ಕ್ರೀಡೆಯಿಂದ ಉತ್ತಮ ಆರೋಗ್ಯ: ದೊಡ್ಡಮನಿ
ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಸೆ. 10
ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಇಂದಿನ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವುದರ ಮೂಲಕ ತಮ್ಮ ಆರೋಗ್ಯವನ್ನು ಉತ್ತಮ ಪಡಿಸಿಕೊಂಡು, ವಿದ್ಯಾರ್ಥಿ ಜೀವನವನ್ನು ಸಾರ್ಥಕ ಗೊಳಿಸಿಕೊಳ್ಳಬೇಕು ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಮಂಗಳವಾರ ಪಟ್ಟಣದ ಎಫ್.ಎಂ. ಡಬಾಲಿ ಹೈಸ್ಕೂಲ್ ಮೈದಾನದಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಹಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2013-14ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆ ಮನಸ್ಸನ್ನು ಪ್ರಪುಲ್ಲಗೊಳಿಸುವುದರೊಂದಿಗೆ ಸದಾ ಕ್ರಿಯಾಶೀಲರಾಗುವಂತೆ ಮಾಡುತ್ತದೆ. ಕ್ರೀಡೆಯಲ್ಲಿ ನಮ್ಮ ದೇಶ ಬಹಳಷ್ಟು ಕಳಪೆ ಪ್ರದರ್ಶನವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ತೋರಿಸುತ್ತಿದೆ. ಪ್ರಾಥಮಿಕ ಹಂತದಲ್ಲಿ ಸರಿಯಾಗಿ ತರಬೇತಿಗೊಳಿಸಿದರೆ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಬಹುದು ಎಂದ ಅವರು, ಕ್ರೀಡಾ ಸ್ಪರ್ಧೆಗಳು ಯಶಸ್ವಿಯಾಗಿ ನಡೆಯಲಿ ಹಾಗೂ ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಂಡು ವಿದ್ಯಾರ್ಥಿಗಳು ತಾಲೂಕು, ಜಿಲ್ಲಾ, ರಾಜ್ಯ ಹಂತದವರೆಗೂ ತಮ್ಮ ಪ್ರತಿಭೆಯನ್ನು ತೋರಿಸಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ತಾಪಂ ಅಧ್ಯಕ್ಷೆ ಸುನಂದಾ ಬಿದರಳ್ಳಿ ಮಾತನಾಡಿ, ಗ್ರಾಮೀಣ ಪ್ರದೇಶದ ಕ್ರೀಡೆಗಳು ಮರೆಯಾಗುತ್ತಲಿದ್ದು, ಬರಿ ಕ್ರಿಕೆಟ್‌ಗೆ ಹೆಚ್ಚು ಯುವಕರು ವಿದ್ಯಾರ್ಥಿಗಳು ಆಸಕ್ತಿವಹಿಸುತ್ತಿರುವುದು ಸೋಜಿಗದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ, ನಿರ್ಮಲಾ ಬರದೂರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಲ್. ಹಂಪಣ್ಣ, ಎಫ್.ಎಂ. ಡಬಾಲಿ ಪಪೂ ಕಾಲೇಜಿನ ಪ್ರಾಚಾರ್ಯ ನಟರಾಜ ಕಲಾವಂತ, ದೈಹಿಕ ಶಿಕ್ಷಣಾಧಿಕಾರಿ ಎ.ಜಿ. ಮೌಲಾಸಾಬನವರ, ಜಿ.ಆರ್. ಸರ್ಜಾಪುರ, ಬಿ.ಎಸ್. ಹರ್ಲಾಪುರ, ಬಿ.ಎಸ್. ಈಳಗೇರ, ಎಂ.ಡಿ. ತಳ್ಳಳ್ಳಿ, ಅಶೋಕ ಛಬ್ಬಿ ಮುಂತಾದವರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಸ್ವಾಗತಿಸಿದರು. ಎಂ.ಕೆ. ಲಮಾಣಿ ನಿರೂಪಿಸಿದರು. ಡಿ.ಆರ್. ಗೋದಕರ ವಂದಿಸಿದರು.
--