ವಿಪ ಉಪ ಚುನಾವಣೆ: 1908 ಮತದಾರರು
ಕನ್ನಡಪ್ರಭ ವಾರ್ತೆ, ಗದಗ, ಆ. 21
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಉಪ ಚುನಾವಣೆಗೆ ಆ. 22ರಂದು ಮತದಾನ ನಡೆಯಲಿದ್ದು, ಅಭ್ಯರ್ಥಿಗಳಲ್ಲಿ ಆತಂಕ ಶುರುವಾಗಿದ್ದರೆ, ಕಾರ್ಯಕರ್ತರು ಮಾತ್ರ ನಿರುತ್ಸಾಹದಿಂದಲೇ ಚುನಾವಣೆ ಎದುರಿಸುತ್ತಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯಾಗಿದ್ದರೆ, ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ ಲಯ ಕಂಡುಕೊಳ್ಳಲು ಹವಣಿಸುತ್ತಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಡೆದ ಮನೆಯಾಗಿದ್ದ ಬಿಜೆಪಿ ಈ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಕೆಜೆಪಿ ಹಾಗೂ ಜೆಡಿಎಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರಿಂದ ಚುನಾವಣೆಯಲ್ಲಿ ನೇರ ಸ್ಪರ್ಧೆ ಏರ್ಪಟ್ಟಿದ್ದು, ಬಿಜೆಪಿಗೆ ಅಲ್ಪ ಬೆಂಬಲ ಬಂದಂತಾಗಿ ಗೆಲುವಿನ ಕನಸು ಕಾಣುತ್ತಿದೆ.
ಇನ್ನು ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಮಾಡಿದ ಹಿನ್ನೆಲೆಯಲ್ಲಿ ಗೆಲುವು ನಮ್ಮದೇ ಎನ್ನುವ ವಿಶ್ವಾಸದಲ್ಲಿದೆ.
ಈ ಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಧ್ರುವೀಕರಣವಾಗಲಿದೆ ಎನ್ನುವ ಲೆಕ್ಕಾಚಾರವೂ ಜಿಲ್ಲೆಯ ರಾಜಕೀಯ ವಲಯದಲ್ಲಿ ಬಲು ಜೋರಾಗಿಯೇ ಕೇಳಿ ಬರುತ್ತಿದೆ. ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯನವರ ವರ್ಚಸ್ಸನ್ನೇ ಆಧಾರವಾಗಿಟ್ಟುಕೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ನಾಗರಾಜ ಛಬ್ಬಿ ಗೆಲುವಿನ ಬಗ್ಗೆ ಮಾತನಾಡಿದರೆ, ಒಡೆದ ಮನೆಯಾಗಿದ್ದ ಬಿಜೆಪಿ ಈ ಚುನಾವಣೆಯಲ್ಲಿ ಮತ್ತೆ ಒಂದಾಗಿರುವುದು ಹಾಗೂ ಅಣ್ಣ ಮಾಜಿ ಸಿಎಂ ಜಗದೀಶ ಶೆಟ್ಟರ್ ಪ್ರಭಾವವೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎನ್ನುವ ಅಚಲ ವಿಶ್ವಾಸ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರದ್ದು.
ಹಲವಾರು ವರ್ಷಗಳ ನಂತರ ಕಾಂಗ್ರೆಸ್ ಪಕ್ಷಕ್ಕೆ ಕಾಂಗ್ರೆಸ್ಸೇತರರೆಲ್ಲಾ ಒಂದಾಗಿ ಚುನಾವಣೆ ಎದುರಿಸುತ್ತಿದ್ದು ಎಲ್ಲರ ದೃಷ್ಟಿ ಮತದಾನದತ್ತ ಕೇಂದ್ರೀಕೃತವಾಗಿದೆ.