ಅಧಿಕಾರಿಗಳು ಎಲ್ಲಿ ಹೋಗ್ಯಾರ್ರೀ?
ಕನ್ನಡಪ್ರಭ ವಾರ್ತೆ, ಗದಗ, ಜ. 6
ಜಿಲ್ಲೆಯಲ್ಲಿ ಕೃಷಿ ಇಲಾಖೆ ಸಂಪೂರ್ಣ ನಿಷ್ಕ್ರೀಯವಾಗಿದೆ. ರೈತರ ಸಮಸ್ಯೆಗೆ ಸ್ಪಂದಿಸಲು ಅಧಿಕಾರಿಗಳೇ ಇಲ್ಲ. ಅದರಲ್ಲಿಯೂ ಮುಂಡರಗಿ ಕಚೇರಿಗೆ ಬೀಗ ಹಾಕಿ 4 ದಿನವಾಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಾದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹಮ್ಮಿಗಿ ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಆರೋಪಿಸಿದರು.
ಅವರು ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ಜಿಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ ಮುಂಡರಗಿ ಮತ್ತು ನರಗುಂದದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೇ ಇಲ್ಲ. ಡಂಬಳ ಸೇರಿದಂತೆ ಕೃಷಿ ಇಲಾಖೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಬಾಗಿಲುಗಳನ್ನೇ ತೆರೆಯುವವರಿಲ್ಲ ಎಂದರು. ಇದಕ್ಕೆ ಉತ್ತರಿಸಿದ ಇಲಾಖೆಯ ಅಧಿಕಾರಿ ಸಿ.ಬಿ. ಬಾಲರಡ್ಡಿ ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆಯಿದೆ. ಇರುವ ಸಿಬ್ಬಂದಿಗಳಲ್ಲಿಯೇ ಕಾರ್ಯನಿರ್ವಹಿಸಲು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಶೇಂಗಾ ಮತ್ತು ಸೂರ್ಯಕಾಂತಿ ಬೆಳೆಗೆ ಸರ್ಕಾರ ಬೆಂಬಲ ಬೆಲೆ ನೀಡಿದ್ದು. ಕೆಒಎಫ್ಗಳ ಮೂಲಕ ಉತ್ತಮ ಬೆಲೆ ಖರೀದಿ ಪ್ರಕ್ರಿಯೆ ಚಾಲನೆಯಲ್ಲಿದೆ. ಆದರೆ ಅಲ್ಲಿ ರೈತರ ಹೆಸರಿನಲ್ಲಿ ವ್ಯಾಪಾರಸ್ಥರೇ ಲಾಭ ಪಡೆಯುತ್ತಿದ್ದಾರೆ. ಈ ಕೆಲಸದಲ್ಲಿ ಕೆಓಎಫ್ನ ಸೆಕ್ರೆಟರಿಗಳು ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಸದಸ್ಯ ಎಂ.ಎಸ್. ದೊಡ್ಡಗೌಡ್ರ ಆರೋಪಿಸಿದರು. ಇದಕ್ಕೆ ಧ್ವನಿಗೂಡಿಸಿದ ಮತ್ತೋರ್ವ ಸದಸ್ಯ ರೇವಣೆಪ್ಪ ಕೊಂಡಿಕೊಪ್ಪ ಕೂಡಲೇ ಈ ಕುರಿತು ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ತಕ್ಷಣವೇ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಮನೆಗಳ ನಿರ್ಮಾಣ: ಜಿಲ್ಲೆಯ ವಸತಿ ಯೋಜನೆಗಳ ಬಗ್ಗೆ ಬಹು ಮುಖ್ಯ ಪ್ರಶ್ನೆಯನ್ನು ಎತ್ತಿದ ಸದಸ್ಯ ರೇವಣೆಪ್ಪ ಈ ಕುರಿತು ಸಮಗ್ರ ಮಾಹಿತಿಯನ್ನು ನೀಡುವಂತೆ ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಸಿಇಒ ವೀರಣ್ಣ ತುರಮರಿ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ 48491 ಮನೆಗಳ ಮಂಜೂರಾಗಿದ್ದು, ಅವುಗಳಲ್ಲಿ 28672 ಮನೆಗಳು ಪೂರ್ಣಗೊಂಡಿದ್ದು, 14240 ಮನೆಗಳ ವಿವಿಧ ಹಂತದಲ್ಲಿವೆ. 3684 ಮನೆಗಳ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿಲ್ಲ. ಈ ಕುರಿತು ರಾಜೀವಗಾಂಧಿ ವಸತಿ ನಿಗಮದ ಅಧಿಕಾರಿಗಳಿಗೆ ಸರ್ಕಾರ ಸ್ಪಷ್ಟ ಸುತ್ತೋಲೆ ನೀಡಿದ್ದು, ಫೆಬ್ರವರಿ 15 ರೊಳಗಾಗಿ 2001 ರಿಂದ 2010 ರವರೆಗೆ ಪ್ರಾರಂಭವಾಗಿರುವ ಎಲ್ಲ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಮುಂದೆ ಅವರಿಗೆ ನೀಡಿದ ಹಣವನ್ನು ಮರಳಿ ವಸೂಲಿ ಮಾಡಲು ಸೂಚನೆ ನೀಡಿದ್ದಾರೆ ಎಂದರು.
