ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸಮುದಾಯ ಭವನ ನಿರ್ಮಾಣಕ್ಕೆ ಶೀಘ್ರ ಭೂಮಿ: ಶಾಸಕ ದೊಡ್ಡಮನಿ

Lingaraj Badiger
Updated On : 17 Sept 2013, 11:37 am

ಕನ್ನಡಪ್ರಭ ವಾರ್ತೆ, ಮುಂಡರಗಿ, ಸೆ. 16
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಹಿರಿಯರೆಲ್ಲರ ಅನುಕೂಲಕ್ಕಾಗಿ ತಾಲೂಕಿನ ನಿವೃತ್ತ ನೌಕರರ ಸಂಘದ ಸಮುದಾಯ ಭವನದ ನಿರ್ಮಾಣಕ್ಕೆ ಆದಷ್ಟು ಬೇಗನೆ ಭೂಮಿಯನ್ನು ದೊರಕಿಸಿ ಕೊಡುವುದಾಗಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಈಚೆಗೆ ಸ್ಥಳೀಯ ಸರ್ಕಾರಿ ಮಾದರಿ ಕೇಂದ್ರ ಶಾಲೆಯಲ್ಲಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಮುಂಡರಗಿ ತಾಲೂಕು ಘಟಕದಿಂದ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನಿವೃತ್ತ ನೌಕರರು ಮತ್ತಷ್ಟು ಸಂಘಟಿತರಾಗಿ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಪಡೆದುಕೊಳ್ಳುವಲ್ಲಿ ಪ್ರಯತ್ನಿಸಬೇಕು. ಎಲ್ಲ ನಿವೃತ್ತರು ಮತ್ತು ಹಿರಿಯ ನಾಗರಿಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಗಮನ ಸೆಳೆದು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ತಾವೂ ಸಹ ತಮ್ಮ ವ್ಯಾಪ್ತಿಯಲ್ಲಿ ಬರುವ ಯಾವುದೇ ಸೌಲಭ್ಯಗಳಿದ್ದರೂ ಕಲ್ಪಿಸಿಕೊಡುವುದಾಗಿ ತಿಳಿಸಿದರು.
ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಸಿ. ಗಾಣಿಗೇರ ಮಾತನಾಡಿ, ನಿವೃತ್ತ ನೌಕರರಿಗೂ ಆರೋಗ್ಯ ಭತ್ಯೆಯನ್ನು ನೀಡುವುದರೊಂದಿಗೆ ರೈತರಿಗೆ ಇರುವಂತೆ ಯಶಸ್ವಿನಿಯಂತಹ ಯೋಜನೆಯನ್ನು ಜಾರಿಗೆ ತರಬೇಕು. ನಿವೃತ್ತ ನೌಕರರ ಅನೇಕ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸರ್ಕಾರದ ಗಮನ ಸೆಳೆದು ಈಡೇರಿಸಲು ಪ್ರಯತ್ನಿಸಬೇಕೆಂದು ಶಾಸಕರಿಗೆ ಮನವಿ ಮಾಡಿದರು.
ಶಿರಹಟ್ಟಿ ತಾಲೂಕು ಘಟಕದ ಅಧ್ಯಕ್ಷ ಡಾ. ಮೇಲ್ಮುರಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷ ವಿ.ಸಿ. ಹಂಚಿನಾಳ ವಹಿಸಿದ್ದರು. ಬಿ.ವಿ. ಮುದ್ದಿ, ಜಿಲ್ಲಾ ಕಾರ್ಯದರ್ಶಿ ರಾಜಶೇಖರ ಕರಡಿ, ನಿವೃತ್ತ ಶಿಕ್ಷಕ ಎ.ಬಿ. ಜುಟ್ಲೆ, ಮಲ್ಲೇಶ ಭಾವಿಮನಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ಆರ್.ಬಿ. ಹಕ್ಕಂಡಿ ನಿರೂಪಿಸಿದರು. ಬಿ.ಎಸ್. ಮಠಪತಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement