ಸುದ್ದಿ ಸಂಕ್ಷೇಪ
ನಾನು ಸಿಎಂ ಹುದ್ದೆ ಆಕಾಂಕ್ಷಿ ಅಲ್ಲ: ಎಚ್ಕೆ
ಗದಗ: ನಾನು ಸಿಎಂ ಹುದ್ದೆಯ ಆಕಾಂಕ್ಷಿಯಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನನ್ನ ಮುಂದಿರುವ ಪ್ರಮುಖ ಗುರಿ ಎಂದು ಗದಗ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ. ಭಾನುವಾರ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಈ ಹಿಂದೆ ಕಾರ್ಯಕರ್ತರೇ ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಪ್ರಚಾರ ಮಾಡಿದ್ದರು. ಅದಕ್ಕೆ ಹೆಚ್ಚಿನ ಮಹತ್ವ ನೀಡಿರಲಿಲ್ಲ ಎಂದರು.
ಅಂಜಲಿಗೆ 'ಕೈ' ಕೊಟ್ಟಿದ್ದಕ್ಕೆ
ಬೆಂಬಲಿಗರ ಆಕ್ರೋಶ
ಬೆಳಗಾವಿ: ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಖಾನಾಪುರ ತಾಲೂಕಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಖಾನಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳಕರ ಅವರ ಪತ್ನಿ ಡಾ.ಅಂಜಲಿ ನಿಂಬಾಳಕರ ಅವರಿಗೆ ಟಿಕೆಟ್ ನಿರಾಕರಿಸಿ ಅಲ್ಪಸಂಖ್ಯಾತರ ಕೋಟಾದಡಿ ರಫೀಕ್ ಖಾನಾಪುರಿ ಅವರಿಗೆ ನೀಡಲಾಗಿದೆ. ಇದರಿಂದ ಬೇಸತ್ತ ಅಂದಲಿ ಅವರ ಬೆಂಬಲಿಗರು ಭಾನುವಾರ ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಕಲ ಸಿದ್ಧತೆ ನಡೆಸಿದ್ದ ಅಂಜಲಿ ಅವರಿಗೆ ಹೈಕಮಾಂಡ್ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು. ಈ ಮಧ್ಯೆ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಂಜಲಿ ಅವರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎನ್ನಲಾಗಿದೆ. ಅಂಜಲಿ ಅವರು ಕಾಂಗ್ರೆಸ್ ವಿರುದ್ಧ ಬಂಡಾಯದ ಬಾವುಟ ಹಾರಿಸುವ ಸಾಧ್ಯತೆ ಇದೆ. ಹುಕ್ಕೇರಿ ಕ್ಷೇತ್ರದಿಂದ ರವಿ ಕರಾಳೆ ಅವರಿಗೆ ಟಿಕೆಟ್ ನೀಡಿರುವುದು ಕೂಡ ಅಸಮಾಧಾನಕ್ಕೆ ಕಾರಣವಾಗಿದೆ.