ಬೇಡಿಕೆ ಈಡೇರದಿದ್ದಲ್ಲಿ ಮುಷ್ಕರ
ಗಜೇಂದ್ರಗಡ: ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದಲ್ಲಿ ರಾಜ್ಯಾದ್ಯಾಂತ ಹಂತ ಹಂತವಾಗಿ ಸೇವೆ ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುವುದು ಎಂದು ಸ್ಥಳೀಯ ಪೌರಸೇವಾ ನೌಕರ ಸೇವಾ ಸಂಘದ ಅಧ್ಯಕ್ಷ ಎಂ.ಬಿ. ಒಂಟಿ ಹೇಳಿದರು. ಈ ಕುರಿತು ಮಂಗಳವಾರ ಪ್ರಕಟಣೆ ನೀಡಿರುವ ಅವರು ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಪೌರಾಡಳಿತ ಸಚಿವರಿಗೆ ಮತ್ತು ನಗರಾಭಿವೃದ್ಧಿ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ, ಮೇ ತಿಂಗಳಲ್ಲಿ ಮುಷ್ಕರ ಕೈಗೊಳ್ಳಲು ಸಂಘ ತೀರ್ಮಾನಿಸಿತ್ತು. ಆದರೆ ನಗರಾಭಿವೃದ್ಧಿ ಇಲಾಖೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಡಲಾಗಿತ್ತು. ಆದರೆ ಇಲ್ಲಿಯವರೆಗೂ ಬೇಡಿಕೆ ಈಡೇರಿಲ್ಲ. ಜು. 15ರೊಳಗೆ ಬೇಡಿಕೆ ಈಡೇರದಿದ್ದಲ್ಲಿ ಕಾರ್ಯ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.