ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಶಿಕ್ಷಕರು ಸರ್ಕಾರದ ಕಾರ್ಯಕ್ರಮ ಸಮರ್ಪಕ ಅನುಷ್ಠಾನಗೊಳಿಸಿ: ಡಿಸಿ

Mainashree
Updated On : 28 Aug 2013, 11:40 am

ಕನ್ನಡಪ್ರಭ ವಾರ್ತೆ, ಗದಗ, ಆ. 27
ಶೈಕ್ಷಣಿಕ ಪ್ರಗತಿಯೊಂದಿಗೆ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶಿಕ್ಷಕ ಸಮುದಾಯವು ಗಮನ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಟಿ. ಅಂಜನ್‌ಕುಮಾರ ಹೇಳಿದರು. ಅವರು ಮಂಗಳವಾರ ನಗರದ ಕನಕಭವನದಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಬಿಸಿಯೂಟ ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರವು ಮಕ್ಕಳಿಗಾಗಿಯೇ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಮಕ್ಕಳಿಗೆ ತಲುಪುವಂತೆ ಮಾಡುವಲ್ಲಿ ಶಿಕ್ಷಕರ ಹಾಗೂ ಮುಖ್ಯೋಪಾಧ್ಯಾಯರು ಪ್ರಮುಖ ಪಾತ್ರ ವಹಿಸುತ್ತಾರೆ. ಈಗಾಗಲೇ ಜಿಲ್ಲೆಯಲ್ಲಿ ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಚಾಲನೆಯಲ್ಲಿದ್ದು, ಈ ಯೋಜನೆಗಳನ್ನು ಮಕ್ಕಳಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಶ್ರಮಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ 848 ಶಾಲೆಗಳ ಪೈಕಿ 717 ಶಾಲೆಗಳಲ್ಲಿ ಬಿಸಿಯೂಟದ ಅಡುಗೆ ಕೋಣೆಗಳಿದ್ದು, ಇನ್ನುಳಿದ ಶಾಲೆಗಳಿಗೆ ಅಡುಗೆ ಕೋಣೆ ನಿರ್ಮಾಣ ಮಾಡುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ಮುಖ್ಯೋಪಾಧ್ಯಾಯರೋರ್ವರು ರಾಜ್ಯ ಸರ್ಕಾರವು ಬಿಸಿಯೂಟ ಯೋಜನೆ ತಂದಿರುವುದು ಸ್ವಾಗತಾರ್ಹ. ಆದರೆ, ಬಿಸಿಯೂಟದ ಸಾಮಗ್ರಿಗಳ ವಿತರಣೆಯಲ್ಲಿ ಕೆಲ ತೊಂದರೆಗಳಾಗುತ್ತಿದ್ದು, ಬಿಸಿಯೂಟಕ್ಕೆ ಬರುವ ಅಕ್ಕಿಯಲ್ಲಿ ತೂಕದಲ್ಲಿ ವ್ಯತ್ಯಾಸವಾಗುತ್ತಿದೆ. ಇದರಿಂದ ಇಲಾಖೆಗೆ ಸಮರ್ಪಕ ಮಾಹಿತಿ ನೀಡಲು ತೊಂದರೆಯಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿಸಿ ಅಂಜನ್‌ಕುಮಾರ ಅವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿ ಶಶಿಧರ ಕುರೇರ ಅವರಿಗೆ ಈ ಕುರಿತು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕುರೇರ, ಸರ್ಕಾರದಿಂದ ಬರುವ ಅಕ್ಕಿ ಚೀಲಗಳಲ್ಲಿಯೇ ಕೆಲ ಪ್ರಮಾಣದಲ್ಲಿ ಕೆಲವು ಚೀಲಗಳಲ್ಲಿ ಅಕ್ಕಿಯು ಕಡಿಮೆ ಪ್ರಮಾಣದಲ್ಲಿ ಬರುತ್ತಿವೆ ಎಂದರು. ನಂತರ ಮಾತನಾಡಿದ ಡಿಸಿ, ಹೀಗೆ ಅಕ್ಕಿಯು ಕಡಿಮೆ ಪ್ರಮಾಣದಲ್ಲಿ ಬಂದರೆ ಶಾಲಾ ಮುಖ್ಯೋಪಾಧ್ಯಾಯರು ಹೇಗೆ ಮಾಹಿತಿ ನೀಡಬೇಕು. ಈ ಕುರಿತು 3 ತಿಂಗಳಲ್ಲಿ ಅಗತ್ಯ ಕ್ರಮ ಕೈಗೊಂಡು ಸಮರ್ಪಕ ಅಕ್ಕಿ ವಿತರಣೆಗೆ ವ್ಯವಸ್ಥೆ ಕಲ್ಪಿಸಲಾಗುವುದು. ಜಿಲ್ಲೆಯ ಎಲ್ಲ ಶಾಲೆಗಳಿಗೂ ಸಮರ್ಪಕವಾಗಿ ಬಿಸಿಯೂಟದ ಸಾಮಗ್ರಿಗಳು ತಲುಪಿಸಲು ಬೇಕಾದ ಅಗತ್ಯ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಜಿಪಂ ಸಿಇಒ ವೀರಣ್ಣ ತುರಮರಿ ಮಾತನಾಡಿ, ಶಾಲಾ ಮುಖ್ಯೋಪಾಧ್ಯಾಯರು ಬಿಸಿಯೂಟ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪ್ರಯತ್ನಿಸಬೇಕು. ಬಿಸಿಯೂಟ ತಯಾರಿಸುವ ಅಡುಗೆ ಕೋಣೆಯ ಶುಚಿತ್ವಕ್ಕೆ ಆದ್ಯತೆ ನೀಡಿ, ಬಿಸಿಯೂಟ ನೌಕರರು ಕಡ್ಡಾಯವಾಗಿ ಸಮವಸ್ತ್ರ ಧರಿಸಿ ಅಡುಗೆ ತಯಾರಿಸಬೇಕು. ಈಚೆಗೆ ಬಿಹಾರ, ತಮಿಳುನಾಡಿನಲ್ಲಾದ ಘಟನೆಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು. ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಅಧಿಕಾರಿ ಎ.ಎನ್. ವಡಗೇರಿ, ಬಿ.ಎನ್. ರಘುವೀರ ಸೇರಿದಂತೆ ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು. ಡಿಡಿಪಿಐ ಐ.ಬಿ. ಬೆನಕೊಪ್ಪ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement