ಶಿಕ್ಷಣ ಕ್ಷೇತ್ರ ಶುದ್ಧೀಕರಿಸಿ: ಒತ್ತಾಯ
ಕನ್ನಡಪ್ರಭ ವಾರ್ತೆ, ಗದಗ, ಜೂ. 6
ಶಿಕ್ಷಣ ಕ್ಷೇತ್ರವನ್ನು ಶುದ್ಧೀಕರಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಎಸ್ಎಫ್ಐ ಸಂಘಟನೆಯ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮನವಿಯಲ್ಲಿ 2008ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಶಿಕ್ಷಣದ ವ್ಯಾಪಾರೀಕರಣ-ಖಾಸಗೀಕರಣ-ಕೇಸರೀಕರಣವನ್ನು ತೀವ್ರಗೊಳಿಸಿ, ಶಿಕ್ಷಣ ಕ್ಷೇತ್ರವನ್ನು ಅಧೋಗತಿಗೆ ತಳ್ಳಿದೆ. ರಾಜ್ಯದಲ್ಲಿ ತಮ್ಮ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರದ ಮೇಲೆ ವಿದ್ಯಾರ್ಥಿಗಳು-ಯುವಜನರು ಅನೇಕ ನಿರೀಕ್ಷೆಗಳನ್ನಿಟುಕೊಂಡಿದ್ದಾರೆ. ಹಿಂದಿನ ಸರ್ಕಾರ ಅನುಸರಿಸಿದ ತಪ್ಪು ನೀತಿಗಳನ್ನು ಬದಲಾಯಿಸಿ ವಿದ್ಯಾರ್ಥಿ-ಶಿಕ್ಷಕರ ಪರವಾದ ನೀತಿಗಳನ್ನು ಜಾರಿಗೊಳಿಸಿ ಶಿಕ್ಷಣ ಕ್ಷೇತ್ರವನ್ನು ಶುದ್ಧೀಕರಿಸಬೇಕೆಂದು ಸಂಘಟನೆ ಆಗ್ರಹಿಸುತ್ತದೆ.
ಸಂವಿಧಾನಬದ್ಧ ಮಕ್ಕಳ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009ನ್ನು ರಾಜ್ಯದಲ್ಲಿ ಸಮರ್ಪಕವಾಗಿ ಜಾರಿಗೊಳಿಸುವ ಬದಲಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪರವಾಗಿ ಹಿಂದಿನ ಸರ್ಕಾರ ನಿಯಮಗಳನ್ನು ರೂಪಿಸಿತ್ತು. ಕಾಯ್ದೆಯ ಪ್ರಕಾರ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲೂ ಖಾಸಗಿ ಶಾಲೆಗಳಲ್ಲಿ ಶೇ.25ರಷ್ಟು ಮಕ್ಕಳಿಗೆ (ಸಾಮಾಜಿಕ-ಆರ್ಥಿಕವಾಗಿ ದುರ್ಬಲವಿರುವವರಿಗೆ) ಪ್ರವೇಶ ನೀಡಲು ಇನ್ನಷ್ಟು ಶುಲ್ಕ ಹೆಚ್ಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಖಾಸಗಿ ಶಾಲೆಗಳ ಒತ್ತಡಕ್ಕೆ ಮಣಿಯದೇ, ಶುಲ್ಕ ಹೆಚ್ಚಳ ಮಾಡಬಾರದು. ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ನಾಯಿಕೊಡೆಗಳಂತೆ ಬೆಳೆದಿವೆ. ಸರ್ವರಿಗೂ ಶಿಕ್ಷಣ ನೀಡಬೇಕೆನ್ನುವ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಖಾಸಗಿ ಶಾಲೆಗಳು ದಲಿತ-ಹಿಂದುಳಿದ-ಅಲ್ಪ ಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನಿರಾಕರಿಸುತ್ತಿವೆ. 1983ರ ಕರ್ನಾಟಕ ಶಿಕ್ಷಣ ಅಧಿನಿಯಮದ ಪ್ರಕಾರ ಡೊನೇಶನ್ ಹಾವಳಿ ನಿಯಂತ್ರಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರವನ್ನು ರಚಿಸಬೇಕೆಂಬ ನಿಯಮವಿದ್ದರೂ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅದು ಅಸ್ತಿತ್ವದಲ್ಲಿಲ್ಲ. ಇದ್ದರೂ ಕ್ರಿಯಾಶೀಲವಾಗಿಲ್ಲ. ಅದನ್ನು ಕೂಡಲೇ ಕ್ರಿಯಾಶೀಲಗೊಳಿಸಬೇಕು ಪ್ರೊ. ಗೋವಿಂದ ವರದಿಯ ಶಿಫಾರಸಿನಂತೆ 17740 ಶಾಲೆಗಳನ್ನು ಮುಚ್ಚಲು ಹಿಂದಿನ ಬಿಜೆಪಿ ಸರ್ಕಾರ ಹುನ್ನಾರ ನಡೆಸಿತ್ತು. ಆದ್ದರಿಂದ ರಾಜ್ಯದ ಲಕ್ಷಾಂತರ ದಲಿತ-ಹಿಂದುಳಿದ-ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳು ಓದುತ್ತಿರುವ ಸರ್ಕಾರಿ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಮುಚ್ಚಿರುವ ಶಾಲೆಗಳನ್ನು ಮತ್ತೆ ತೆರೆಯಬೇಕು ಮತ್ತು ಅಗತ್ಯ ಮೂಲ ಸೌಲಭ್ಯ ನೀಡಬೇಕು. ರಾಜ್ಯದ ಶೇ.68 ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿನಿಯರ ಪ್ರತ್ಯೇಕ ಶೌಚಾಲಯಗಳಿಲ್ಲ. ಕುಡಿಯುವ ನೀರು, ಗ್ರಂಥಾಲಯ, ಆಟದ ಮೈದಾನಗಳಿಲ್ಲದೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಿದೆ. ರಾಜ್ಯದ 11 ಲಕ್ಷ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲಾ ಶಾಲಾ-ಕಾಲೇಜು-ವಿವಿ ಹಾಗೂ ಹಾಸ್ಟೆಲ್ಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಸರ್ಕಾರ ಮುಂದಾಗಬೇಕು. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಅಗತ್ಯವಿರುವ ಶಿಕ್ಷಕ-ಉಪನ್ಯಾಸಕ ಹಾಗೂ ಸಿಬ್ಬಂದಿ ನೇಮಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ನಾಗರಾಜ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.
ಜಿಲ್ಲಾ ಅಧ್ಯಕ್ಷ ಪೀರು ರಾಠೋಡ, ಶಿವು ಚವ್ಹಾಣ, ದೇವಪ್ಪ ನಾಯಕ, ಕೃಷ್ಟ ಅಬ್ಬಿಗೇರಿ, ಗೌಸ ಪಿರಣ್ಣವರ, ಮಹೇಶ ಹಿರೇಮಠ ಮುಂತಾದವರು ಹಾಜರಿದ್ದರು.