಳಿಗಾಗಿ ನೇಮಿಸಲಾದ ಸಿಬ್ಬಂದಿಯ ಹೊರತಾಗಿ ಬೇರೆ ಅನಧಿಕೃತ ವ್ಯಕ್ತಿಗಳ ಅಥವಾ ವ್ಯಕ್ತಿಗಳ ಗುಂಪು ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.