ಬಿಜೆಪಿ ಕಾರ್ಯಕರ್ತರಿಂದ ಪ್ರಚಾರ
ಹಾವೇರಿ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಶಿವಕುಮಾರ ಉದಾಸಿ ಪರವಾಗಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಕೋಡ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಮವಾರ ಬಿರುಸಿನ ಪ್ರಚಾರ ನಡೆಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರದೀಪ ಮುಳ್ಳೂರ, ತಾಲೂಕು ಅಧ್ಯಕ್ಷ ರುದ್ರೇಶ ಕೊಣವರ ನೇತೃತ್ವದಲ್ಲಿ ಕಾರ್ಯಕರ್ತರು ಮನೆಮನೆಗೆ ತೆರಳಿ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ತಿಳಿಸುತ್ತ ಚುನಾವಣೆಯಲ್ಲಿ ಶಿವಕುಮಾರ ಉದಾಸಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಅಲ್ಲದೇ ನರೇಂದ್ರ ಮೋದಿ ಗುಜರಾತ್ ರಾಜ್ಯದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯವೈಖರಿ ಬಗ್ಗೆ ಜನರಿಗೆ ಮನನ ಮಾಡಿಕೊಡುವ ಮೂಲಕ ಭವ್ಯ ಭಾರತದ ನಿರ್ಮಾಣಕ್ಕೆ ಯುವಕರು ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಬಿಜೆಪಿ ಕಮಲದ ಗುರುತಿಗೆ ಮತನೀಡಬೇಕು ಎಂದು ಮನವಿ ಮಾಡಿದರು. ಬಿಜೆಪಿ ಹಿರೆಕೇರೂರ ತಾಲೂಕು ಅಧ್ಯಕ್ಷ ಎಸ್.ಆರ್. ಅಂಗಡಿ, ಜಿಪಂ ಸದಸ್ಯೆ ಬಸಮ್ಮ ಅಬಲೂರ ಸೇರಿದಂತೆ ಇತರರು ಇದ್ದರು.
ಅಲ್ಪಸಂಖ್ಯಾತರು ಕಾಂಗ್ರೆಸ್ಗೆ ವೋಟ್ ಬ್ಯಾಂಕ್
ಹಾವೇರಿ: ದೇಶದಲ್ಲಿ 6 ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್, ಅಲ್ಪಸಂಖ್ಯಾತರನ್ನು ಕೇವಲ ಮತ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡಿದೆ ಹೊರತು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಪೂರಕವಾದ ಯಾವುದೇ ಯೋಜನೆ ಜಾರಿಗೆ ತಂದಿಲ್ಲ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಖುಸರೋ ಖುರೇಷಿ ಆರೋಪಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಅಲ್ಪಸಂಖ್ಯಾತರ ಬಗ್ಗೆ ಮಾತನಾಡುತ್ತದೆ. ಚುನಾವಣೆ ಮುಗಿದ ನಂತರ ಮತ್ತೆ ಅಲ್ಪಸಂಖ್ಯಾತರ ಕುರಿತು ತಟಸ್ಥ ನೀತಿ ಅನುಸರಿಸುತ್ತದೆ. ರಾಜ್ಯದಲ್ಲಿ ತಾವು ಬಿಜೆಪಿ ಪರ ಪ್ರಚಾರ ಕೈಗೊಂಡಿದ್ದು, ಈಗಾಗಲೇ 13 ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ ಮುಗಿಸಿದ್ದು, ಪ್ರಚಾರ ನಡೆಸಿದ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತರ, ಹಿಂದುಳಿದ ಜನಾಂಗದ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದರು. ಬಾಬುಸಾಬ ಮೋಮಿನಗಾರ, ಅಲ್ಲಾಭಕ್ಷ ತಿಮ್ಮಾಪುರ, ಜಾಜೀದ್ ಅಹ್ಮದ್ ದಾರೂಗಾರ, ದಾವಸಾಬ್, ವಹಾಬ್ ಮಾಣಿಕ್, ರಿಯಾಜ್ ಅಹ್ಮದ್ ಶಿಡಗನಾಳ, ಮೆಹಬೂಬ್ ನಾರಂಗಿ ಮತ್ತಿತರರು ಇದ್ದರು.