ನೀರಿನ ಸಮಸ್ಯೆ: ಅಗತ್ಯ ಕ್ರಮ ಕೈಗೊಳ್ಳಿ
ಕನ್ನಡಪ್ರಭ ವಾರ್ತೆ, ಗದಗ, ಮಾ. 12
ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಎದುರಾಗಬಹುದಾದ ಕುಡಿವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಅವರು ಮಂಗಳವಾರ ಜಿಲ್ಲಾಡಳಿತ ಭವನ ಸಭಾಭವನದಲ್ಲಿ ಏರ್ಪಡಿಸಲಾಗಿದ್ದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಮಟ್ಟದ ಅಧಿಕಾರಿಗಳು ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಪರಿಹರಿಸಬೇಕು. ಅಧಿಕಾರಿಗಳು ತಾಲೂಕು ಕೇಂದ್ರವನ್ನು ಬಿಟ್ಟು ಹೊರಗಡೆ ಹೋಗುವ ಮೊದಲು ಹಿರಿಯ ಅಧಿಕಾರಿಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಇದನ್ನು ಉಲ್ಲಂಘಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲು ಸರ್ಕಾರ ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಸಿದರು.
ವೈದ್ಯರಿಗೆ ಸೂಕ್ತ ಭದ್ರತೆ ನೀಡಿ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಈಚೆಗೆ ಡಿಎಚ್ಓ ಅವರನ್ನು ತರಾಟೆಗೆ ತೆಗೆದುಕೊಂಡು ಅಲ್ಲಿನ ಸ್ಥಳೀಯ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಮಾಧ್ಯಮಗಳಲ್ಲಿನ ವರದಿ ಗಮನಿಸಿದ್ದೇನೆ. ಈ ರೀತಿ ಅಧಿಕಾರಿಗಳ ಮೇಲೆ ಹಲ್ಲೆಯಂತಹ ಪ್ರಕರಣಗಳು ನಡೆದಲ್ಲಿ ಜಿಲ್ಲೆಗೆ ಯಾರೂ ನೌಕರಿ ಮಾಡಲು ಬರುವುದಿಲ್ಲ. ಈ ಕುರಿತು ಪೊಲೀಸ್ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳುತ್ತಿದ್ದಂತೆ ಎಸ್ಪಿ ಡಾ. ಎಸ್.ಡಿ. ಶರಣಪ್ಪ ಅವರು ಯಾರೂ ಪ್ರಕರಣ ದಾಖಲಿಸಲು ಮುಂದೆ ಬರುತ್ತಿಲ್ಲ ಎಂದರು. ಇದರಿಂದ ಕೋಪಗೊಂಡ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ, ಈಗ ಜಿಲ್ಲಾಧಿಕಾರಿಗಳನ್ನು ಹೊಡೆಯಲು ಬರುತ್ತಾರೆ. ಆಗಲೂ ಕಂಪ್ಲೇಟ್ ಕೊಡುವವರೆಗೂ ಕಾಯುತ್ತೀರಾ ಎಂದು ಕೇಳುತ್ತಿದ್ದಂತೆ ಕೆಲ ಕಾಲ ಗೊಂದಲ ಉಂಟಾಯಿತು. ನಂತರ ಮಧ್ಯಪ್ರವೇಶಿಸಿದ ಸಿ.ಸಿ. ಪಾಟೀಲರು ಸಮಸ್ಯೆ ಬಗೆಹರಿಸಿ, ಜಿಲ್ಲೆಯಲ್ಲಿ ಅಧಿಕಾರಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ತಿಳಿಸಿದರು.
