ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಗದುಗಿನ ಕ್ರೀಡಾ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿ ಅರಳಲಿ

Vishwanath S
Updated On : 10 Oct 2013, 10:55 am

ಕನ್ನಡಪ್ರಭ ವಾರ್ತೆ, ಗದಗ, ಅ. 9
ಗದಗ ಜಿಲ್ಲೆ ಕೆಲವೊಂದು ಕ್ಷೇತ್ರಗಳಲ್ಲಿ ಹಿಂದುಳಿದ ಜಿಲ್ಲೆಯಾದರೂ ಕ್ರೀಡಾಕ್ಷೇತ್ರದಲ್ಲಿ ಅದರಲ್ಲಿ ವಿಶೇಷವಾಗಿ ಹಾಕಿ ಹಾಗೂ ಕ್ರಿಕೆಟ್‌ನಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದು ಮುಂಚೂಣಿಯಲ್ಲಿದೆ. ಈ ಪರಂಪರೆಯನ್ನು ಮುಂದುವರೆಸಿಕೊಂಡು ಅಥ್ಲೆಟಿಕ್ಸ್‌ನಲ್ಲಿ ಗದುಗಿನ ಕ್ರೀಡಾ ಪ್ರತಿಭೆಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅರಳಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಪಪೂ ಶಿಕ್ಷಣ ಇಲಾಖೆ ಹಾಗೂ ಜ. ಶಿವಾನಂದ ವಿಜ್ಞಾನ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಗದಗ ಜಿಲ್ಲಾ ಪಪೂ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಕ್ರೀಡೆ ವಿದ್ಯಾರ್ಥಿ ಜೀವನದ ಪ್ರಮುಖ ಅಂಗವಾಗಿದ್ದು, ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯನ್ನು ಅಳವಡಿಸಿಕೊಂಡು ಯಶಸ್ಸು ಸಾಧಿಸಬೇಕು ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಸ್. ಗೌಡರ ಮಾತನಾಡಿ, 15 ವರ್ಷಗಳಿಂದಲೂ ಇಲಾಖೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಕ್ರೀಡಾಕೂಟಗಳನ್ನು ಏರ್ಪಡಿಸುತ್ತಾ ಬಂದಿದೆ ಎಂದರು. ಈ ಕ್ರೀಡಾಕೂಟದಲ್ಲಿ ಜಿಲ್ಲೆಯ 91 ಕಾಲೇಜುಗಳ ಸುಮಾರು 500 ವಿದ್ಯಾರ್ಥಿಗಳು ವಿವಿಧ ವೈಯಕ್ತಿಕ ಆಟಗಳಲ್ಲಿ ಭಾಗವಹಿಸಿದ್ದರು. ಪ್ರಾರಂಭದಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕ ರಮೇಶ ಗಿರಣಿವಡ್ಡರ ಸ್ವಾಗತಿಸಿ, ಪ್ರತಿಜ್ಞಾವಿಧಿ ಬೋಧಿಸಿದರು. ಗದಗ ಜಿಲ್ಲಾ ಪಪೂ ಕಾಲೇಜುಗಳ ದೈಹಿಕ ಉಪನ್ಯಾಸಕರ ಸಂಘದ ಅಧ್ಯಕ್ಷ ಸಿ.ಆರ್. ಕರಿರಾಯನಗೌಡ್ರ ಪಥ ಸಂಚಲನ ನೆರವೇರಿದರು. ಮಾಜಿ ಶಾಸಕ ಡಿ.ಆರ್. ಪಾಟೀಲ, ನರಗುಂದ ಶಾಸಕ ಬಿ.ಆರ್. ಯಾವಗಲ್, ಪ್ರಾ. ಬಿ.ಎಚ್. ಗರಡಿಮನಿ, ಪಿ.ಎಸ್. ಕಾಶಪ್ಪನವರ, ಎಂ.ಸಿ. ಕಟ್ಟಿಮನಿ, ಬಿ.ಎಸ್. ಜಾಧವ, ಆರ್.ಎಸ್.ಪಾಟೀಲ, ಆರ್.ಎಚ್. ಶತರಡ್ಡಿ, ವೈ.ಸಿ. ಪಾಟೀಲ, ಇ.ಎಚ್.ದಂಡಗಿದಾಸರ ಮುಂತಾದವರು ಉಪಸ್ಥಿತರಿದ್ದರು. ಪ್ರೊ. ಮುರಲೀಧರ ನಿರೂಪಿಸಿದರು. ಶಿವಾನಂದ ಪಪೂ ಕಾಲೇಜಿನ ಪ್ರಾಚಾರ್ಯ ಎಸ್.ವಿ. ಸಂಕನೂರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement