ಜಿಲ್ಲೆಯಲ್ಲಿ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಡಿಸಿ ಸೂಚನೆ
ಗದಗ: ಜಿಲ್ಲೆಯಲ್ಲಿ ಬರುವ ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಜಿಲ್ಲೆಯ ವಿವಿಧ ಅಧಿಕಾರಿಗಳಿಗೆ ಕರೆ ನೀಡಿದರು. ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಣರಾಜ್ಯೋತ್ಸವದ ಅಂಗವಾಗಿ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಜರುಗುವ ಸಾರ್ವಜನಿಕ ಧ್ವಜಾರೋಹಣ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರನ್ನು ಆಹ್ವಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಗಣರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲು ಹಾಗೂ ರಾಷ್ಟ್ರ ಭಕ್ತಿಯನ್ನು ಬಿಂಬಿಸುವ ಉತ್ತಮ ಗುಣಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಯೋಜಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು. ಗಣರಾಜ್ಯೋತ್ಸವದ ಅಂಗವಾಗಿ ನಗರದ ವಿವಿಧ ವೃತ್ತಗಳಲ್ಲಿ ಹಾಗೂ ವಿವಿಧ ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡುವಂತೆ ಕ್ರಮ ಕೈಗೊಳ್ಳಲಾಯಿತು. ಗಣರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಏರ್ಪಡಿಸಲು ಸ್ವಾಗತ, ಸನ್ಮಾನ, ವೇದಿಕೆ ನಿರ್ಮಾಣ, ಸಾಂಸ್ಕೃತಿಕ ಕಾರ್ಯಕ್ರಮ ಮುಂತಾದ ಸಮಿತಿಗಳನ್ನು ರಚಿಸಲಾಯಿತು. ಈ ಸಮಿತಿಗಳು ತಮಗೆ ವಹಿಸಿಕೊಟ್ಟ ಕಾರ್ಯಕ್ರಮಗಳ ರೂಪು ರೇಷೆ ತಯಾರಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡುವಂತೆ ಸಭೆಯಲ್ಲಿ ತಿಳಿಸಲಾಯಿತು. ಸರ್ಕಾರಿ ನೌಕರರು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೂಚಿಸಲಾಯಿತು. ಸಮಾರಂಭಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲು ಸಭೆ ನಿರ್ಧರಿಸಿತು. ಸಭೆಯಲ್ಲಿ ಸಿಇಓ ವೀರಣ್ಣ ತುರಮರಿ, ಡಿವೈಎಸ್‌ಪಿ ವಿಜಯ ಡಂಬಳ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.