ಬಿಸಿಯೂಟ ಸೇವಿಸಿ 80ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಸರ್ಕಾರಿ ಹಿರಿಯ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಬಿಸಿಯೂಟ ಸೇವಿಸಿ 80ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ.
ಮಧ್ಯಾಹ್ನ ಎಂದಿನಂತೆ ಮಕ್ಕಳು ಊಟ ಮಾಡಿದ್ದಾರೆ. ಆದರೆ, ಮಗುವೊಂದರ ತಟ್ಟೆಗೆ ಸಾರು ಹಾಕುತ್ತಿದ್ದಂತೆ ಅದರಲ್ಲಿ ಹಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಇಷ್ಟರೊಳಗೆ ಊಟ ಮಾಡಿದ್ದ ಹಲವಾರು ಮಕ್ಕಳು ಒಮ್ಮೆಲೇ ವಾಂತಿ ಮಾಡಿಕೊಳ್ಳಲು ಪ್ರಾರಂಭಿಸಿದ್ದಾರೆ.
ಇದರಿಂದ ಆತಂಕಗೊಂಡ ಶಾಲಾ ಶಿಕ್ಷಕರು ಹಾಗೂ ಗ್ರಾಮಸ್ಥರು ತಕ್ಷಣವೇ ವೈದ್ಯರಿಗೆ ಮಾಹಿತಿ ನೀಡಿ, ಖಾಸಗಿ ವಾಹನಗಳಲ್ಲಿ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ವೇಳೆ ಆ್ಯಂಬುಲೆನ್ಸ್ಗಳು ಸರಿಯಾದ ಸಮಯಕ್ಕೆ ಬರಲಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ಜರುಗಿತು.
ಅನಂತರ ನಿತ್ರಾಣಗೊಂಡಿದ್ದ 50ಕ್ಕೂ ಹೆಚ್ಚು ಮಕ್ಕಳನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ನೀಡಲಾಯಿತು. ಸದ್ಯ ಎಲ್ಲ ಮಕ್ಕಳ ಆರೋಗ್ಯ ಸ್ಥಿತಿ ಸುಧಾರಣೆಯಾಗಿದ್ದು, ಪಾಲಕರು ನಿಟ್ಟುಸಿರು ಬಿಡುವಂತಾಗಿದೆ.
ನಿರ್ಲಕ್ಷ್ಯವೇ ಕಾರಣ: ಅಡುಗೆ ತಯಾರಿಸುವ ಸಿಬ್ಬಂದಿ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಜಿಲ್ಲಾಸ್ಪತ್ರೆಯಲ್ಲಿ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು. ಅಡುಗೆ ತಯಾರಿಸುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೇ ಇರುವುದು ಇದಕ್ಕೆಲ್ಲ ಕಾರಣ. ಇನ್ನಾದರೂ ಶಿಕ್ಷಕರು ಹಾಗೂ ಅಡುಗೆ ತಯಾರಕರು ಹೆಚ್ಚಿನ ಗಮನ ನೀಡಬೇಕು ಎಂದು ಒತ್ತಾಯಿಸಿದರು.
ಬಿಇಒ ಭೇಟಿ: ವಿಷಯ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಭೇಟಿ ನೀಡಿದ ಮುಂಡರಗಿ ಬಿಇಒ ರಡ್ಡೇರ ಗ್ರಾಮಸ್ಥರ ಸಹಾಯದಿಂದ ಮಕ್ಕಳನ್ನು ತ್ವರಿತಗತಿಯಲ್ಲಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರು. ಘಟನೆ ಬಗ್ಗೆ ಅಡುಗೆ ತಯಾರಕರು, ಮುಖ್ಯ ಶಿಕ್ಷಕರು ಮತ್ತು ಗ್ರಾಮಸ್ಥರಿಂದ ಅಗತ್ಯ ಮಾಹಿತಿ ಕಲೆ ಹಾಕಿದರು. ಆದರೆ ಈ ಬಗ್ಗೆ ಯಾರ ಮೇಲೂ ಕ್ರಮ ತೆಗೆದುಕೊಳ್ಳಲಿಲ್ಲ.