ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಲಿ
ಮುಂಡರಗಿ: ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ, ಅಂತಹ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರ ಜತೆಗೆ ರಕ್ತ ಹೀನತೆಯಿಂದ ಬಳಲುತ್ತಿರುವ ತಾಯಂದಿರ ಆರೋಗ್ಯವೂ ಅಷ್ಟೇ ಮುಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿ ಡಾ. ಪಾಂಡುರಂಗ ಕಬಾಡಿಹೇಳಿದರು.
ಅವರು ಭಾನುವಾರ ಮುಂಡರಗಿ ಸರ್ಕಾರಿ ಆಸ್ಪತ್ರೆಯ ಸಮುದಾಯ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮುಂಡರಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂಡರಗಿ ಇವುಗಳ ಆಶ್ರಯದಲ್ಲಿ ಏರ್ಪಡಿಸಿದ್ದ ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದರು.
ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ. ವೈ.ಕೆ. ಭಜಂತ್ರಿ ಮಾತನಾಡಿ, ಇಂದು ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಸಾಕಷ್ಟು ವೆಚ್ಚಮಾಡುತ್ತಿದ್ದು, ತಾಯಂದಿರು ತಮ್ಮ ಮಕ್ಕಳ ಆರೋಗ್ಯ ಹಾಗೂ ಆ ಮಕ್ಕಳು ಸೇವಿಸುವ ಆಹಾರದ ಕುರಿತು ಹೆಚ್ಚು ಕಾಳಜಿವಹಿಸಬೇಕು. ಹಣ್ಣು, ತರಕಾರಿಗಳು ಸೇರಿದಂತೆ ಪೌಷ್ಟಿಕ ಆಹಾರವನ್ನು ಸೇವಿಸಿ ಆರೋಗ್ಯದಿಂದ ಇರಬೇಕು ಎಂದರು. ತಾಲೂಕು ವೈದ್ಯಾಧಿಕಾರಿ ಡಾ. ಸುಭಾಸ ದೈಗೊಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಚ್. ಪರಮೇಶ್ವರಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ, ಡಾ. ಗಣೇಶ, ಡಾ. ಅನುರಾಧಾ, ಡಾ. ದೇಸಾಯಿ, ಡಾ. ವೀರಭದ್ರಗೌಡ ಪಾಟೀಲ, ಡಾ. ಶಂಕರ ಭಾವಿಮನಿ, ಡಾ. ಬಡಿಗೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಸಿಡಿಪಿಒ ಎಸ್.ಎಸ್. ವಾರದ ಸ್ವಾಗತಿಸಿ, ಎಲ್.ಬಿ. ಹೊಸಳ್ಳಿ ನಿರೂಪಿಸಿ, ಅವಿನಾಶ ಗೋಡಖಿಂಡಿ ವಂದಿಸಿದರು.