ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಬೇಸಿಗೆ: ನೀರಿನ ಸಮಸ್ಯೆ ಎದುರಿಸಲು ಸಿದ್ಧರಾಗಿ

Rashmi Kasaragodu
Updated On : 30 Jan 2013, 10:55 am




ಗದಗ: ಮುಂಬರುವ ಬೇಸಿಗೆಯಲ್ಲಿ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲೆದೂರುವ ಸಾಧ್ಯತೆ ನಿಚ್ಚಳವಾಗಿದ್ದು, ಅಧಿಕಾರಿಗಳು ಈಗಿನಿಂದಲೇ ಎಲ್ಲ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ಬೇಸಿಗೆಯನ್ನು ಸಮರ್ಥವಾಗಿ ಎದುರಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಅವರು ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಲಾಗಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕೆ ಉತ್ತರಿಸಿದ ಜಿಪಂ ಸಿಇಓ ವೀರಣ್ಣ ತುರಮರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ # 42 ಕೋಟಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅದರಲ್ಲಿ 427 ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಇನ್ನು ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಯಿಂದ ಹೆಚ್ಚುವರಿಯಾಗಿ # 13 ಕೋಟಿ 40 ಲಕ್ಷದ ಕ್ರೀಯಾ ಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಇದಕ್ಕೆ ಸರ್ಕಾರದಿಂದಲೂ ಅನುಮೋದನೆ ದೊರೆತಿದೆ. ಬೇಸಿಗೆಯ ಸಂದರ್ಭದಲ್ಲಿ ಬೇಕಾಗುವ ದೃಷ್ಟಿಯಿಂದ # 6 ಕೋಟಿಯ ನೂತನ ಪ್ರಸ್ತಾವನೆಯನ್ನು ರವಾನಿಸಲಾಗಿದೆ. ಸದ್ಯ ಜಿಲ್ಲೆಯ ಯಾವ ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದರು. ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಕುರಿತು ಸಚಿವ ಬಂಡಿ, ಡಿಡಿಪಿಐ ರಾಜೀವ ನಾಯಕ ಅವರನ್ನು ಪ್ರಶ್ನಿಸುತ್ತಿದ್ದಂತೆ ಕಳೆದ ಬಾರಿ ಜಿಲ್ಲೆಯು ರಾಜ್ಯಕ್ಕೆ 28ನೇ ಸ್ಥಾನ ಪಡೆದಿತ್ತು. ಈ ಬಾರಿ 10 ರೊಳಗೆ ಸ್ಥಾನ ಪಡೆಯುವಂತೆ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದರು. ಪಿಯುಸಿ ವಿಷಯವಾಗಿಯೂ ಜಿಲ್ಲೆ ಉತ್ತಮ ಸ್ಥಾನ ಪಡೆಯಬೇಕು. ಸಾಧ್ಯವಾದಲ್ಲಿ ಮೊದಲ 5 ಸ್ಥಾನದಲ್ಲಿ ಗದಗ ಜಿಲ್ಲೆ ಬರಬೇಕೆಂದು ಡಿಡಿಪಿಐ ಹಾಗೂ ಡಿಡಿಪಿಯು ಅವರಿಗೆ ಸಚಿವ ಬಂಡಿ ತಾಕೀತು ಮಾಡಿದರು.
ಸಭೆಯಲ್ಲಿ ಗ್ರಂಥಾಲಯ, ಆರೋಗ್ಯ ಇಲಾಖೆ, ಪಂಚಾಯತ್ ರಾಜ್ ಎಂಜನೀಯರಿಂಗ್ ವಿಭಾಗ ಸೇರಿದಂತೆ 18ಕ್ಕೂ ಹೆಚ್ಚು ಇಲಾಖೆಯ ಪರಿಶೀಲನೆ ನಡೆಸಲಾಯಿತು. ಗದಗ ಶಾಸಕ ಶ್ರೀಶೈಲಪ್ಪ ಬಿದರೂರ, ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಎಸ್‌ಪಿ ಶರಣಪ್ಪ ಡಿ.ಎಸ್, ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ಉಪಾಧ್ಯಕ್ಷ ರಮೇಶ ಮುಂದಿನಮನಿ ಮುಂತಾದವರು ಹಾಜರಿದ್ದರು.