ಆರೋಗ್ಯ ಇಲಾಖೆಯ ಬಗ್ಗೆ ಚರ್ಚೆ ನಡೆಯಿತು. ಸದಸ್ಯರು ಆರೋಗ್ಯ ಇಲಾಖೆ ಹಾಗೂ ಡಿಎಚ್ಒ ಡಾ. ಡಿ.ಬಿ. ಚೆನ್ನಶೆಟ್ಟಿ ಅವರ ಕಾರ್ಯ ವೈಖರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಜಿಪಂ ಸದಸ್ಯರಿಗೆ ಯಾವುದೇ ಮಾಹಿತಿಯನ್ನೇ ನೀಡುವುದಿಲ್ಲ ಎಂದು ಆರೋಪಿಸಿದರು.
ಕುಡಿವ ನೀರು: ಇನ್ನೇನು ಬೇಸಿಗೆ ಪ್ರಾರಂಭವಾಯಿತು. ಜಿಲ್ಲೆಯ ಪ್ರತಿಯೊಂದು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಶುದ್ಧ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಜಿಲ್ಲೆಯಲ್ಲಿ ಎಲ್ಲ ಶಾಲೆಗಳಲ್ಲಿಯೂ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ವಾಸ್ತವದಲ್ಲಿ ಶೇ. 10 ಶೌಚಾಲಯಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು. ಇನ್ನುಳಿದ ಶೇ. 90 ರಷ್ಟು ಶೌಚಾಲಯಗಳಿಗೆ ನೀರೇ ಇಲ್ಲ. ಈ ಬಗ್ಗೆ ಕೂಡಲೇ ಗಮನ ಹರಿಸಲು ಸದಸ್ಯ ಬೀರಪ್ಪ ಬಂಡಿ ಆಗ್ರಹಿಸಿದರು. ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡ್ರ ಒಂದು ವಾರದಲ್ಲಿ ಸಮಗ್ರ ವರದಿ ತಯಾರಿಸಿ ಮಾಹಿತಿ ನೀಡಲಾಗುವುದು ಎಂದರು. ಜಿಲ್ಲೆಯಲ್ಲಿ ಶಾಲಾ ಕಟ್ಟಡಗಳ ದುಸ್ಥಿತಿಗಳ ಬಗ್ಗೆ ಚರ್ಚೆ ನಡೆಯಿತು. ಕಳೆದ ಸಾಲಿನಲ್ಲಿ ಜಿಲ್ಲೆಯ 167 ಶಾಲೆಗಳ ದುರಸ್ತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಅದಕ್ಕೆ ಮಂಜೂರಾತಿ ದೊರೆತಿಲ್ಲ. ಪ್ರಸಕ್ತ ಸಾಲಿನ ಹೊಸ ಕ್ರಿಯಾಯೋಜನೆ ರೂಪಿಸಲಾಗುವುದು ಎಂದು ಡಿಡಿಪಿಐ ರಾಜೇಂದ್ರ ಪ್ರಸಾದ ಉತ್ತರಿಸಿದರು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷೆ ಕಮಲವ್ವ ಸಜ್ಜನ, ಉಪಾಧ್ಯಕ್ಷ ರಮೇಶ ಮುಂದಿನಮನಿ ಹಾಜರಿದ್ದರು.