ಸಂಸದ ಶಿವಕುಮಾರ ಉದಾಸಿ ಮತ ಯಾಚನೆ
ಗಜೇಂದ್ರಗಡ: ರಾಜ್ಯದಲ್ಲಿ ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದ ಜನಪರ, ಅಭಿವೃದ್ಧಿ ಕಾರ್ಯಕ್ರಮಗಳೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಈ ನಿಟ್ಟಿನಲ್ಲಿ ಬಿಜೆಪಿ ಜನಸಾಮಾನ್ಯರ ಅಭಿವೃದ್ಧಿಗೆ ಪಣ ತೊಟ್ಟಿದೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಹೇಳಿದರು. ಅವರು ಸಮೀಪದ ಮುಶಿಗೇರಿ ಗ್ರಾಮದಲ್ಲಿ ಈಚೆಗೆ ನಡೆದ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಮತ ಯಾಚಿಸಿ ಮಾತನಾಡಿದರು. ಸತತ 5 ದಶಕಕ್ಕೂ ಹೆಚ್ಚು ಕಾಲ ದೇಶ ಮತ್ತು ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ದುರಾಡಳಿತದಿಂದ ಜನತೆ ಹಲವಾರು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಹೀಗಾಗಿ ಕ್ಷೇತ್ರದ ಪ್ರಜ್ಞಾವಂತ ಮತದಾರರು ಈ ಬಾರಿ ಕಾಂಗ್ರೆಸ್ಸನ್ನು ಬೇರುಮಟ್ಟದಿಂದಲೇ ಕಿತ್ತು ಹಾಕಲು ಪಣ ತೊಡಬೇಕೆಂದು ಮತದಾರರಲ್ಲಿ ವಿನಂತಿಸಿದರು. ಮಾಜಿ ಸಚಿವ ಕಳಕಪ್ಪ ಬಂಡಿ ಮಾತನಾಡಿ, ಕೇಂದ್ರದಲ್ಲಿ ಸತತ 2 ಬಾರಿ ಅಧಿಕಾರ ನಡೆಸಿದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಜ್ವಲಂತ ಹಗರಣಗಳೆ ಲೋಕಸಭಾ ಚುನಾವಣೆಯಲ್ಲಿ ಆ ಪಕ್ಷ ನೆಲಕಚ್ಚುವಂತೆ ಮಾಡಲಿದೆ. ಈ ದೆಸೆಯಲ್ಲಿ ಈ ಬಾರಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಹಿರಿಯ ಮುಖಂಡರು ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದರು