ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಡೆಂಘೀಯಿಂದ ಮೃತಪಟ್ಟವರಿಗೆ ಪರಿಹಾರ

Lingaraj Badiger
Updated On : 26 Sept 2013, 11:28 am

ಕನ್ನಡಪ್ರಭ ವಾರ್ತೆ, ಗದಗ, ಸೆ. 25
ಜಿಲ್ಲೆಯಲ್ಲಿ ಡೆಂಘೀ ಜ್ವರದಿಂದ ಮೃತಪಟ್ಟವರಿಗೆ ಸರ್ಕಾರದಿಂದ ಪರಿಹಾರ ವಿತರಣೆ ಮಾಡಬೇಕು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.
ಅವರು ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಜರುಗಿದ ಜಿಲ್ಲಾಮಟ್ಟದ ಜಾಗೃತ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಡೆಂಘೀಯಿಂದಾಗಿ ಮೃತರಾದವರಿಗೆ ಇಲ್ಲಿವರೆಗೆ ಪರಿಹಾರ ವಿತರಣೆಯಾಗದಿರುವ ಬಗ್ಗೆ ಡಿಎಚ್‌ಒ ಡಾ. ಡಿ.ಬಿ. ಚನ್ನಶೆಟ್ಟಿ ಅವರನ್ನು ವಿಚಾರಿಸಿದಾಗ, ಸರ್ಕಾರದಿಂದ ಡೆಂಘೀ ಜ್ವರದಿಂದ ಮೃತಪಟ್ಟವರಿಗೆ ಪರಿಹಾರ ನೀಡಲಾಗುತ್ತಿಲ್ಲ. ಈ ಹಿಂದೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ವಿತರಿಸಲಾಗುತ್ತಿತ್ತು ಎಂದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೈಸೂರಿನಲ್ಲಿ ಪರಿಹಾರ ವಿತರಿಸಲಾಗಿದೆ. ಪರಿಹಾರ ವಿತರಣೆಯಲ್ಲಿ ಈ ತಾರತಮ್ಯ ಸರಿಯಲ್ಲ. ಜಿಲ್ಲೆಯಲ್ಲಿ ಡೆಂಘೀ ಜ್ವರದಿಂದ ಮೃತಪಟ್ಟವರಿಗೂ ಪರಿಹಾರ ವಿತರಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯಿಂದ ಆಗುತ್ತಿರುವ ಸಮಸ್ಯೆಗಳ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳು ಸಂಸದರ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಉದಾಸಿ, ತಾತ್ಕಾಲಿಕವಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಈ ಕುರಿತು ರಾಜ್ಯ ಸರ್ಕಾರದ ಗಮನಸೆಳೆಯುವಂತೆ ಶಾಸಕ ಜಿ.ಎಸ್. ಪಾಟೀಲರಿಗೆ ತಿಳಿಸಿದರು.
ಪಡಿತರ ಚೀಟಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 2 ತಿಂಗಳಲ್ಲಿ ಒಟ್ಟು 584 ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಜಿಲ್ಲೆಯಾದ್ಯಂತ 63206 ಅರ್ಜಿಗಳು ಸ್ವೀಕೃತವಾಗಿವೆ. ಇದರಲ್ಲಿ ಈಗಾಗಲೇ 1367 ಪಡಿತರ ಚೀಟಿಗಳು ವಿತರಣೆಯಾಗಿವೆ. ಅರ್ಜಿ ಪರಿಶೀಲನಾಕಾರ್ಯ ತೀವ್ರ ಗತಿಯಲ್ಲಿಸಾಗಿದ್ದು, ನವೆಂಬರ್ 16ರ ರೊಳಗಾಗಿ ಪಡಿತರ ಚೀಟಿ ವಿತರಣಾ ಕಾರ್ಯ ಸಂಪೂರ್ಣವಾಗಿ ಮುಗಿಸುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ತಿಳಿಸಿದರು.
ಪಿಡಿಒ ನಿರಾಸಕ್ತಿ: ಮಹಾತ್ಮಗಾಂಧಿ ಉದ್ಯೋಗಖಾತ್ರಿ ಯೋಜನೆಯಲ್ಲಿ ಜನರು ಕೆಲಸಕ್ಕೆ ಬರುವ ಆಸಕ್ತಿ ತೋರಿಸಿದರೂ ಗ್ರಾಪಂ ಪಿಡಿಒ ನಿರಾಸಕ್ತಿ ತೋರುತ್ತಿದ್ದಾರೆ ಎಂದು ಶಾಸಕ ಜಿ.ಎಸ್. ಪಾಟೀಲ ಆರೋಪಿಸಿದರು. ರೋಣ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಪಂ ಪಿಡಿಒ ಕೆಲಸ ಮಾಡಲು ಕೂಲಿ ಕಾರ್ಮಿಕರು ಸಿಗುತ್ತಿಲ್ಲ ಎಂಬ ನೆಪ ಹೇಳುತ್ತಾರೆ. ಆದರೆ, ಪ್ರತಿ ಗ್ರಾಮದಲ್ಲಿಯೂ ಜನರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ಅವರಿಗೆ ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ಉದ್ಯೋಗಖಾತ್ರಿ ಯೋಜನೆಯಡಿ ಇಬ್ಬರು ಕೆಲಸ ಮಾಡಲು ಬಂದಾಗ್ಯೂ ಅವರನ್ನು ಕೆಲಸಕ್ಕೆ ಸೇರಿಸಿಕೊಳ್ಳಲಾಗುತ್ತಿದೆ. ಜನಸಾಮಾನ್ಯರ ಅನುಕೂಲದ ದೃಷ್ಟಿಯಿಂದಲೇ ಈ ಯೋಜನೆ ಇರುವುದರಿಂದಾಗಿ ಯೋಜನೆ ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ನೊಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಹಿಂದೆ ಯೋಜನೆಯ ಹಣ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಆಯಾ ಗ್ರಾಪಂ ಅಧ್ಯಕ್ಷರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದರು.
ಶೀಘ್ರದಲ್ಲಿ ಶಾಸಕರ ನೇತೃತ್ವದಲ್ಲಿ ರೋಣ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಪಂ ಪಿಡಿಒಗಳ ಸಭೆ ಕರೆದು ಸಭೆಯಲ್ಲಿ ಈ ಬಗ್ಗೆ ಚರ್ಚಿಸುವಂತೆ ಜಿಪಂ ಸಿಇಒಗೆ ಸಂಸದ ಉದಾಸಿ ಹೇಳಿದರು. ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಕಾಮಗಾರಿ ಹಾಗೂ ಯೋಜನೆಗಳ ಕುರಿತು ಚರ್ಚಿಸಲಾಯಿತು. ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ, ನಿರ್ಮಲಾ ಬರದೂರ, ನಿರ್ಮಲಾ ಜೋಷಿ, ತಾಪಂ ಅಧ್ಯಕ್ಷೆ ತಾರುಬಾಯಿ ಚೌವ್ಹಾಣ, ಸೀತಾರಾಮರಾಜು ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement