ಚುನಾವಣೆಗೆ ದುಡ್ಡೇ ಸರ್ವಸ್ವವಲ್ಲ
ಶಿರಹಟ್ಟಿ: ರಾಜಕಾರಣದಲ್ಲಿ ಜಾತೀಯತೆ, ದುಡ್ಡಿನ ಪ್ರಭಾವವೇ ಹೆಚ್ಚಾಗಿದ್ದು, ಮಾನವೀಯತೆ ಇಲ್ಲವಾಗಿದೆ ಎಂದು ರಾಜೀವ ಗಾಂಧಿ ಪಂಚಾಯತ್ರಾಜ್ ಸಂಘಟನೆ ರಾಷ್ಟ್ರೀಯ ಸಂಚಾಲಕ ಮಣಿಶಂಕರ್ ಅಯ್ಯರ್ ಹೇಳಿದರು.
ಅವರು ಭಾನುವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ರಾಜೀವ ಗಾಂಧಿ ಪಂಚಾಯತ್ರಾಜ್ ಸಂಘಟನೆ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿಯೇ ಮೊಟ್ಟ ಮೊದಲ ಬಾರಿ ಗದಗ ಜಿಲ್ಲೆಯಲ್ಲಿ ಸಂಘಟನೆ ಪ್ರಾರಂಭಗೊಂಡು ಯಶಸ್ವಿಯಾಗಿದೆ. ಜಾತ್ಯತೀತ ರಾಷ್ಟ್ರ ಕಟ್ಟಲು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ. ಎಲ್ಲ ಹಂತದಲ್ಲಿಯೂ ಎಲ್ಲ ವರ್ಗದ ಜನರಿಗೂ ಸಾಮಾಜಿಕ ನ್ಯಾಯ ಜಾರಿಗೆ ತಂದು ಪ್ರಜಾಪ್ರಭುತ್ವ ಉಳಿಸಲು ಹೊರಟಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರೆ ನೀಡಿದರು. ಮಾಜಿ ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು ಒಗ್ಗಟ್ಟಾಗಿ ಮುಂದಿನ ಚುನಾವಣೆ ಎದುರಿಸಿದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರವುದು ಖಂಡಿತ ಎಂದರು. ರಾಜ್ಯದಲ್ಲಿ ಮುಂದೆ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಟಿಕೆಟ್ಗಾಗಿ ಒತ್ತಡ ಹೇರದೇ ಎಲ್ಲರೂ ಒಮ್ಮತದ ನಿರ್ಣಯಕ್ಕೆ ಬಂದು ನೀವೇ ಅಭ್ಯರ್ಥಿ ಹೆಸರು ಸೂಚಿಸಿ, ಚುನಾವಣೆಯಲ್ಲಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ತಿಳಿಸಿದರು. ಮಾಜಿ ಶಾಸಕ ಡಿ.ಆರ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಗಡ್ಡದ್ದೇವರಮಠ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಟಿ. ಈಶ್ವರ ಮತ್ತಿತರರು ಮಾತನಾಡಿದರು. ವಿಪ ಸದಸ್ಯ ಶ್ರೀನಿವಾಸ ಮಾನೆ, ವಾಸಣ್ಣ ಕುರಡಗಿ, ಮಾಜಿ ಸಚಿವ ಬಿ.ಆರ್. ಯಾವಗಲ್, ಜಿ.ಎಸ್. ಪಾಟೀಲ, ಪ್ರಭು ಮೇಟಿ, ಶಿವಪ್ರಕಾಶ ಮಹಾಜನಶೆಟ್ಟರ, ಯು.ಎನ್. ಹೊಳಲಾಪುರ, ದೇವಪ್ಪ ಲಮಾಣಿ, ಡಿ.ಎನ್. ಡಬಾಲಿ ಮುಂತಾದವರು ಉಪಸ್ಥಿತರಿದ್ದರು. ಪಪಂ ಅಧ್ಯಕ್ಷ ಹುಮಾಯೂನ ಮಾಗಡಿ ಸ್ವಾಗತಿಸಿದರು. ಮಹೇಶ ಹಾರೋಗೇರಿ ನಿರೂಪಿಸಿದರು. ಮಂಜುನಾಥ ಘಂಟಿ ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.