ಮಕ್ಕಳ ಅಪೌಷ್ಟಿಕತೆ ನಿವಾರಣೆ
ಕನ್ನಡಪ್ರಭ ವಾರ್ತೆ, ರೋಣ, ಆ. 1
ಮಕ್ಕಳ ದೈಹಿಕ ಮತ್ತು ಮಾನಸಿಕ ಖಿನ್ನತೆಗೆ ಅಪೌಷ್ಟಿಕತೆಯೇ ಕಾರಣವಾಗಿದ್ದು, ಸರ್ಕಾರ ಅಪೌಷ್ಟಿಕತೆ ನಿವಾರಣೆಗೆ ಮಕ್ಕಳಿಗೆ ಹಾಲು ವಿತರಣೆ (ಕ್ಷೀರ ಭಾಗ್ಯ) ಯೋಜನೆ ಜಾರಿಗೆ ತಂದಿದ್ದು ಸ್ತುತ್ಯಾರ್ಹ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಪಾಟೀಲ ಹೇಳಿದರು.
ಅವರು ಗುರುವಾರ ತಾಲೂಕಿನ ಕೃಷ್ಣಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಪಂ, ತಾಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವುಗಳ ಆಶ್ರಯದಲ್ಲಿ ಜರುಗಿದ ಮಕ್ಕಳಿಗೆ ಹಾಲು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರೋಣ ತಾಲೂಕಿನಲ್ಲಿರುವ 1 ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ಎಲ್ಲ ಮಕ್ಕಳಿಗೆ ಈ ಕ್ಷೀರಭಾಗ್ಯ ಯೋಜನೆ ಪ್ರಯೋಜನವಾಗಲಿದೆ. ಈಗಾಗಲೇ ಸರ್ಕಾರ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ, ಗರ್ಭಿಣಿ ತಾಯಂದಿರಿಗೆ ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರವನ್ನು ವಿತರಿಸುತ್ತಿದೆ. ಪ್ರಾಥಮಿಕ ಹಂತದಲ್ಲಿ ಆರೋಗ್ಯದಲ್ಲಿ ತೊಂದರೆಯಾದಲ್ಲಿ ಮಕ್ಕಳು ಚಟುವಟಿಕೆಯಲ್ಲಿ ಹಿಂದೆ ಬೀಳುವ ಸಾಧ್ಯತೆ ಅರಿತ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಲಾಭವನ್ನು ಪಾಲಕರು ಮಕ್ಕಳಿಗೆ ದೊರೆಯುವಂತೆ ಮಾಡುವ ಹೊಣೆಗಾರಿಕೆ ಅತಿ ಮುಖ್ಯವಾಗಿದೆ ಎಂದರು. ಇದೇ ಸಂದರ್ಭದಲ್ಲಿ ಸಿಡಿಪಿಓ ಇಲಾಖೆಯಿಂದ 3 ವರ್ಷದೊಳಗಿನ ಮಕ್ಕಳಿಗೆ ಸಿಡಿಪಿಓ ಕೆಂಪ ಹನುಮಯ್ಯ ಹಾಲು ವಿತರಿಸಿದರು. ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರಶಾಂತ ವರಗಪ್ಪನವರ, ಸಿಡಿಪಿಓ ಕೆಂಪಹನುಮಯ್ಯ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಎಂ.ಎಸ್. ಶೀಲವಂತರ ಮಾತನಾಡಿದರು. ತಾಪಂ ಪ್ರಭಾರಿ ಇಓ ನಾರಾಯಣ, ಮಲ್ಲಯ್ಯ ಸ್ಥಾವರಮಠ, ಅಕ್ಷರ ದಾಸೋಹ ಅಧಿಕಾರಿ ಎಂ.ಎಚ್. ಹಲಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಶಿಕ್ಷಕ ಸಿ.ಬಿ. ರಡ್ಡೇರ ಸ್ವಾಗತಿಸಿ, ನಿರೂಪಿಸಿದರು. ಶಿಕ್ಷಕಿ ಬಿ.ಎನ್. ಕ್ಯಾತನಗೌಡ್ರ ವಂದಿಸಿದರು.