ಜನರ ಸಮಸ್ಯೆಗೆ ಸ್ಪಂದಿಸಿ: ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಯಾವುದೇ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನವನ್ನು ಬಿಟ್ಟು ತೆರಳದೇ ಕೆಲಸ ಮಾಡುವ ಸ್ಥಳದಲ್ಲಿಯೇ ವಾಸವಿದ್ದು, ಜಿಲ್ಲೆಯ ಜನತೆಯ ಸಮಸ್ಯೆಯನ್ನು ಆಲಿಸಬೇಕು. ಯಾವುದೇ ಗ್ರಾಮಗಳಲ್ಲಿ ಸಮಸ್ಯೆ ಕಂಡು ಬಂದ ತಕ್ಷಣವೇ ಅದನ್ನು ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ಇಲ್ಲವಾದಲ್ಲಿ ಕಠಿಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಭಿವೃದ್ಧಿಗೆ ಸಹಕರಿಸಿ: ಜಿಲ್ಲೆಯ ಮಹಾತ್ವಾಕಾಂಕ್ಷಿ ಯೋಜನೆಯಾದ ಸಿಂಗಟಾಲೂರ ಏತ ನೀರಾವರಿ ಯೋಜನೆಗೆ ಸಾಮಾಜಿಕ ಅರಣ್ಯ ಇಲಾಖೆಯಿಂದ ಕಾಲುವೆ ನಿರ್ಮಾಣಕ್ಕೆ ಅಡ್ಡಿ ಉಂಟಾಗುತ್ತಿದೆ. ಸರ್ಕಾರ ರೈತರ ಅನುಕೂಲಕ್ಕಾಗಿ ಯೋಜನೆ ರೂಪಿಸಿದೆ. ಇದರಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲ. ಹಾಗಾಗಿ ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ನೀಡಬೇಕೆಂದು ಕರ್ನಾಟಕ ನೀರಾವರಿ ನಿಗಮದ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒಟ್ಟಿಗೆ ಕರೆದು ಚರ್ಚಿಸಿ, ಸಭೆಯ ನಂತರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಸೂಚಿಸಿದರು.
ಫೆ. 10ರೊಳಗೆ ಪಡಿತರ ಚೀಟಿ ವಿತರಿಸಿ
ಜಿಲ್ಲೆಯ 5 ತಾಲೂಕುಗಳ ವ್ಯಾಪ್ತಿಯಲ್ಲಿ 51 ಸಾವಿರ ಪಡಿತರ ಕಾರ್ಡ್‌ಗಳನ್ನು ವಿತರಣೆ ಮಾಡಲಾಗಿದೆ. ಇನ್ನು 31 ಸಾವಿರಕ್ಕೂ ಅಧಿಕ ಪಡಿತರ ಚೀಟಿಗಳನ್ನು ವಿತರಣೆ ಮಾಡಬೇಕಾಗಿದ್ದು, ಇದಕ್ಕಾಗಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶಶಿ ಕುರೇರ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಬಂಡಿ, ಫೆ. 10 ರೊಳಗಾಗಿ ಎಲ್ಲ ಅರ್ಹರಿಗೂ ಪಡಿತರ ಕಾರ್ಡ್‌ಗಳನ್ನು ವಿತರಣೆ ಮಾಡಬೇಕು. ಇದಕ್ಕೆ ತಪ್ಪಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಖಂಡಿತ ಎಂದರು.
ಜಿಲ್ಲೆಯ ಕೆಲ ಗ್ರಾಪಂಗಳಲ್ಲಿ ಗ್ರಾಪಂಗೆ ಬರಬೇಕಾದ ಎಲ್ಲ ಕರಗಳನ್ನು ಭರ್ತಿ ಮಾಡಿದ ನಂತರವೇ ಪಡಿತರ ಚೀಟಿ ಕೊಡುವುದಾಗಿ ಹೇಳುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು. ಬಡವರಿಗೆ ಸರ್ಕಾರ ನೀಡಿರುವ ಪಡಿತರ ಚೀಟಿಯನ್ನು ಅವರಿಗೆ ತಲುಪಿಸುವ ಕಾರ್ಯ ನಡೆಯಬೇಕೆಂದು ಸಚಿವ ಬಂಡಿ ಅಧಿಕಾರಿಗಳಿಗೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement