ಗುಟ್ಕಾ ನಿಷೇಧ ಕಟ್ಟುನಿಟ್ಟಾಗಿ ಜಾರಿಗೊಳಿಸಿ
ಕನ್ನಡಪ್ರಭ ವಾರ್ತೆ, ಗದಗ, ಜೂ. 7
ಜಿಲ್ಲೆಯಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಗಳ ಮಾರಾಟ ನಿಷೇಧ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಚಲನಚಿತ್ರ ಮಂದಿರಗಳಲ್ಲಿ, ರೇಲ್ವೆ ನಿಲ್ದಾಣ, ಬಸ್ ನಿಲ್ದಾಣ, ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ, ನೆಮ್ಮದಿ ಕೇಂದ್ರ, ಸೇವಾ ಕೇಂದ್ರಗಳಲ್ಲಿ ಈ ಕುರಿತು ಭಿತ್ತಿ ಪತ್ರಗಳನ್ನು ಅಂಟಿಸಬೇಕು ಹಾಗೂ ವ್ಯಾಪಕ ಪ್ರಚಾರ ಮೂಡಿಸಬೇಕು. ತಾಲೂಕು ಮಟ್ಟದಲ್ಲಿಯೂ ಸಮಿತಿ ಸಭೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಟಿ. ಅಂಜನಕುಮಾರ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಗುಟ್ಕಾ ಮತ್ತು ಪಾನ್ಮಸಾಲ ನಿಷೇಧ ಕುರಿತು ಈಗಾಗಲೇ ಜಿಲ್ಲಾ ಮಟ್ಟದ ಸಮಿತಿ ಮಾಡಲಾಗಿದ್ದು ಶುಕ್ರವಾರ ಮಧ್ಯಾಹ್ನದಿಂದಲೇ ವೀಕ್ಷಕರ ತಂಡದಿಂದ ನಗರದ ಪ್ರಮುಖ ಸ್ಥಳಗಳಲ್ಲಿ ದಾಳಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಡಿ.ಬಿ.ಚೆನ್ನಶೆಟ್ಟಿ ಮಾತನಾಡಿ, ಈಗಾಗಲೇ ಸರ್ಕಾರಿ ಕಚೇರಿಗಳಲ್ಲಿ ಬಿತ್ತಿಪತ್ರಗಳನ್ನು ಅಂಟಿಸಲಾಗಿದ್ದು, ಅರಿವು ಮೂಡಿಸುವ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದು ಸಭೆಗೆ ತಿಳಿಸಿದರು.
ಡೆಂಘೀ ನಿಯಂತ್ರಣ ಸಭೆ: ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡೆಂಘೀ ನಿಯಂತ್ರಣ ಸಭೆ ಜರುಗಿತು. ಜಿಲ್ಲೆಯಲ್ಲಿ ಡೆಂಘೀ ಮತ್ತು ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ನಿಯಂತ್ರಿಸಬೇಕು ಹಾಗೂ ಆಸ್ಪತ್ರೆಗಳಲ್ಲಿ ವೈದ್ಯಕೀಯ ತ್ಯಾಜ್ಯ ವಸ್ತುಗಳ ವಿಲೇವಾರಿ ಕಾರ್ಯ ಹಾಗೂ ಸ್ವಚ್ಛತಾ ಕಾರ್ಯದ ಕಡೆಗೆ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಅಂಜನ್ಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕ ಮಾಹಿತಿಗಾಗಿ ಸಹಾಯವಾಣಿಗಳನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಸಭೆಗೆ ತಿಳಿಸಿದರು. ಈಗಾಗಲೇ ಡೆಂಘೀ ನಿಯಂತ್ರಣ ಕುರಿತು ತಾಲೂಕು ಮಟ್ಟದಲ್ಲಿ ಕೂಡ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ತಾಲೂಕಿಗೆ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ 185 ಶಂಕಿತ ಡೆಂಘೀ ಪ್ರಕರಣಗಳಾಗಿದ್ದು, 50 ಪ್ರಕರಣಗಳ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. 14 ಡೆಂಘೀ ಪ್ರಕರಣಗಳು ಖಚಿತವಾಗಿವೆ. ಅವರು ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದಾರೆ. ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ನಿಯಂತ್ರಣ ಕುರಿತು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಅಗತ್ಯವಿದ್ದ ಸ್ಥಳಗಳಲ್ಲಿ ಫಾಗಿಂಗ್ ಮಾಡಲಾಗಿದೆ. ಬ್ಲೀಚಿಂಗ್ ಫೌಡರ್ ಸಿಂಪರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಭೆಗೆ ತಿಳಿಸಿದರು.
ಸಭೆಯಲ್ಲಿ ಅಪರ ಡಿಸಿ ನಾಗರಾಜ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಶಶಿಧರ ಕುರೇರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಆರ್.ಎನ್. ಪಾಟೀಲ, ಜಿಲ್ಲಾ ರೋಗವಾಹಕ ಆಶ್ರಿತ ರೋಗ ನಿಯಂತ್ರಣಾಧಿಕಾರಿ ಡಾ. ಸಾಲಿಗೌಡ್ರ, ಡಾ. ಕಬಾಡಿ, ವೈ.ಕೆ. ಭಜಂತ್ರಿ, ಡಾ. ಸಿದ್ಧಪ್ಪ, ಡಾ. ಅರುಂಧತಿ ಕುಲಕರ್ಣಿ, ತಾಲೂಕು ಆರೋಗ್ಯಾಧಿಕಾರಿಗಳು, ಜಿಲ್ಲೆ ವೈದ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಕ್ಷೇತ್ರ ಮಟ್ಟದ ಸಿಬ್ಬಂದಿ ಹಾಜರಿದ್ದರು.