ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರ
ಗದಗ: ಮೇ 5ರಂದು ನಡೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 8ರಂದು ಬೆಳಗ್ಗೆ 8 ಗಂಟೆಯಿಂದ ನಗರದ ತೋಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಮತ ಎಣಿಕೆಯ ಕ್ಷಣ ಕ್ಷಣದ ಮಾಹಿತಿಯನ್ನು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಿಳಿಸಲು ಮತ ಎಣಿಕೆ ಕೇಂದ್ರಕ್ಕೆ ಹೊಂದಿಕೊಂಡಂತೆ ಸುಸಜ್ಜಿತವಾದ ಮಾಧ್ಯಮ ಕೇಂದ್ರ ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಸ್.ಟಿ. ಅಂಜನಕುಮಾರ್ ಹೇಳಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾಧ್ಯಮ ಕೇಂದ್ರದಲ್ಲಿ ವಿಶಾಲವಾದ ಎಲ್‌ಸಿಡಿ ಪ್ರೊಜೆಕ್ಟರ್, ಇಂಟರ್‌ನೆಟ್ ಸೌಲಭ್ಯದೊಂದಿಗೆ 3 ಕಂಪ್ಯೂಟರ್, 1 ಪ್ರಿಂಟರ್, 1 ಟೀವಿ ಹಾಗೂ ಒಂದು ಫ್ಯಾಕ್ಸ್ ಯಂತ್ರ ಅಳವಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮೊಬೈಲ್ ಬಳಕೆ ನಿಷೇಧ: ಮತ ಎಣಿಕೆ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮತ ಎಣಿಕೆಗಾಗಿ ಆಗಮಿಸುವ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಸ್.ಟಿ. ಅಂಜನಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.