ಜಾತಿವಾರು ಗಣತಿಗೆ ಶೀಘ್ರ ಚಾಲನೆ
ಕನ್ನಡಪ್ರಭ ವಾರ್ತೆ, ಗದಗ, ಡಿ. 23
ರಾಜ್ಯದಲ್ಲಿ ಜಾತಿವಾರು ಜನಗಣತಿ ಕಾರ್ಯಕ್ಕೆ ಮುಂಬರುವ ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಚಾಲನೆ ನೀಡಲಿದ್ದು, ಇದರಿಂದ ಎಲ್ಲರಿಗೂ ಸಮಾನನ್ಯಾಯ ಸಿಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದರು.
ಅವರು ಸೋಮವಾರ ನಗರದಲ್ಲಿ ನಡೆಯುತ್ತಿರುವ ಅಂಬೇಡ್ಕರ್ ಭವನ ಕಾಮಗಾರಿ ವೀಕ್ಷಣೆ ಹಾಗೂ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ, ಜಿಲ್ಲಾಡಳಿತ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪ್ರಸಕ್ತ ಸಾಲಿನಿಂದ ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಹಲವಾರು ಕಾರ್ಯಕ್ರಮಗಳನ್ನು ಸರ್ಕಾರ ಜಾರಿಗೆ ತಂದಿದೆ ಎಂದು ಇಲಾಖೆಯ ಅಂಕಿ ಅಂಶಗಳ ಬಗ್ಗೆ ವಿವರಿಸಿದ ಅವರು, ನಗರದ ಹುಬ್ಬಳ್ಳಿ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನ ಕಾಮಗಾರಿ ಕಳಪೆಯಾಗಿದ್ದು, ಮರು ದುರಸ್ತಿ ಕೈಗೊಂಡು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಆದೇಶ ನೀಡಿದ್ದೇನೆ. ಅಂಬೇಡ್ಕರ್ ಭವನ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ಕಾಮಗಾರಿಗೆ ಯಾವುದೇ ರೀತಿಯ ಹಣಕಾಸಿನ ಕೊರತೆಯಿಲ್ಲ. ಕಾಮಗಾರಿ ಬೇಗನೇ ಮುಗಿಸಿ, 2014ರ ಅಂತ್ಯಕ್ಕೆ ಪೂರ್ಣಗೊಳಿಸುವ ಕಾಲಮಿತಿ ಯೋಜನೆ ರೂಪಿಸಲಾಗಿದೆ. ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುತ್ತಿದ್ದು, ಜಾತಿವಾರು ಜನಗಣತಿಯ ನಂತರ ಜನಸಂಖ್ಯೆ ಗನುಗುಣವಾಗಿ ಮೀಸಲಾತಿಯಲ್ಲಿ ಆರ್ಥಿಕ ನೆರವು ಜರುಗುವ ಕಾರಣ ಕ್ರಾಂತಿಕಾರಕ ಬದಲಾವಣೆ ಸಾಧ್ಯವಾಗಲಿದೆ ಎಂದರು. ಅಪರ ಜಿಲ್ಲಾಧಿಕಾರಿ ನಾಗರಾಜ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರಮರಿ ಉಪಸ್ಥಿತರಿದ್ದರು.