ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ
ಗಜೇಂದ್ರಗಡ: ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ತೊಂದರೆಯಾಗದಂತೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಸ್ಥಳೀಯ ಜೆಡಿಎಸ್ ಮುಖಂಡರು ಹೆಸ್ಕಾಂ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಮೇಶ ಮಲ್ಲಾಪುರ ಮಾತನಾಡಿ, ಅನಿಯಮಿತ ವಿದ್ಯುತ್ ಕಡಿತದಿಂದಾಗಿ ವಿದ್ಯಾರ್ಥಿಗಳಿಗೆ ಓದಲು ತೊಂದರೆಯಾಗುತ್ತಿದೆ. ವಿದ್ಯುತ್ ಕಡಿತ ಮಾಡುವುದಿಲ್ಲ ಎಂದು ಹೇಳುವ ಸರ್ಕಾರ ಮೇಲಿಂದ ಮೇಲೆ ವಿದ್ಯುತ್ ಸ್ಥಗಿತಗೊಳಿಸಿ ವಿದ್ಯಾರ್ಥಿಗಳ ಮತ್ತು ಕೂಲಿ ಕಾರ್ಮಿಕರ ಬದುಕಿನ ಜತೆ ಚಲ್ಲಾಟವಾಡುತ್ತಿದೆ ಎಂದರು.
ಜೆಡಿಎಸ್ ರಾಜ್ಯ ಯುವ ಕಾರ್ಯದರ್ಶಿ ಕೆ.ಎಸ್. ಕೊಡತಗೇರಿ ಮಾತನಾಡಿ, ರಾಜ್ಯದಲ್ಲಿ ಆವರಿಸಿರುವ ಬರಗಾಲದಿಂದ ರೈತಾಪಿ ಜನರ ಗೋಳು ಹೇಳತೀರದಂತಾಗಿದೆ. ಇಂತಹ ಸಂದರ್ಭದಲ್ಲಿ ರೈತರು ಸಾಲ ಮಾಡಿ ಜಮೀನಿನಲ್ಲಿ ಬೆಳೆದ ಬೆಳೆಗೆ ವಿದ್ಯುತ್ತಿನ ಕಣ್ಣಾಮುಚ್ಚಾಲೆಯಿಂದಾಗಿ ಸಮಯಕ್ಕೆ ಸರಿಯಾಗಿ ನೀರು ದೊರೆಯದೆ ಬೆಳೆ ಒಣಗಿ ರೈತರು ಮತ್ತಷ್ಟು ಸಂಕಷ್ಟಕ್ಕೀಡಾಗುವ ಪರಿಸ್ಥಿತಿ ಉದ್ಭವಿಸಿದೆ. ಕೂಡಲೇ ಸಮರ್ಪಕ ವಿದ್ಯುತ್ ಪೂರೈಕೆ ಮಾಡದಿದ್ದಲ್ಲಿ ಪಕ್ಷದ ವತಿಯಿಂದ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ತಾಲೂಕು ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಮಕ್ತುಂಸಾಬ ಮುಧೋಳ, ಎಸ್‌ಸಿ, ಘಟಕ ಅಧ್ಯಕ್ಷ ಶರಣಪ್ಪ ಪೂಜಾರ, ನಗರ ಘಟಕ ಅಧ್ಯಕ್ಷ ಬಸವರಾಜ ಕೊಟಗಿ, ಸುರೇಶ ಹೊಸಮನಿ, ಅಲ್ಲಾಭಕ್ಷ ಮುಚ್ಚಾವಲಿ, ರಮೇಶ ಮಾತೀನ, ಸಾವಿತ್ರಿಬಾಯಿ ನಿಂಬಾಳ್ಕರ್ ಸೇರಿದಂತೆ ಕಾರ್ಯಕರ್ತರು, ಪದಾಧಿಕಾರಿಗಳು ಉಪಸ್ಥಿತರಿದ್ದರು.