ಸಮರ್ಪಕ ಬಸ್ ಸೇವೆಗೆ ಆಗ್ರಹ: ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಆ. 9
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸ್ಥಳೀಯ ಭಾರತ್ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪಟ್ಟಣದ ಬಸ್ ನಿಲ್ದಾಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿ, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ನೇತೃತ್ವವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷ ಪೀರು ರಾಠೋಡ ಮಾತನಾಡಿ, ಗಜೇಂದ್ರಗಡ ಪಟ್ಟಣವು ಸುತ್ತಲಿನ ಹಲವಾರು ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕೇಂದ್ರವಾಗಿದೆ. ಅಲ್ಲದೆ ನೆರೆಯ ಕೊಪ್ಪಳ ಹಾಗೂ ಬಾಗಲಕೋಟ ಜಿಲ್ಲೆಯ ಹತ್ತಾರು ಗ್ರಾಮಗಳಿಂದ ನಿತ್ಯ ಸಾವಿರಾರು ವಿದ್ಯಾರ್ಥಿಗಳು ವಿದ್ಯಾರ್ಜನೆಗಾಗಿ ಬರುತ್ತಾರೆ.
ಅವರಿಗೆ ಸ್ಥಳೀಯ ವಾಕರಾರಸಾ ಘಟಕದಿಂದ ಸರಿಯಾಗಿ ಬಸ್ ಸೌಕರ್ಯ ಇಲ್ಲದಿರುವುದರಿಂದ ತೀವ್ರ ಸಮಸ್ಯೆಯಾಗಿದೆ. ಈ ಕುರಿತು ಗದಗ ವಿಭಾಗೀಯ ಸಾರಿಗೆ ಘಟಕಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ ಎಂದು ಸಾರಿಗೆ ಅವ್ಯವಸ್ಥೆ ವಿರುದ್ಧ ದೂರಿದರು. ಜಿಲ್ಲಾ ಉಪಾಧ್ಯಕ್ಷ ಬಾಲು ರಾಠೋಡ ಮಾತನಾಡಿ, ಗಜೇಂದ್ರಗಡ ಪಟ್ಟಣದಲ್ಲಿ ಸಾರಿಗೆ ಘಟಕ ಇದ್ದರೂ ಗ್ರಾಮೀಣ ಪ್ರದೇಶದ ಜನತೆಯ ಪಾಲಿಗೆ ಇಲ್ಲದಂತಾಗಿ ಜನರು ಖಾಸಗಿ ವಾಹನದಲ್ಲಿ ಪ್ರಯಾಣಿಸುವುದು ಅನಿವಾರ್ಯವಾಗಿದೆ. ಈ ಕೂಡಲೇ ಸಾರಿಗೆ ಅಧಿಕಾರಿಗಳು ಎಚ್ಚೆತ್ತುಕೊಂಡು ವಿದ್ಯಾರ್ಥಿಗಳ ಹಾಗೂ ಪ್ರಯಾಣಿಕರಿಗೆ ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ಸಂಘಟನೆಯಿಂದ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.
ನಿಲ್ದಾಣದ ವ್ಯವಸ್ಥಾಪಕ ಎಸ್.ವೈ. ಜಿಗಳೂರ ಪ್ರತಿಭಟನಾ ನಿರತರ ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮೇಲಧಿಕಾರಿಗಳ ಗಮನಕ್ಕೆ ತಂದು ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ಸರಿಪಡಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು. ಬಾಲಕೃಷ್ಣ ಜಾಡಬಂಡಿ, ಶಿವಾಜಿ ಗಡ್ಡದ, ಶ್ರೀಧರ ಮಲಕೋಜಿ, ಚಿದಾನಂದ ಕೊಪ್ಪಳ, ಮಹ್ಮದ ರಫೀಕ, ಹನುಮಂತ ಅರಳಿಗಿಡದ, ಆನಂದ ರಾಠೋಡ ಸಂಗಮೇಶ ಗೊರೇಬಾಳ ಯಲ್ಲಪ್ಪ ರಾಜೂರ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.