ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಚುನಾವಣೆಗೆ ಜಿಲ್ಲಾಡಳಿತ ಸಿದ್ಧ

Mainashree
Updated On : 24 Mar 2013, 11:16 am

ಕನ್ನಡಪ್ರಭ ವಾರ್ತೆ, ಗದಗ, ಮಾ. 23
ಮೇ 5ರಂದು ನಡೆಯುವ ವಿಧಾನಸಭಾ ಚುನಾವಣೆಯನ್ನು ಯಶಸ್ವಿ ಹಾಗೂ ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಹೇಳಿದರು.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತ ಚುನಾವಣಾ ಆಯೋಗದ ಅನ್ವಯ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಿದೆ. ಜಿಲ್ಲೆಯ ಗದಗ, ಶಿರಹಟ್ಟಿ, ರೋಣ ಹಾಗೂ ನರಗುಂದ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಏ. 4 ರಂದು ಚುನಾವಣಾ ನೋಟಿಸ್ ಹೊರಡಿಸಲಾಗುವುದು. ಏ. 17 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಏ. 18 ನಾಮಪತ್ರ ಪರಿಶೀಲನೆ ನಡೆಯಲಿದೆ. ಏ. 20 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಮೇ 5ರ ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ಜರುಗುವುದು. ಮೇ. 8 ಮತ ಎಣಿಕೆ ದಿನ. ಮೇ. 11 ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳುತ್ತವೆ ಎಂದರು.
ಜಿಲ್ಲೆಯಲ್ಲಿ ಒಟ್ಟು 865 ಮತಗಟ್ಟೆಗಳಿದ್ದು, ಇವುಗಳಲ್ಲಿ 422 ಮತಗಟ್ಟೆಗಳು ಅತಿಸೂಕ್ಷ್ಮ, 210 ಸೂಕ್ಷ್ಮ ಮತಗಟ್ಟೆಗಳೆಂದು ಘೋಷಿಸಲಾಗಿದೆ. ಶಿರಹಟ್ಟಿಯಲ್ಲಿ 91,720 ಪುರುಷರು, 85,335 ಮಹಿಳೆಯರು ಸೇರಿದಂತೆ ಒಟ್ಟು 1,77,055 ಮತದಾರರಿದ್ದು, 226 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಗದಗನಲ್ಲಿ 91,968 ಪುರುಷರು, 88,618 ಮಹಿಳೆಯರು ಸೇರಿದಂತೆ ಒಟ್ಟು 1,80,586 ಮತದಾರರಿದ್ದು, 200 ಮತಗಟ್ಟೆಗಳು. ರೋಣದಲ್ಲಿ 96,415 ಪುರುಷರು, 92,034 ಮಹಿಳೆಯರು ಸೇರಿದಂತೆ 1,88,449 ಮತದಾರರಿದ್ದು, 246 ಮತಗಟ್ಟೆಗಳು. ನರಗುಂದದಲ್ಲಿ 84,595 ಪುರುಷರು, 80,302 ಮಹಿಳೆಯರು ಸೇರಿದಂತೆ 1,64,897 ಮತದಾರರಿದ್ದು, 193 ಮತಗಟ್ಟೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ.
ಈ ಬಾರಿ ವಿದ್ಯುನ್ಮಾನ ಮತ ಯಂತ್ರದ ಮೂಲಕ ಮತ ಚಲಾವಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಮತ ಯಂತ್ರಗಳು ಬಂದಿವೆ. ಮತ ಯಂತ್ರಗಳ ಪರೀಕ್ಷಾ ಕಾರ್ಯ ಪ್ರಾರಂಭಿಸಲಾಗಿದೆ. ಅಲ್ಲದೆ ಅತಿ ಸೂಕ್ಷ್ಮವಿರುವ ಮತಗಟ್ಟೆಗಳಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗುವುದು. ಮಾ. 27 ಮತ್ತು 28 ರಂದು ಚುನಾವಣಾ ಸಿಬ್ಬಂದಿಗೆ 2 ದಿನ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ತರಬೇತಿ ನೀಡಲಾಗುವುದು.
23 ಚೆಕ್ ಪೋಸ್ಟ್: ಚುನಾವಣೆಯ ಸಂದರ್ಭದಲ್ಲಿ ನಡೆಯುವ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಒಟ್ಟು 23 ಚೆಕ್‌ಪೋಸ್ಟ್ ರಚಿಸಲಾಗಿದ್ದು, ಇವು ಮಾ. 24 ರಿಂದ ಕಾರ್ಯನಿರ್ವಹಿಸಲಿವೆ. ಅಕ್ರಮ ಮದ್ಯ, ಅಕ್ರಮ ಹಣ ಸೇರಿದಂತೆ ಇನ್ನಿತರ ಅಕ್ರಮ ಚಟುವಟಿಕೆ ನಡೆಯದಂತೆ ಕ್ರಮ ಕೈಗೊಳ್ಳಲು ಈ ಚೆಕ್‌ಪೋಸ್ಟ್ ರಚಿಸಲಾಗಿದೆ. ಅಲ್ಲದೆ ಬ್ಯಾಂಕ್‌ಗಳಲ್ಲಿ ಹೆಚ್ಚುವರಿ ಹಣ ತೆಗೆದುಕೊಳ್ಳುವವರ ಕುರಿತು ಮಾಹಿತಿ ನೀಡುವಂತೆ ಬ್ಯಾಂಕ್‌ನ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಶಾಂತಿಯುತ ಮತದಾನಕ್ಕಾಗಿ ಬೇಕಾದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಎಸ್ಪಿ ಡಾ. ಶರಣಪ್ಪ ಎಸ್.ಡಿ. ಮಾತನಾಡಿದರು. ಈ ಸಂದರ್ಭದಲ್ಲಿ ಜಿಪಂ ಸಿಇಓ ವೀರಣ್ಣ ತುರಮರಿ, ವಾರ್ತಾಧಿಕಾರಿ ಸಿ.ಪಿ. ಮಾಯಾಚಾರಿ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement