ಹನುಮನಮಟ್ಟಿ ಬಳಿ ಮೆಣಸಿನಕಾಯಿ ತಳಿ ಅಭಿವೃದ್ಧಿ ಪಾರ್ಕ್ ನಿರ್ಮಾಣ
ಗದಗ: ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಹನುಮನಮಟ್ಟಿ ಸಮೀಪದಲ್ಲಿ ರು. 25 ಕೋಟಿ ವೆಚ್ಚದಲ್ಲಿ ಬ್ಯಾಡಗಿ ಮೆಣಸಿನಕಾಯಿ ತಳಿ ಅಭಿವೃದ್ಧಿ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಹಾವೇರಿ-ಗದಗ ಸಂಸದ ಶಿವಕುಮಾರ ಉದಾಸಿ ಹೇಳಿದರು.
ಅವರು ಶುಕ್ರವಾರ ನಗರದಲ್ಲಿರುವ ಅವರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬ್ಯಾಡಗಿ ಮೆಣಸಿನಕಾಯಿ ತಳಿ ಅಭಿವೃದ್ಧಿ ಮತ್ತು ಅದನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಈ ಪಾರ್ಕ್ ಸಹಕಾರಿಯಾಗಲಿದೆ. ಇಲ್ಲಿ ಮೆಣಸಿನಕಾಯಿಗೆ ಸಂಬಂಧಿಸಿದ ಹಲವಾರು ನೂತನ ಕಾರ್ಯಗಳು ನಡೆಯಲಿವೆ ಎಂದರು.
ಬೆಳೆವಿಮೆ ಕಂತು ತುಂಬುವ ಗೊಂದಲದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಮುಂಗಾರು ವಿಳಂಬವಾಗುವ ಸೂಚನೆ ಹವಾಮಾನ ಇಲಾಖೆ ನೀಡಿದೆ. ಆದರೆ ರಾಜ್ಯ ಸರ್ಕಾರ ರೈತರಿಗೆ ಬೆಳೆವಿಮೆ ಕಂತು ಭರಿಸಲು ಜೂ. 30 ಕೊನೆಯ ದಿನ ಎಂದು ಘೋಷಿಸಿದೆ. ರೈತರು ಬಿತ್ತನೆ ಮಾಡದೆ ವಿಮೆ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಅವಧಿ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಈ ಕುರಿತು ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಚರ್ಚಿಸಿದ್ದೇನೆ ಎಂದರು.
ಗದಗ ನಗರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಮಾಡುವ ನಿಟ್ಟಿನಲ್ಲಿ 10 ಎಕರೆ ಜಮೀನು ನೀಡಲು ಜಿಲ್ಲಾಡಳಿತ ಸಿದ್ಧವಾದಲ್ಲಿ ಕೂಡಲೇ ಈ ಕಾರ್ಯಕ್ಕೆ ಚಾಲನೆ ದೊರೆಯಲಿದೆ. ಈ ಕುರಿತು ಶೀಘ್ರದಲ್ಲಿಯೇ ಜಿಲ್ಲಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸುತ್ತೇನೆ.
ಕೈಗಾ, ಕಾರವಾರ, ಬಂಕಾಪುರ, ಗದಗ, ಇಳಕಲ್ಲ ನಗರಗಳಲ್ಲಿ ಈಗಾಗಲೇ ರಾಜ್ಯ ಹೆದ್ದಾರಿಗಳಾಗಿದ್ದು, ಕೇಂದ್ರ ಸರ್ಕಾರ ವಿಶೇಷ ಯೋಜನೆಯಡಿ 3 ಮುಖ್ಯ ರಾಷ್ಟ್ರೀಯ ಹೆದ್ದಾರಿಗಳನ್ನು ಜೋಡಿಸುವ ಮೂಲಕ ಇವುಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಪರಿವರ್ತಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಈ ಕುರಿತು ಈಗಾಗಲೇ ಸಮೀಕ್ಷೆ ನಡೆಯುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ, ಎಂ.ಎಸ್. ಕರಿಗೌಡ್ರ, ಎಂ.ಎಂ. ಹಿರೇಮಠ ಮತ್ತಿತರರಿದ್ದರು.