ಯುವಕರಿಂದ ರಾಷ್ಟ್ರ ಸುಭದ್ರ
ಕನ್ನಡಪ್ರಭ ವಾರ್ತೆ, ಗದಗ, ಮಾ. 16
ಸುಭದ್ರ ಜಾತ್ಯತೀತ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಮುಖ್ಯ. ಯುವಕರಿಂದ ಮಾತ್ರ ಸುಭದ್ರ ರಾಷ್ಟ್ರ ನಿರ್ಮಾಣ ಸಾಧ್ಯವೆಂದು ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮಹಾನಿರ್ದೇಶಕ ಸಲೀಂ ಅಹ್ಮದ್ ಹೇಳಿದರು.
ತಾಲೂಕಿನ ಸಂಭಾಪುರ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ಯುವಜನ ಮತ್ತು ಕ್ರೀಡಾ ಇಲಾಖೆ, ಹಾತಲಗೇರಿ, ಸಂಭಾಪುರ ಗ್ರಾಪಂ ಆಶ್ರಯದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ನೆಹರು ಯುವ ಕೇಂದ್ರದ ಹಾಗೂ ರಾಷ್ಟ್ರೀಯ ಭಾವೈಕ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
40 ವರ್ಷಗಳ ಇತಿಹಾಸ ಹೊಂದಿರುವ ಈ ಸಂಘಟನೆಯನ್ನು 1987ರಲ್ಲಿ ರಾಜೀವ ಗಾಂಧಿ ಅವರು ಮತ್ತಷ್ಟು ಬಲಪಡಿಸಿದರು. ಸುಮಾರು 623 ಶಾಖೆಗಳನ್ನು ಹೊಂದಿರುವ ಈ ಕೇಂದ್ರ ಸುಮಾರು 1 ಕೋಟಿ ಸದಸ್ಯರನ್ನು ಹೊಂದಿದೆ. ಪ್ರತಿಯೊಂದು ಹಳ್ಳಿಯಲ್ಲಿ ಯುವ ಸಂಘಟನೆ ಹೊಂದಿರುವುದು ಮುಖ್ಯ. ಗ್ರಾಮೀಣ ಭಾಗದ ಯುವಕರನ್ನು ಸಂಘಟಿಸುವ ದೃಷ್ಟಿಯಿಂದ ಇದನ್ನು ನಡೆಸಲಾಗಿದೆ ಎಂದು ಹೇಳಿದರು. ಬರುವ ದಿನಗಳಲ್ಲಿ ರು. 1 ಲಕ್ಷ ವೆಚ್ಚದಲ್ಲಿ ಯುವಕರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಉದ್ದೇಶ ಹೊಂದಿರುವುದಾಗಿ ಅಹ್ಮದ್ ತಿಳಿಸಿದರು. ಸದ್ಭಾವನಾ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಮಾಜಿ ಸಚಿವ ಎಚ್.ಕೆ. ಪಾಟೀಲ್, ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಕರ್ನಾಟಕ, ಗೋವಾ ರಾಜ್ಯಗಳಿಂದ ಯುವ ಶಿಬಿರಾರ್ಥಿಗಳು ಹಾಗೂ ಯುವ ಮುಖಂಡರು ಆಗಮಿಸಿ, ಇತಿಹಾಸ ಪ್ರಸಿದ್ಧ ಸಂಭಾಪುರದಲ್ಲಿ ಈ ಕಾರ್ಯಾಗಾರದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ ಎಂದರು.
ಹಾತಲಗೇರಿ ಗ್ರಾಪಂ ಅಧ್ಯಕ್ಷೆ ದ್ಯಾಮವ್ವ ಮುರಲಾಪುರ, ವಾಸಣ್ಣ ಕುರಡಗಿ, ಹುಮಾಯೂನ್ ಮಾಗಡಿ, ಸಿದ್ದು ಪಾಟೀಲ್, ಉಲ್ಲಾಸ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು. ಅಂದಾನಯ್ಯ ಹಿರೇಮಠ ಸ್ವಾಗತಿಸಿದರು. ದತ್ತಪ್ರಸನ್ನ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.