ಅಕ್ರಮ ಪಂಪ್ಸೆಟ್ ತೆರವುಗೊಳಿಸಿ: ಜಿಲ್ಲೆಯ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮವಾಗಿ ಅಳವಡಿಸಲಾಗಿರುವ ಪಂಪ್ಸೆಟ್ಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಈ ಬಗ್ಗೆ ಹೆಸ್ಕಾಂ ಇಲಾಖೆ ಅಧಿಕಾರಿಗಳೊಂದಿಗೂ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಿ. ಅಗತ್ಯ ಬಿದ್ದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳೊಂದಿಗೂ ಚರ್ಚಿಸಿ, ಅಗತ್ಯ ಬಿದ್ದಲ್ಲಿ ನಾನು ಮಾತನಾಡುತ್ತೇನೆಂದು ಸಚಿವ ಕಳಕಪ್ಪ ಬಂಡಿ ಅಧಿಕಾರಿಗಳಿಗೆ ಸೂಚಿಸಿದರು.
ಜನಪ್ರತಿನಿಧಿಗಳಿಗಾಗಿ ಕಾಯಬೇಡಿ: ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಜನಪ್ರತಿನಿಧಿಗಳಿಗಾಗಿ ಕಾಯುತ್ತಾ ಕೂಡಬೇಡಿ. ಸದ್ಯದಲ್ಲಿಯೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವುದರಿಂದ ಬಹುತೇಕ ಅನುಷ್ಠಾನವಾಗಿರುವ ಎಲ್ಲ ಕಾಮಗಾರಿಗಳನ್ನು ಸಾಧ್ಯವಾದಷ್ಟು ಬೇಗನೇ ಪ್ರಾರಂಭಿಸಿ ಎಂದು ಮಾಜಿ ಸಚಿವ, ಶಾಸಕ ಸಿ.ಸಿ. ಪಾಟೀಲ ಹೇಳುತ್ತಿದ್ದಂತೆ, ಇದಕ್ಕೆ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ, ಗದಗ ಶಾಸಕ ಶ್ರೀಶೈಲಪ್ಪ ಬಿದರೂರ ಧ್ವನಿಗೂಡಿಸಿದರು. ಮಲಪ್ರಭಾ ಡ್ಯಾಂನಿಂದ ಕುಡಿವ ನೀರಿಗಾಗಿ ಕಾಲುವೆಗೆ ನೀರು ಹರಿಸುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ಉಪಾಧ್ಯಕ್ಷ ರಮೇಶ ಮುಂದಿನಮನಿ, ಜಿಪಂ ಸಿಇಓ ವೀರಣ್ಣ ತುರಮರಿ, ಡಿಸಿ ಪಾಂಡುರಂಗ ನಾಯಕ ಮುಂತಾದವರು ಹಾಜರಿದ್ದರು.
ಶೋಕಾಸ್ ನೋಟೀಸ್
ಜಿಲ್ಲಾ ಪಂಚಾಯ್ತಿ ಎಂಜನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿ ಜಗದೀಶ ನಾಯಕ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿಲ್ಲ, ಹಲವಾರು ಕಾಮಗಾರಿಗಳು ಇವರಿಂದಲೇ ಬಾಕಿ ಉಳಿದಿವೆ ಎಂದು ಎಲ್ಲ ಶಾಸಕರು ಆರೋಪಿಸಿದರು. ಇದರಿಂದ ಆಕ್ರೋಶಗೊಂಡ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ, ಈ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ ವರದಿ ನೀಡಬೇಕು. ಈ ಅಧಿಕಾರಿಗೆ ಶೋಕಾಸ್ ನೋಟೀಸ್ ನೀಡಿರಿ. ಮತ್ತೊಬ್ಬ ಹಿರಿಯ ಅಧಿಕಾರಿಯಿಂದ ಕಾಮಗಾರಿ ಪರಿಶೀಲನೆ ನಡೆಸಿ, ಅವರು ಸೂಕ್ತವಾದ ರೀತಿಯಲ್ಲಿ ಕೆಲಸ ಮಾಡದೇ ಇದ್ದಲ್ಲಿ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿರಿ ಎಂದು ಸೂಚಿಸಿದರು.