ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಅನ್ಯಾಯವಾದರೆ ಪ್ರತ್ಯೇಕ ರಾಜ್ಯ ಹೋರಾಟ

Lingaraj Badiger
Updated On : 3 Aug 2013, 11:02 am

ಕನ್ನಡಪ್ರಭ ವಾರ್ತೆ, ನರಗುಂದ, ಆ. 2
ದೇಶಕ್ಕೆ ಸ್ವಾತಂತ್ರ್ಯ ದೊರೆತ ನಂತರ ಅಖಂಡ ಕರ್ನಾಟಕ ನಿರ್ಮಾಣಕ್ಕೆ ಹಲವು ಮಹನೀಯರು ಹೋರಾಡಿದ್ದಾರೆ. ಆದರೆ, ಇಂದು ಕೆಲವು ರಾಜಕಾರಣಿಗಳು ಕೇವಲ ದಕ್ಷಿಣ ಕರ್ನಾಟಕಕ್ಕೆ ಹೆಚ್ಚು ಆದ್ಯತೆ ನೀಡಿ, ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸುತ್ತಿದ್ದು, ಇದೇ ರೀತಿ ಮುಂದುವರಿದಲ್ಲಿ ಪ್ರತ್ಯೇಕ ರಾಜ್ಯದ ಹೋರಾಟ ಅನಿವಾರ್ಯ ಎಂದು ಕಳಸಾ ಬಂಡೂರಿ ಯುವ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಹೇಳಿದರು.
ಅವರು ಶುಕ್ರವಾರ ಪಟ್ಟಣದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕರ್ನಾಟಕ ಏಕೀಕರಣಗೊಂಡು ಹಲವಾರು ವರ್ಷ ಗತಿಸಿದರೂ ದಕ್ಷಿಣ ಕರ್ನಾಟಕದಲ್ಲಾದ ಅಭಿವೃದ್ಧಿ ಕಾರ್ಯಗಳು ಉತ್ತರ ಕರ್ನಾಟಕದಲ್ಲಿ ಆಗಿಲ್ಲ. ಯಾವುದೇ ಪಕ್ಷದ ಸರ್ಕಾರ ಬಂದರೂ ಕೇವಲ ದಕ್ಷಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿವೆ. ಉತ್ತರ ಕರ್ನಾಟಕದಲ್ಲಿ ಆರೋಗ್ಯ, ಶಿಕ್ಷಣ, ನೀರಾವರಿ, ಕೃಷಿ, ಇನ್ನು ಹಲವಾರು ಇಲಾಖೆಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಾಗಿವೆ ಎಂದು ಶಾಸಕ, ಸಚಿವರು ಹೇಳಿಕೊಳ್ಳುತ್ತಿದ್ದಾರೆ. ಈ ಕುರಿತು ಎಲ್ಲಿ ಯಾವ್ಯಾವ ಅಭಿವೃದ್ಧಿ ಕಾಮಗಾರಿಗಳಾಗಿವೆ ಎಂಬುವುದನ್ನು ದಾಖಲೆ ಸಮೇತ ತಿಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೆಲಂಗಾಣ ಹೇಗೆ ಪ್ರತ್ಯೇಕ ರಾಜ್ಯವಾಯಿತೋ ಹಾಗೆಯೇ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟದ ರೂಪು ರೇಷೆಗಳನ್ನು ಹಾಕಿಕೊಂಡು ಪ್ರತ್ಯೇಕ ರಾಜ್ಯವಾಗುವವರೆಗೂ ಹೋರಾಟ ನಡೆಸಲಾಗುವುದು ಎಂದರು.

ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ
ಅಭಿವೃದ್ಧಿ ವಿಷಯದಲ್ಲಿ ಸುಮಾರು ವರ್ಷಗಳಿಂದ ದಕ್ಷಿಣ ಕರ್ನಾಟಕದಲ್ಲಿ ಆದಂತಹ ಅಭಿವೃದ್ಧಿ ಕಾರ್ಯಗಳು ಇಂದು ಈ ಭಾಗದಲ್ಲಿ ಆಗಿದ್ದರೆ ಇಲ್ಲಿಯ ಜನತೆಗೆ ಬಡತನದಿಂದ ಬಳಲಿ ಗುಳೆ ಹೋಗುವ ಸ್ಥಿತಿ ಬರುತ್ತಿರಲಿಲ್ಲ. ಈ ಭಾಗದಲ್ಲಿ 3 ವರ್ಷಗಳಿಂದ ಮಳೆಯಾಗದೇ ರೈತರು ಸಂಕಷ್ಟ ಎದುರಿಸುತ್ತಿದ್ದು, ಹಲವು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಕುರಿತು ರಾಜ್ಯ ಸರ್ಕಾರವು ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಹಾಗೂ ದಕ್ಷಿಣ ಕರ್ನಾಟಕಕ್ಕೆ ನೀಡಿದ ಸ್ಥಾನಮಾನದಂತೆಯೇ ಉತ್ತರ ಕರ್ನಾಟಕಕ್ಕೂ ನೀಡಬೇಕು. ಇಲ್ಲದೇ ಹೋದಲ್ಲಿ ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯ ಎಂದು ವಿಜಯ ಕುಲಕರ್ಣಿ ಹೇಳಿದರು. ಬಸನಗೌಡ ಚಿಕ್ಕನಗೌಡರ, ಚಳ್ಳಪ್ಪ ನಾಯ್ಕರ, ಅಣ್ಣಪ್ಪಗೌಡ ಪಾಟೀಲ, ರುದ್ರಪ್ಪ ಗಾಣಿಗೇರ, ಅಲಿಸಾಬ ನದಾಫ, ಬಸಪ್ಪ ಗುಡೇದರಿ, ಗುರುಶಾಂತ ನರಸಾಪುರ, ರವಿ ಬಾರಕೇರ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement