ವೈದ್ಯಕೀಯ ಸೀಟು ಕಡಿತಕ್ಕೆ ವಿರೋಧ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜೂ. 13
ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ 1650 ವೈದ್ಯಕೀಯ ಸೀಟುಗಳು ಕಡಿತಗೊಂಡಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಬ್ಬಳ್ಳಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.
ಭಾರತೀಯ ವೈದ್ಯಕೀಯ ಮಂಡಳಿ ಮೂಲಸೌಲಭ್ಯ ಹಾಗೂ ಸಿಬ್ಬಂದಿ ಕೊರತೆ ನೆಪ ಹೇಳಿ ರಾಜ್ಯದ 1650 ಹಾಗೂ ದೇಶದ 19 ಸಾವಿರ ವೈದ್ಯಕೀಯ ಸೀಟುಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಶರಣಬಸವ ಪಾಟೀಲ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಎಂಸಿಐ ತೆಗೆದುಕೊಂಡಿರುವನ್ನು ಪ್ರತಿಭಟನಾಕಾರರು ಖಂಡಿಸಿದರು.
ಎಂಸಿಐ ನೀತಿಯಿಂದ ನೂರಾರು ಬಡ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುವ ಆಸೆಯಿಂದ ವಂಚಿತಗೊಳ್ಳಲಿದ್ದಾರೆ. ರಾಜ್ಯದಲ್ಲಿರುವ ಸರ್ಕಾರಿ ಮೆಡಿಕಲ್ ಕಾಲೇಜು ಬೆಂಗಳೂರು, ಮೈಸೂರು, ಹುಬ್ಬಳ್ಳಿ ಮತ್ತು ಬಳ್ಳಾರಿ ಕಾಲೇಜುಗಳಿಂದ 250 ಹಾಗೂ ಇತರೆ ಖಾಸಗಿ ಕಾಲೇಜುಗಳಿಂದ 1400 ಸೀಟುಗಳನ್ನು ಕಡಿತಗೊಳಿಸಲಾಗಿದೆ. ಎಂಸಿಐ ಪ್ರಕಾರ ಮೂಲಸೌಕರ್ಯ ಸಮಸ್ಯೆಯಿಂದ ಸೀಟು ಕಡಿತಗೊಳಿಸಲಾಗಿದೆ ಎನ್ನಲಾಗುತ್ತಿದೆ. ಈ ನಡುವೆ ರಾಜ್ಯ ಸರ್ಕಾರ ಪ್ರತಿ ಸಲದ ಬಜೆಟ್‌ನಲ್ಲಿ ನೂರಾರು ಕೋಟಿ ಸರ್ಕಾರಿ ಮೆಡಿಕಲ್ ಕಾಲೇಜುಗಳಿಗೆ ಸೌಲಭ್ಯಕ್ಕಾಗಿ ಹಣ ಬಿಡುಗಡೆ ಮಾಡುತ್ತಲೇ ಇದೆ. ಹೀಗಿರುವಾಗ ಅಭಿವೃದ್ಧಿ ಕಾರ್ಯವೇಕೆ ಆಗುತ್ತಿಲ್ಲ, ಅನುದಾನ ಏನಾಗಿದೆ ಎಂಬ ಪ್ರಶ್ನೆ ಉದ್ಭವಿಸುತ್ತಿದೆ. ಬಿಡುಗಡೆಯಾಗಿರುವ ಅನುದಾನ ಸದ್ಭಳಕೆಯಾಗುವಂತೆ ನೋಡಿಕೊಳ್ಳುವುದು ವೈದ್ಯಕೀಯ ಶಿಕ್ಷಣ ಸಚಿವರ ಜವಾಬ್ದಾರಿ. ಅದನ್ನು ಬಿಟ್ಟು ಸೌಲಭ್ಯವಿಲ್ಲದ ಕಾರಣ ಸೀಟು ಕಡಿತಗೊಳಿಸಲಾಗಿದೆ ಎಂದು ಸಬೂಬು ಹೇಳಿ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ. ಸೀಟು ಕಡಿತಗೊಳ್ಳಲು ಸರ್ಕಾರವೇ ನೇರ ಹೊಣೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು.
ರಾಜ್ಯ ಸರ್ಕಾರ ಈ ಕೂಡಲೇ ಕೇಂದ್ರ ಸರ್ಕಾರಕ್ಕೆ ಪರಿಸ್ಥಿತಿಯ ಮನವರಿಕೆ ಮಾಡಿಸಿಕೊಟ್ಟು ಬಡ ವಿದ್ಯಾರ್ಥಿಗಳಿಗೆ ಪುನಃ ಸೀಟು ಸಿಗುವಂತೆ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಿದ್ದು ಸಾಲಿಮಠ, ಸುಚಿತ ಬುಳ್ಳಾನವರ, ಮನೋಹರ ಜಮಾದಾರ, ವೀರೇಶ, ಗುರುನಾಥ, ಪ್ರಥ್ವಿ ಕುಮಾರ, ಬಸವೇಶ ಕೋರಿ ಮತ್ತಿತರರಿದ್ದರು.